
ದುಬೈ, 21 ನವೆಂಬರ್ (ಹಿ.ಸ.):
ಜಗತ್ತಿನ ಯಾವುದೇ ಮೂಲೆಯಲ್ಲಿದ್ದರೂ ಭಾರತದ ಸಂಸ್ಕೃತಿ, ಮೌಲ್ಯಗಳು ಮತ್ತು ಕನಸುಗಳನ್ನು ಎದೆಯುಬ್ಬಿಸಿ ಕೊಂಡೊಯ್ಯುವ ಅನಿವಾಸಿ ಭಾರತೀಯರನ್ನು ಭೇಟಿಯಾಗುವುದು ಸಂತಸದ ಕ್ಷಣ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ದುಬೈನಲ್ಲಿ ನಡೆದ ಭಾರತೀಯ ಸಮುದಾಯದ ಸ್ವಾಗತ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರು ಭಾಗವಹಿಸಿರುವುದು ವಿಶೇಷ ಸಂತಸ ತಂದಿದೆ ಎಂದರು.
ಭಾರತ ಮತ್ತು ಯುಎಇ ನಡುವಿನ ಸ್ನೇಹ ಹಾಗೂ ಬಾಂಧವ್ಯದ ಸೇತುವೆಯನ್ನು ಗಟ್ಟಿಗೊಳಿಸುವಲ್ಲಿ ಅನಿವಾಸಿ ಭಾರತೀಯರ ಕೊಡುಗೆ ಅಪಾರವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತದ ಶಿಕ್ಷಣ ಮತ್ತು ಆರ್ಥಿಕ ಕ್ಷೇತ್ರಗಳಲ್ಲಿ ವೇಗದ ಬದಲಾವಣೆಗಳು ನಡೆಯುತ್ತಿವೆ ಎಂದು ತಿಳಿಸಿದರು.
ಯುಎಇಯೊಂದಿಗೆ ವಿಸ್ತರಿಸುತ್ತಿರುವ ಶೈಕ್ಷಣಿಕ ಸಂಬಂಧಗಳು ಉನ್ನತ ಶಿಕ್ಷಣ, ಸಂಶೋಧನೆ, ನಾವೀನ್ಯತೆ ಮತ್ತು ಕೌಶಲ್ಯಾಭಿವೃದ್ಧಿ ಕ್ಷೇತ್ರಗಳಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಲಿವೆ. ಭಾರತವು ತನ್ನ ಅನಿವಾಸಿ ಭಾರತೀಯರೊಂದಿಗೆ ಸದಾ ಭಾವನಾತ್ಮಕ ಸಂಬಂಧ ಹೊಂದಿದ್ದು, ಉಭಯ ದೇಶಗಳ ಬಾಂಧವ್ಯವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವಲ್ಲಿ ಅವರ ಪಾತ್ರ ಅಮೂಲ್ಯವಾಗಿದೆ ಎಂದು ಪ್ರಹ್ಲಾದ ಜೋಶಿ ಅವರು ಎಕ್ಸ್ನಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.