ಹೋರಾಟ ಕೈಬಿಡುವಂತೆ ಆಶಾ ಕಾರ್ಯಕರ್ತೆಯರಲ್ಲಿ ಡಿ.ಕೆ. ಶಿವಕುಮಾರ್ ಮನವಿ
ಬೇಡಿಕೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಸರ್ಕಾರ ಬದ್ಧ; ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ಕ್ರಮದ ಭರವಸೆ
ಸಿಎಂ ಡಿ.ಕೆ. ಶಿವಕುಮಾರ್


ಬೆಂಗಳೂರು, 21 ನವೆಂಬರ್ (ಹಿ.ಸ.):

ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು ಪ್ರತಿಭಟನೆಯನ್ನು ಕೈಬಿಟ್ಟು ಸರ್ಕಾರದ ಮನವಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಆಶಾ ಕಾರ್ಯಕರ್ತೆಯರು ತಮ್ಮ ಕುಟುಂಬದವರನ್ನು ಬಿಟ್ಟು ಹಗಲು-ರಾತ್ರಿ ಎನ್ನದೆ ಹೋರಾಟ ನಡೆಸುತ್ತಿರುವ ನೋವು ಮತ್ತು ಸಂಕಷ್ಟ ಅರ್ಥವಾಗುತ್ತದೆ. ಅವರು ಕೇವಲ ಆಶಾ ಕಾರ್ಯಕರ್ತೆಯರಲ್ಲ, ತಮ್ಮ ಸಹೋದರಿಯರಿದ್ದಂತೆ ಎಂದು ಭಾವನಾತ್ಮಕವಾಗಿ ತಿಳಿಸಿದ್ದಾರೆ.

ಅಂಗನವಾಡಿಗಳ ಸ್ಥಾಪನೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆರಂಭ ಹಾಗೂ ಆಶಾ ಕಾರ್ಯಕರ್ತೆಯರ ಹುದ್ದೆಗಳ ಸೃಷ್ಟಿಯ ಮೂಲಕ ಮಹಿಳೆಯರು ಮತ್ತು ಆರೋಗ್ಯ ಕ್ಷೇತ್ರದ ಕಾರ್ಯಕರ್ತೆಯರಿಗೆ ಸೇವೆ ಸಲ್ಲಿಸುವ ಅವಕಾಶ ಕಲ್ಪಿಸಿದ್ದು ಕಾಂಗ್ರೆಸ್ ಸರ್ಕಾರ ಎಂದು ಅವರು ಹೇಳಿದ್ದಾರೆ.

ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಮುಂದಿನ ದಿನಗಳಲ್ಲಿ ಸಮಗ್ರ ಹಾಗೂ ಶಾಶ್ವತ ಪರಿಹಾರ ಒದಗಿಸಲು ಸರ್ಕಾರ ಚಿಂತನೆ ನಡೆಸಿದೆ. ಸಚಿವ ಸಂಪುಟದೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರ ಸಿದ್ಧವಿದೆ ಎಂದು ಭರವಸೆ ನೀಡಿದ್ದಾರೆ.

ಒಬ್ಬ ಅಣ್ಣನಾಗಿ ಮನವಿ ಮಾಡಿಕೊಳ್ಳುತ್ತಿದ್ದು, ತಮ್ಮ ಮನವಿಗೆ ಸ್ಪಂದಿಸಿ ಹೋರಾಟವನ್ನು ಕೈಬಿಡಬೇಕು. ಆಶಾ ಕಾರ್ಯಕರ್ತೆಯರ ಸೇವೆ, ಶ್ರಮ ಮತ್ತು ತ್ಯಾಗವನ್ನು ಸರ್ಕಾರ ಗೌರವಿಸುತ್ತದೆ. ಅವರ ಬೇಡಿಕೆಗಳಿಗೆ ಸ್ಪಂದಿಸಿ ಸೂಕ್ತ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande