
ಕಲಬುರಗಿ, 21 ನವೆಂಬರ್ (ಹಿ.ಸ.):
‘ಬಸವ ಮಂಟಪ’ ಪುಸ್ತಕದಲ್ಲಿ ವಿಶ್ವಗುರು ಬಸವಣ್ಣನವರ ಕುರಿತು ಅವಹೇಳನಕಾರಿ ಪದಗಳನ್ನು ಬಳಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಲಿಂಗಾಯತ ಸಮುದಾಯದ ಆಕ್ರೋಶ ಭುಗಿಲೆದ್ದಿದೆ.
ಲೇಖಕ ರವಿ ಹಂಜಿ ಅವರ ಕೃತಿಯ ವಿರುದ್ಧ ಶನಿವಾರ ವಿವಿಧ ಬಸವಪರ ಸಂಘಟನೆಗಳು ಹಾಗೂ ಲಿಂಗಾಯತ ಸಮುದಾಯದ ಮುಖಂಡರು ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಜಗತ್ ವೃತ್ತದಲ್ಲಿರುವ ಬಸವೇಶ್ವರರ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಪುಸ್ತಕದ ಪ್ರತಿಗಳನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಅಲ್ಲದೆ, ಪುಸ್ತಕದ ಪ್ರತಿಗಳಿಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕಿದ ಪ್ರತಿಭಟನಾಕಾರರು, ಮಾನವ ಸರಪಳಿ ನಿರ್ಮಿಸಿ ಲೇಖಕನ ವಿರುದ್ಧ ಘೋಷಣೆಗಳನ್ನು ಕೂಗಿದರು.
ಲಿಂಗಾಯತ ಮಹಾಸಭಾ ಸೇರಿದಂತೆ ಹಲವು ಬಸವಪರ ಸಂಘಟನೆಗಳ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಪಕ್ಷಭೇದ ಮರೆತು ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರೂ ಪ್ರತಿಭಟನೆಗೆ ಕೈಜೋಡಿಸಿದ್ದು ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಕಲಬುರಗಿ ಕಾಂಗ್ರೆಸ್ ಶಾಸಕ ಅಲ್ಲಮಪ್ರಭು ಪಾಟೀಲ್, ಲೇಖಕ ರವಿ ಹಂಜಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
“ವಿಶ್ವಗುರು ಬಸವಣ್ಣನವರ ಬಗ್ಗೆ ರವಿ ಹಂಜಿ ಅಲ್ಲ, ಹಂದಿ ಅವಹೇಳನಕಾರಿಯಾಗಿ ಮಾತನಾಡುತ್ತಾನೆ. ಇಂತಹ ಹೇಳಿಕೆ ನೀಡುವ ಲೇಖಕನಿಗೆ ನಾಚಿಕೆಯಾಗಬೇಕು. ಬಸವಣ್ಣನವರು ಸಾಂಸ್ಕೃತಿಕ ನಾಯಕರು. ಅವರು ಇಡೀ ವಿಶ್ವಕ್ಕೆ ಮಾದರಿಯಾದ ಮಹಾನ್ ಮಾನವತಾವಾದಿ.
ಅಂತಹ ಮಹಾನ್ ವ್ಯಕ್ತಿಯ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಿರುವುದನ್ನು ಸಹಿಸಲು ಸಾಧ್ಯವಿಲ್ಲ. ಲೇಖಕ ರವಿ ಹಂಜಿಯನ್ನು ಗಲ್ಲಿಗೇರಿಸಬೇಕು” ಎಂದು ಶಾಸಕ ಅಲ್ಲಮಪ್ರಭು ಪಾಟೀಲ್ ಆಕ್ರೋಶಭರಿತವಾಗಿ ಹೇಳಿದರು.
“ಈ ವಿಚಾರದಲ್ಲಿ ನಾವು ಯಾವುದೇ ಪಕ್ಷದ ಪರವಾಗಿ ನಿಂತಿಲ್ಲ. ಪಕ್ಷಭೇದ ಮರೆತು ಬಸವಣ್ಣನವರ ಗೌರವ ಮತ್ತು ತತ್ವಗಳ ರಕ್ಷಣೆಗಾಗಿ ಎಲ್ಲರೂ ಒಗ್ಗಟ್ಟಿನಿಂದ ಪ್ರತಿಭಟನೆ ನಡೆಸುತ್ತಿದ್ದೇವೆ” ಎಂದು ತಿಳಿಸಿದರು.
ಬಸವಣ್ಣನವರ ಸಮಾನತೆ, ಕಾಯಕ ಮತ್ತು ದಾಸೋಹದ ತತ್ವಗಳನ್ನು ಎತ್ತಿಹಿಡಿಯಬೇಕಾದ ಸಂದರ್ಭದಲ್ಲಿ ಅವರ ಕುರಿತು ಅವಹೇಳನಕಾರಿ ಪದಗಳ ಬಳಕೆ ಮಾಡಿರುವುದು ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪುಸ್ತಕದ ಲೇಖಕ ಹಾಗೂ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R