
ಗದಗ, 21 ನವೆಂಬರ್ (ಹಿ.ಸ.)
ರಾಜ್ಯದಲ್ಲಿ ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ ಹಾಗೂ ಮುಖ್ಯಮಂತ್ರಿ ಗ್ರಾಮೀಣಾಭಿವೃದ್ಧಿ ಯೋಜನೆಯಡಿ ₹16,000 ಕೋಟಿ ಅನುದಾನ ನೀಡಲಾಗಿದೆ. ಈ ಪೈಕಿ ಗದಗ ಜಿಲ್ಲೆಗೆ ₹250 ಕೋಟಿ ಅನುದಾನ ಸಿಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಗದಗ ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹದಗೆಟ್ಟ ರಸ್ತೆ, ಮಣ್ಣಿನ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಮೂರು ಸಲ ತಪಾಸಣೆ ನಡೆಸಿ, ಆಡಿಟ್ ಮಾಡಿಸಿ ರಸ್ತೆ ಗುಣಮಟ್ಟ ಪರೀಕ್ಷಿಸುವುದಲ್ಲದೆ ಮೂರು ವರ್ಷ ನಿರ್ವಹಣೆ ಜವಾಬ್ದಾರಿಯನ್ನು ಗುತ್ತಿಗೆದಾರರಿಗೆ ವಹಿಸಲಾಗುತ್ತದೆ’ ಎಂದರು.
‘15 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಜಿಪಂ ಸಿಇಒಗೆ ಆಡಳಿತಾತ್ಮಕ ಅನುಮೋದನೆಯ ಅಧಿಕಾರ ನೀಡಲಾಗಿದೆ. ಕೆಆರ್ಐಡಿಎಲ್ ಹಾಗೂ ನಿರ್ಮಿತಿ ಕೇಂದ್ರಗಳ ಮೂಲಕ ಸಿಸಿರಸ್ತೆ, ಚರಂಡಿ, ಕುಡಿಯುವ ನೀರಿನ ಪೂರೈಕೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಸರ್ಕಾರದಲ್ಲಿ ದುಡ್ಡಿನ ಕೊರತೆ ಇಲ್ಲ, ಸಮರ್ಥವಾಗಿ ಬರ ಪರಿಸ್ಥಿತಿ ನಿಭಾಯಿಸಲಾಗುತ್ತದೆ’ ಎಂದು ಹೇಳಿದರು.
‘ವಿಬಿಜಿ ರಾಮ್ ಜಿ ಯೋಜನೆಯಡಿ 375 ಕಾಮಗಾರಿಗಳನ್ನು ನಡೆಸಲು ಅವಕಾಶವಿದೆ. ಆದರೆ, ಜಿಲ್ಲೆಯಲ್ಲಿ ಹೆಚ್ಚು ಮಾನವ ದಿನಗಳ ಸೃಜನೆ ಆಗಿಲ್ಲ. ಗ್ರಾಮಸಭೆ ನಡೆಸಿ ಜನರಲ್ಲಿ ಅರಿವು ಮೂಡಿಸಲು ಸೂಚಿಸಿದ್ದೇನೆ.
9 ತಿಂಗಳಿಗೆ ₹9,000 ಮೀಸಲಿರಿಸಲಾಗಿದ್ದು, ತಿಂಗಳಿಗೆ ₹1,000 ಕೋಟಿ ಖರ್ಚು ಮಾಡಲು ಅವಕಾಶವಿದೆ.
ರಾಜ್ಯದಲ್ಲಿ 15ರಿಂದ 16 ಲಕ್ಷ ಬಸ್ ತಂಗುದಾಣಗಳನ್ನು ನಿರ್ಮಿಸುವ ಯೋಜನೆ ರೂಪಿಸಿದ್ದು, ಜಿಲ್ಲೆಯಲ್ಲಿ ಕನಿಷ್ಠ 50 ತಂಗುದಾಣಗಳನ್ನು ನಿರ್ಮಿಸಬೇಕು’ ಎಂದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP