ಜೆಜೆಎಂ, ಖಾತ್ರಿ ಯೋಜನೆ ಅನುಷ್ಠಾನದಲ್ಲಿ ನಿರ್ಲಕ್ಷ್ಯ ಸಹಿಸಲ್ಲ: ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ
ಗದಗ, 21 ನವೆಂಬರ್ (ಹಿ.ಸ.) ಗದಗ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಕಂಡುಬಂದಿರುವ ಹಿನ್ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರು, ಕುಡಿಯುವ ನೀರು, ವಿಬಿಜಿರಾಮ್ ಜಿ ಯೋಜನ
ಫೋಟೋ


ಗದಗ, 21 ನವೆಂಬರ್ (ಹಿ.ಸ.)

ಗದಗ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಕಂಡುಬಂದಿರುವ ಹಿನ್ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರು, ಕುಡಿಯುವ ನೀರು, ವಿಬಿಜಿರಾಮ್ ಜಿ ಯೋಜನೆ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ಸಚಿವ ಈಶ್ವರ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಲಕ್ಷ್ಮೇಶ್ವರ ತಾಲೂಕಿನಲ್ಲಿ ಕುಡಿಯುವ ನೀರಿನ ಪೂರೈಕೆ ಸಮರ್ಪಕವಾಗಿ ನಡೆಯುತ್ತಿಲ್ಲ. ತಮ್ಮ ಕ್ಷೇತ್ರದ ಗ್ರಾಮಗಳಿಗೆ ಡಿಬಿಒಟಿ ಮೂಲಕ ನೀರು ಪೂರೈಸುವ ವ್ಯವಸ್ಥೆಯಲ್ಲಿಯೂ ಸಮಸ್ಯೆಗಳಿವೆ. ಸುಮಾರು 120 ಗ್ರಾಮಗಳಿಗೆ ಜೆಜೆಎಂ ಯೋಜನೆಯಡಿ ನೀರು ಪೂರೈಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡುತ್ತಿದ್ದರೂ, ವಾಸ್ತವದಲ್ಲಿ ಜನರಿಗೆ ಸಮರ್ಪಕವಾಗಿ ನೀರು ತಲುಪುತ್ತಿಲ್ಲ ಎಂದು ಶಾಸಕ ಡಾ. ಚಂದ್ರು ಲಮಾಣಿ ಸಭೆಯಲ್ಲಿ ಆರೋಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಖಂಡ್ರೆ ಅವರು, ಅಧಿಕಾರಿಗಳು ಹಾಗೂ ಶಾಸಕರು ಜಂಟಿಯಾಗಿ ಸ್ಥಳಗಳಿಗೆ ಭೇಟಿ ನೀಡಿ ಕಾಮಗಾರಿಗಳ ಸ್ಥಿತಿಗತಿ ಪರಿಶೀಲಿಸಬೇಕು. ಜಿಪಂ ಸಿಇಒ ಅವರು ತೃತೀಯ ವ್ಯಕ್ತಿ ಸಂಸ್ಥೆಯಿಂದಲೂ ಪರಿಶೀಲನೆ ನಡೆಸಿ ವಾಸ್ತವಿಕ ವರದಿ ಸಲ್ಲಿಸುವಂತೆ ಸೂಚಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾವಿರಾರು ಕೋಟಿ ರೂ. ಅನುದಾನ ಒದಗಿಸಿ ಜಲಜೀವನ್ ಮಿಷನ್ ಮೂಲಕ ಗ್ರಾಮೀಣ ಪ್ರದೇಶದ ಪ್ರತಿ ಕುಟುಂಬಕ್ಕೂ ಕುಡಿಯುವ ನೀರು ಒದಗಿಸುವ ಉದ್ದೇಶ ಹೊಂದಿವೆ. ಇಷ್ಟೊಂದು ಅನುದಾನ ವೆಚ್ಚವಾಗುತ್ತಿದ್ದರೂ ಜನರಿಗೆ ನೀರು ತಲುಪದಿರುವುದು ಸರಿಯಲ್ಲ. ಅಧಿಕಾರಿಗಳು ಹೆಚ್ಚು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿ ಪ್ರತಿಯೊಂದು ಮನೆಗೂ ಸಮರ್ಪಕವಾಗಿ ನೀರು ತಲುಪುವಂತೆ ನೋಡಿಕೊಳ್ಳಬೇಕು ಎಂದು ತಾಕೀತು ಮಾಡಿದರು.

ಖಾತ್ರಿ ಯೋಜನೆಯ ಪ್ರಗತಿಗೆ ಅಸಮಾಧಾನ

ನೂತನ ಖಾತ್ರಿ ಯೋಜನೆಯ ಅನುಷ್ಠಾನದಲ್ಲಿ ಜಿಲ್ಲೆಯಲ್ಲಿ ಕೇವಲ ಶೇ.27ರಷ್ಟು ಪ್ರಗತಿಯಾಗಿರುವುದಕ್ಕೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದರು. ಪ್ರಗತಿ ಕುಂಠಿತವಾಗಲು ನಿಖರ ಕಾರಣಗಳೇನು? ಯಾವ ಸಮಸ್ಯೆಗಳು ಎದುರಾಗಿವೆ ಎಂಬುದನ್ನು ಸ್ಪಷ್ಟವಾಗಿ ತಿಳಿಸಬೇಕು ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಯಳವತ್ತಿ, ಹೆಸರೂರು ಹಾಗೂ ಚಿಕ್ಕಮಣ್ಣೂರು ಗ್ರಾಮ ಪಂಚಾಯಿತಿಗಳಲ್ಲಿ ಯೋಜನೆಯ ಪ್ರಗತಿ ಕಡಿಮೆ ಇರುವುದನ್ನು ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಂಬಂಧಪಟ್ಟ ಅಧಿಕಾರಿಗಳು, ಸುಮಾರು 1,900 ಕೂಲಿ ಕಾರ್ಮಿಕರು ಸೋಮವಾರದಿಂದ ಕೆಲಸಕ್ಕೆ ಹಾಜರಾಗಲಿದ್ದು, ಹಿಂದಿನ ಅವಧಿಯ ವೇತನ ಬಾಕಿ ಇದ್ದ ಕಾರಣ ಪ್ರಗತಿ ಕುಂಠಿತವಾಗಿದೆ ಎಂದು ತಿಳಿಸಿದರು.

ಸಭೆಗೆ ತಪ್ಪು ಅಥವಾ ಸುಳ್ಳು ಮಾಹಿತಿ ನೀಡಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ಎಚ್ಚರಿಸಿದರು.

ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿಸಲು ಜಾಬ್ ಮೇಳಗಳನ್ನು ಆಯೋಜಿಸುವಂತೆ ಈ ಹಿಂದೆಯೇ ವಿಡಿಯೋ ಸಂವಾದದ ಮೂಲಕ ಸೂಚನೆ ನೀಡಿದ್ದರೂ ನಿರೀಕ್ಷಿತ ಪ್ರಗತಿಯಾಗಿಲ್ಲ. ಎಷ್ಟು ಜಾಬ್ ಮೇಳಗಳನ್ನು ನಡೆಸಲಾಗಿದೆ, ಎಷ್ಟು ಉದ್ಯೋಗ ಕಾರ್ಡ್ಗಳನ್ನು ವಿತರಿಸಲಾಗಿದೆ ಎಂಬುದರ ಕುರಿತು ಮಾಹಿತಿ ನೀಡುವಂತೆ ಸೂಚಿಸಿದರು. ಈ ವಿಷಯದಲ್ಲಿಯೂ ಪ್ರಗತಿ ಕಡಿಮೆ ಇರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಯ ಒಟ್ಟಾರೆ ಸಾಧನೆ ತೃಪ್ತಿಕರವಾಗಿಲ್ಲ. ವಿಬಿ-ಜಿ ರಾಮ್ಜಿ ಯೋಜನೆಯಲ್ಲಿಯೂ ನಿರೀಕ್ಷಿತ ಪ್ರಗತಿ ಕಂಡುಬಂದಿಲ್ಲ. ಅಧಿಕಾರಿಗಳು ಕಚೇರಿಗಳಲ್ಲೇ ಕುಳಿತುಕೊಳ್ಳದೆ ಮನೆಮನೆಗೆ ತೆರಳಿ ಯೋಜನೆಗಳ ಕುರಿತು ಜನರಿಗೆ ಅರಿವು ಮೂಡಿಸಬೇಕು. ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳಲು ಗ್ರಾಮಸ್ಥರಿಗೆ ಪ್ರೋತ್ಸಾಹಿಸಬೇಕು. ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಬಡವರಿಗೆ ಅನ್ಯಾಯ ಮಾಡಿದಂತಾಗುತ್ತದೆ. ಪ್ರತಿ ತಿಂಗಳು ನಿಗದಿತ ಪ್ರಮಾಣದಲ್ಲಿ ಅನುದಾನ ವೆಚ್ಚ ಮಾಡಿ ಕಾಮಗಾರಿಗಳಿಗೆ ವೇಗ ನೀಡಬೇಕು ಎಂದರು.

ಬರಗಾಲದ ಸಂದರ್ಭದಲ್ಲಿ ಗ್ರಾಮೀಣ ಜನರು ಉದ್ಯೋಗ ಅರಸಿ ಗುಳೆ ಹೋಗುವುದನ್ನು ತಪ್ಪಿಸಲು ಸ್ಥಳೀಯವಾಗಿಯೇ ಕೆಲಸ ಒದಗಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಅರ್ಹರಿಗೆ ನಿರಂತರ ಕೆಲಸ ನೀಡುವ ಮೂಲಕ ಅವರ ಜೀವನೋಪಾಯಕ್ಕೆ ನೆರವಾಗಬೇಕು ಎಂದು ತಿಳಿಸಿದರು.

55 ಕೆರೆಗಳ ಒತ್ತುವರಿ ತೆರವಿಗೆ ಸೂಚನೆ

ಜಿಲ್ಲೆಯಲ್ಲಿ ಒಟ್ಟು 205 ಕೆರೆಗಳಿದ್ದು, ಅವುಗಳಲ್ಲಿ 55 ಕೆರೆಗಳು ಒತ್ತುವರಿಯಾಗಿರುವುದನ್ನು ಪ್ರಸ್ತಾಪಿಸಿದ ಸಚಿವರು, ಈವರೆಗೆ ಒತ್ತುವರಿ ತೆರವುಗೊಳಿಸದಿರುವುದಕ್ಕೆ ಅಧಿಕಾರಿಗಳನ್ನು ಪ್ರಶ್ನಿಸಿದರು. ಪೊಲೀಸ್ ಇಲಾಖೆಯ ಸಹಕಾರ ಪಡೆದು ಕೆರೆಗಳ ಒತ್ತುವರಿ ತೆರವುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಕೆರೆಗಳ ಸಂರಕ್ಷಣೆಗೆ ಅಧಿಕಾರಿಗಳು ವಿಶೇಷ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ಸ್ವಚ್ಛ ಭಾರತ್ ಮಿಷನ್ (ಎಸ್ಬಿಎಂ), ಎಸ್ಎಚ್ಪಿಸಿ ಸೇರಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿಯನ್ನೂ ಪರಿಶೀಲಿಸಿದ ಅವರು, ನಿಗದಿತ ಗುರಿ ಸಾಧಿಸಲು ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.

ಜನರಿಗೆ ಸೇವೆ ಸಲ್ಲಿಸುವ ಜವಾಬ್ದಾರಿಯುತ ಸ್ಥಾನದಲ್ಲಿ ಅಧಿಕಾರಿಗಳು ಇದ್ದೀರಿ. ಸರ್ಕಾರದ ಯೋಜನೆಗಳ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ನಿಮ್ಮ ಕರ್ತವ್ಯ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಸಚಿವರು ಕಿವಿಮಾತು ಹೇಳಿದರು.

ಮುಂದಿನ ವಾರ ವಿಡಿಯೋ ಸಂವಾದದ ಮೂಲಕ ಖಾತ್ರಿ ಯೋಜನೆ, ಕುಡಿಯುವ ನೀರು ಹಾಗೂ ಇ-ಸ್ವತ್ತು ವಿಷಯಗಳ ಪ್ರಗತಿ ಪರಿಶೀಲನೆ ನಡೆಸಲಾಗುವುದು. ಅಷ್ಟರೊಳಗೆ ಸಂಬಂಧಪಟ್ಟ ಅಧಿಕಾರಿಗಳು ಪ್ರಗತಿ ಸಾಧಿಸಬೇಕು. ಜಿಪಂ ಸಿಇಒ ಅವರು ಈ ಕುರಿತು ಅಗತ್ಯ ಕ್ರಮ ಕೈಗೊಂಡು ಮೇಲ್ವಿಚಾರಣೆ ನಡೆಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಬರಗಾಲ ಇರುವುದರಿಂದ ಕುಡಿಯುವ ನೀರು ಪೂರೈಕೆಗೆ ಪ್ರಥಮಾದ್ಯತೆ ಇರಬೇಕು. ಸರ್ಕಾರದಲ್ಲಿ ಕುಡಿಯುವ ನೀರಿಗಾಗಿ ಯಾವುದೇ ಹಣಕಾಸಿನ ತೊಂದರೆ ಇರುವುದಿಲ್ಲ. ಆದರೆ ಕೆಲವು ಪ್ರದೇಶಗಳಲ್ಲಿ ಅಂತರ್ಜಲ ಕುಸಿತದಿಂದ ಬೋರವೆಲ್ ಗಳು ಬತ್ತಿ ಹೋಗಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ತಾಂತ್ರಿಕ ಕಾರಣಗಳಿಂದಲೂ ನೀರು ಪೂರೈಕೆಯಲ್ಲಿ ತೊಂದರೆ ಇರುವುದರಿಂದ ತಾಂತ್ರಿಕ ಪರಿಣಿತರೊಂದಿಗೆ ಸಮಗ್ರ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಉದಾಸೀನ ಮಾಡದೇ ಕ್ರಿಯಾಶೀಲರಾಗಿ ಕೆಲಸ ನಿರ್ವಹಿಸಬೇಕು ಎಂದು ಈಶ್ವರ ಖಂಡ್ರೆ ನಿರ್ದೇಶನ ನೀಡಿದರು.

ಗ್ರಾಮಗಳಲ್ಲಿನ ಜನರು ಗುಳೇ ಹೋಗದಂತೆ ತಡೆಯಬೇಕು. ವಿಬಿಜಿ-ರಾಮ್ ಜಿ ಯೋಜನೆಯಡಿ ತೆರೆದ ಬಾವಿ, ದನದ ಕೊಟ್ಟಿಗೆ , ಕುರಿ ಸಾಕಾಣಿಕೆ, ಕೃಷಿ ಹೊಂಡ, ಅಂತರ್ಜಲ ಹೆಚ್ಚಿಸುವ ಸಂಬಂಧ ಕಾಮಗಾರಿ ಸೇರಿದಂತೆ 375 ವಿವಿಧ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ. ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ಒಟ್ಟು 10,000 ಕೋಟಿ ರೂ ಮೀಸಲಿಡಲಾಗಿದೆ. ಹಾಳಾಗಿರುವ ಡಾಂಬರು ರಸ್ತೆಗಳ ಪುನರ್ ನಿರ್ಮಾಣಕ್ಕೆ 7 ಸಾವಿರ ಕೋಟಿ ಹಾಗೂ ಗ್ರಾಮೀಣ ರಸ್ತೆಗಳ ಮರು ಡಾಂಬರೀಕರಣಕ್ಕೆ 3 ಸಾವಿರ ಕೋಟಿ ಹೀಗೆ ಒಟ್ಟು 10,000 ಕೋಟಿ ರೂ. ಮೀಸಲಿಡಲಾಗಿದೆ. ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ಪಡೆದು ಕಾಮಗಾರಿಯನ್ನು ಆರಂಭಿಸಬಹುದಾಗಿದೆ. ಮುಖ್ಯಮಂತ್ರಿಗಳ ಗ್ರಾಮೀಣಾಭಿವೃದ್ಧಿ ಯೋಜನೆಯಡಿ ಚರಂಡಿ ನಿರ್ಮಾಣ, ಸಿಸಿ ರಸ್ತೆ , ನಮ್ಮ ಹೊಲ ನಮ್ಮ ದಾರಿ ಈ ಕಾರ್ಯಗಳಿಗೆ ಅವಕಾಶ ಕಲ್ಪಿಸಲಾಗಿದ್ದು ಅನುಷ್ಟಾನ ತರುವ ಕೆಲಸ ಮಾಡಬಹುದಾಗಿದೆ ಎಂದರು.

ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಇ-ಸ್ವತ್ತು ಕೆಲಸ ಚುರುಕಿನಿಂದ ನಡೆಯಬೇಕು. ಪಿಡಿಓ ಹಾಗೂ ಇಓಗಳು ಗ್ರಾಮಗಳ ಮನೆ ಮನೆಗೆ ತೆರಳಿ ತಪಾಸಣೆ ಮಾಡಿ ಗ್ರಾಮಸ್ಥರಿಂದ ಅರ್ಜಿ ತೆಗೆದುಕೊಂಡು ಅಪಲೋಡ್ ಮಾಡಬೇಕು. ಇ- ಸ್ವತ್ತು ಅರ್ಹ ಎಲ್ಲ ಗ್ರಾಮಸ್ಥರಿಗೂ ತಲುಪುವಂತಾಗಬೇಕು ಎಂದು ಸಚಿವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಲಕ್ಷ್ಮೇಶ್ವರ ತಾಲೂಕು ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದ್ದರೂ ಕಾಮಗಾರಿ ಆರಂಭವಾಗಿಲ್ಲ. ಕಟ್ಟಡ ನಿರ್ಮಾಣಕ್ಕೆ ಅಗತ್ಯ ಅನುದಾನ ಒದಗಿಸಿ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಅವರು ಸಚಿವರಲ್ಲಿ ಮನವಿ ಮಾಡಿದರು.

ಸಭೆಯಲ್ಲಿ ಶಾಸಕ ಡಾ. ಚಂದ್ರು ಲಮಾಣಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಕುಲ್ ಜೈನ್, ಜಿಪಂ ಅಧಿಕಾರಿಗಳು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande