ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅರ್ಹರು ಹೆಸರು ನೋಂದಾಯಿಸಿಕೊಳ್ಳಲು: ಡಿಸಿ ಸೂಚನೆ
ಗದಗ, 21 ನವೆಂಬರ್ (ಹಿ.ಸ.) ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2027ರ ವಿವಿಧ ಚಟುವಟಿಕೆಗಳನ್ನು ನಿಗದಿತ ಕಾಲಮಿತಿಯೊಳಗೆ ಕೈಗೊಳ್ಳಲು ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು. ನಗರದ ಜಿಲ್ಲಾಡಳಿತ ಭವನದ ಜಿಲ್ಲಾ
ಫೋಟೋ


ಗದಗ, 21 ನವೆಂಬರ್ (ಹಿ.ಸ.)

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2027ರ ವಿವಿಧ ಚಟುವಟಿಕೆಗಳನ್ನು ನಿಗದಿತ ಕಾಲಮಿತಿಯೊಳಗೆ ಕೈಗೊಳ್ಳಲು ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2027ರ ಚಟುವಟಿಕೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2027ರ ಅಂಗವಾಗಿ 2027ರ ಜನವರಿ 1 ಅರ್ಹತಾ ದಿನಾಂಕವಾಗಿದ್ದು, ನವೆಂಬರ್ 23, 2026ರಂದು ಮತಗಟ್ಟೆಗಳ ಪುನರ್ವಿಂಗಡಣೆ ಕಾರ್ಯ ಕೈಗೊಳ್ಳಲಾಗುತ್ತದೆ. ಡಿಸೆಂಬರ್ 1, 2026ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತಿದ್ದು, ಅದೇ ದಿನದಿಂದ ಡಿಸೆಂಬರ್ 31ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಲ್ಲಿಕೆಯಾದ ಹಕ್ಕು ಮತ್ತು ಆಕ್ಷೇಪಣೆಗಳನ್ನು 2027ರ ಜನವರಿ 14ರೊಳಗೆ ವಿಲೇವಾರಿ ಮಾಡಲಾಗುವುದು. ನಂತರ ಜನವರಿ 20, 2027ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ ಮಾಡಿಕೊಳ್ಳುವುದು, ಮೃತಪಟ್ಟ ಅಥವಾ ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ತೆಗೆದುಹಾಕುವುದು ಹಾಗೂ ಹೆಸರು ಮತ್ತು ವಿಳಾಸದಲ್ಲಿನ ಬದಲಾವಣೆಗಳನ್ನು ಮಾಡಿಕೊಳ್ಳಲು ಭಾರತ ಚುನಾವಣಾ ಆಯೋಗವು ಅರ್ಜಿಗಳನ್ನು ನಿಗದಿಪಡಿಸಿದೆ ಎಂದರು.

ಹೊಸದಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ನಮೂನೆ-6ರಲ್ಲಿ ಅರ್ಜಿ ಸಲ್ಲಿಸಬೇಕು. ಮೃತಪಟ್ಟ ಅಥವಾ ಸ್ಥಳಾಂತರಗೊಂಡ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲು ನಮೂನೆ-7ರಲ್ಲಿ ಅರ್ಜಿ ಸಲ್ಲಿಸಬೇಕು. ಅದೇ ರೀತಿ, ಮತದಾರರ ಹೆಸರು ಅಥವಾ ವಿಳಾಸದಲ್ಲಿನ ತಿದ್ದುಪಡಿ ಮಾಡಿಕೊಳ್ಳಲು ಹಾಗೂ ಒಂದು ವಾರ್ಡ್ನಿಂದ ಮತ್ತೊಂದು ವಾರ್ಡ್ಗೆ ಮತದಾನದ ಹಕ್ಕನ್ನು ವರ್ಗಾಯಿಸಿಕೊಳ್ಳಲು ನಮೂನೆ-8ರಲ್ಲಿ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದರು.

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿದಾರರು ಕಡ್ಡಾಯವಾಗಿ ಭಾರತದ ಪ್ರಜೆಯಾಗಿರಬೇಕು. ಅಲ್ಲದೆ, ಸಂಬಂಧಪಟ್ಟ ಮತಗಟ್ಟೆ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರಬೇಕು. ಅರ್ಹ ಮತದಾರರು ನಿಗದಿತ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆ ಮಾಡಿಕೊಳ್ಳಬೇಕು. ಈಗಾಗಲೇ ನೋಂದಾಯಿತವಾಗಿರುವ ಹೆಸರು, ವಿಳಾಸ ಸೇರಿದಂತೆ ಇತರೆ ವಿವರಗಳಲ್ಲಿ ಬದಲಾವಣೆ ಅಥವಾ ತಿದ್ದುಪಡಿ ಅಗತ್ಯವಿದ್ದಲ್ಲಿ ಸರಿಪಡಿಸಿಕೊಳ್ಳಬೇಕು ಎಂದು ಹೇಳಿದರು.

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅರ್ಹ ಮತದಾರರು ಸಕ್ರಿಯವಾಗಿ ಪಾಲ್ಗೊಂಡು, ಕರಡು ಮತದಾರರ ಪಟ್ಟಿಯನ್ನು ಪರಿಶೀಲಿಸಬೇಕು. ಪಟ್ಟಿಯಲ್ಲಿ ಹೆಸರು ಇಲ್ಲದ ಅರ್ಹರು ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬೇಕು. ಹೆಸರು, ವಿಳಾಸ ಸೇರಿದಂತೆ ಇತರೆ ವಿವರಗಳಲ್ಲಿ ತಪ್ಪುಗಳಿದ್ದಲ್ಲಿ ನಿಗದಿತ ನಮೂನೆಗಳಲ್ಲಿ ತಿದ್ದುಪಡಿಗೆ ಅರ್ಜಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯನ್ನು ದೋಷರಹಿತಗೊಳಿಸಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೆಶ್ ಕೆ.ಆರ್., ಉಪವಿಭಾಗಾಧಿಕಾರಿ ಗಂಗಪ್ಪ ಎಂ ಸೇರಿದಂತೆ ವಿವಿಧ ಪಕ್ಷಗಳ ಪ್ರತಿನಿಧಿಗಳು, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande