
ಗದಗ, 21 ನವೆಂಬರ್ (ಹಿ.ಸ.)
ಗದಗ ಜಿಲ್ಲೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕೆರೆಗಳ ಒತ್ತುವರಿಯನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಬೇಕು. ಈ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಅಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಗುರುತಿಸಿ, ಅವುಗಳ ಒತ್ತುವರಿ ತೆರವುಗೊಳಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು. ಕೆರೆಗಳ ಸಂರಕ್ಷಣೆಗೆ ಅಧಿಕಾರಿಗಳು ಆದ್ಯತೆ ನೀಡಬೇಕು. ಈ ವಿಚಾರದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ಮುಲಾಜಿಗೆ ಅವಕಾಶವಿಲ್ಲ ಎಂದು ತಾಕೀತು ಮಾಡಿದರು.
ಇದೇ ಸಭೆಯಲ್ಲಿ ಶಿರಹಟ್ಟಿ ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆ ಕುರಿತು ಬಿಜೆಪಿ ಶಾಸಕ ಚಂದ್ರು ಲಮಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಶಿರಹಟ್ಟಿ ತಾಲೂಕಿನ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಜನರು ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದೆ. ಆದರೆ, ಹಣಕಾಸಿನ ಸಮಸ್ಯೆ ಇದೆ ಎಂದು ಸರ್ಕಾರದಿಂದ ಪತ್ರ ಬಂದಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಈಶ್ವರ ಖಂಡ್ರೆ, ಸರ್ಕಾರದಲ್ಲಿ ಹಣಕಾಸಿನ ಸಮಸ್ಯೆ ಇಲ್ಲ. ಈಗಾಗಲೇ ಶಿರಹಟ್ಟಿ ವಿಧಾನಸಭಾ ಕ್ಷೇತ್ರಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಆದರೆ, ಬಿಡುಗಡೆಯಾದ ಅನುದಾನಕ್ಕೆ ಇನ್ನೂ ಕ್ರಿಯಾಯೋಜನೆ ಸಿದ್ಧಪಡಿಸಿಲ್ಲ. ಮೊದಲು ಬಿಡುಗಡೆಯಾದ ಒಂದು ಕೋಟಿ ರೂಪಾಯಿ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿದ ಬಳಿಕ ಮತ್ತಷ್ಟು ಅನುದಾನ ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಇನ್ನು ಸಭೆಯನ್ನು ಕೇವಲ 45 ನಿಮಿಷಗಳಲ್ಲಿ ಮುಕ್ತಾಯಗೊಳಿಸಿದ್ದಕ್ಕೆ ಶಾಸಕ ಚಂದ್ರು ಲಮಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕ್ಷೇತ್ರದ ಹಲವು ಪ್ರಮುಖ ಸಮಸ್ಯೆಗಳ ಕುರಿತು ಚರ್ಚಿಸಲು ಹೆಚ್ಚಿನ ಅವಕಾಶ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕ್ಷೇತ್ರದ ಜನರ ಕುಡಿಯುವ ನೀರು ಸೇರಿದಂತೆ ವಿವಿಧ ಮೂಲಸೌಕರ್ಯ ಸಮಸ್ಯೆಗಳ ಕುರಿತು ಅನುದಾನದ ಬೇಡಿಕೆ ಮಂಡಿಸಿದರೆ ಸರ್ಕಾರದ ಆರ್ಥಿಕ ಪರಿಸ್ಥಿತಿಯ ವಾಸ್ತವಾಂಶ ಬಯಲಾಗುತ್ತದೆ ಎಂಬ ಕಾರಣಕ್ಕೆ ಚರ್ಚೆಗೆ ಹೆಚ್ಚಿನ ಅವಕಾಶ ನೀಡುತ್ತಿಲ್ಲವೇ ಎಂಬ ಪ್ರಶ್ನೆಯನ್ನೂ ಎತ್ತಿದರು.
ಒಂದೆಡೆ ಕೆರೆ ಒತ್ತುವರಿ ತೆರವಿಗೆ ಸಚಿವರ ಖಡಕ್ ಸೂಚನೆ, ಮತ್ತೊಂದೆಡೆ ಕುಡಿಯುವ ನೀರಿನ ಸಮಸ್ಯೆ ಹಾಗೂ ಅನುದಾನದ ವಿಚಾರವಾಗಿ ಆಡಳಿತ ಮತ್ತು ವಿರೋಧ ಪಕ್ಷದ ಶಾಸಕರ ನಡುವೆ ಸಭೆಯಲ್ಲಿ ಅಸಮಾಧಾನ ವ್ಯಕ್ತವಾಗಿರುವುದು ಗಮನ ಸೆಳೆಯಿತು.
---------------
ಹಿಂದೂಸ್ತಾನ್ ಸಮಾಚಾರ್ / lalita MP