
ವಿಜಯಪುರ, 21 ನವೆಂಬರ್ (ಹಿ.ಸ.)
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ಫಲಾನುಭವಿಗಳ ವತಿಯಿಂದ ಇಂದು ಬಬಲೇಶ್ವರ ಪಟ್ಟಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ವಿಜಯಪುರ ಸಂಸದ ರಮೇಶ ಜಿಗಜಿಣಗಿ , ಕೇಂದ್ರ ಸರ್ಕಾರ ರೈತರ ಹಿತದೃಷ್ಟಿಯಿಂದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲೂ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯು ಪ್ರಕೃತಿ ವಿಕೋಪ, ಅತಿವೃಷ್ಟಿ, ಅನಾವೃಷ್ಟಿ ಸೇರಿದಂತೆ ವಿವಿಧ ಕಾರಣಗಳಿಂದ ಬೆಳೆ ನಷ್ಟ ಅನುಭವಿಸುವ ರೈತರಿಗೆ ಆರ್ಥಿಕ ನೆರವು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು.
ರೈತರ ಬೆಳೆಗಳಿಗೆ ವಿಮಾ ರಕ್ಷಣೆ ಒದಗಿಸುವ ಮೂಲಕ ಕೃಷಿ ಕ್ಷೇತ್ರದಲ್ಲಿ ರೈತರಿಗೆ ಆತ್ಮವಿಶ್ವಾಸ ತುಂಬುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಮಾಡುತ್ತಿದೆ. ಸರ್ಕಾರದ ರೈತಪರ ಯೋಜನೆಗಳಿಂದ ಫಲಾನುಭವಿಗಳಿಗೆ ದೊರೆಯುತ್ತಿರುವ ಪ್ರಯೋಜನಗಳನ್ನು ಗುರುತಿಸಿ, ಫಲಾನುಭವಿಗಳು ಪ್ರಧಾನಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿರುವುದು ಸಂತಸದ ಸಂಗತಿಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಫಲಾನುಭವಿಗಳು, ರೈತರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande