ಕೋಣನಕುಂಟೆ ಕ್ರಾಸ್ನಲ್ಲಿ ₹77 ಕೋಟಿ ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಾಣ: ಕೃಷ್ಣ ಬೈರೇಗೌಡ
ಬೆಂಗಳೂರು, 21 ನವೆಂಬರ್ (ಹಿ.ಸ.): ಕೋಣನಕುಂಟೆ ಕ್ರಾಸ್‌ನಲ್ಲಿನ ಸಂಚಾರ ದಟ್ಟಣೆ ನಿವಾರಿಸುವ ಉದ್ದೇಶದಿಂದ ಸುಮಾರು 600 ಮೀಟರ್ ಉದ್ದದ ವಿಭಜಿತ ಮಾದರಿಯ ಮೇಲ್ಸೇತುವೆ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮೇಲ್ಸೇತುವೆ ನಿರ್ಮಾಣ ಹಾಗೂ ಭೂಸ್ವಾಧೀನ ಸೇರಿದ
ಮೂರನೇ ಹಂತದ ವಾರ್ಡ್ ಒನ್ ಅಭಿಯಾನಕ್ಕೆ ಚಾಲನೆ


ಬೆಂಗಳೂರು, 21 ನವೆಂಬರ್ (ಹಿ.ಸ.):

ಕೋಣನಕುಂಟೆ ಕ್ರಾಸ್‌ನಲ್ಲಿನ ಸಂಚಾರ ದಟ್ಟಣೆ ನಿವಾರಿಸುವ ಉದ್ದೇಶದಿಂದ ಸುಮಾರು 600 ಮೀಟರ್ ಉದ್ದದ ವಿಭಜಿತ ಮಾದರಿಯ ಮೇಲ್ಸೇತುವೆ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮೇಲ್ಸೇತುವೆ ನಿರ್ಮಾಣ ಹಾಗೂ ಭೂಸ್ವಾಧೀನ ಸೇರಿದಂತೆ ಒಟ್ಟು ಸುಮಾರು ₹77 ಕೋಟಿ ವೆಚ್ಚವಾಗುವ ನಿರೀಕ್ಷೆಯಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೂರನೇ ಹಂತದ ವಾರ್ಡ್ ಒನ್ ಅಭಿಯಾನಕ್ಕೆ ಕೋಣನಕುಂಟೆ ಕ್ರಾಸ್‌ನಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಮೇಲ್ಸೇತುವೆ ಕಾಮಗಾರಿಯನ್ನು ಶೀಘ್ರ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಸಂಚಾರ ದಟ್ಟಣೆ ನಿವಾರಣೆಗೆ ತಾತ್ಕಾಲಿಕ ಕ್ರಮ

ಕೋಣನಕುಂಟೆ ಕ್ರಾಸ್‌ನಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಹಲವು ತಾತ್ಕಾಲಿಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪಾದಚಾರಿ ಮಾರ್ಗಗಳ ಅಭಿವೃದ್ಧಿ, ಜೀಬ್ರಾ ಕ್ರಾಸಿಂಗ್ ನಿರ್ಮಾಣ, ರಸ್ತೆ ಹಾಗೂ ಬದಿಯ ಗುರುತುಗಳ ಅಳವಡಿಕೆ ಕಾರ್ಯ ಕೈಗೊಳ್ಳಲಾಗುತ್ತಿದೆ. ಫೋರಂ ಮಾಲ್ ಸಮೀಪದ ಮೆಟ್ರೋ ಜಾಗದಲ್ಲಿ ವಾಹನಗಳಿಗೆ ಎಡಕ್ಕೆ ಮುಕ್ತವಾಗಿ ತಿರುಗುವ ವ್ಯವಸ್ಥೆ ಕಲ್ಪಿಸಲಾಗುವುದು. ಮಾಲ್ ಮುಂಭಾಗದ ತಡೆಗೋಡೆಯನ್ನು ತೆರವುಗೊಳಿಸಿ, ಪಾದಚಾರಿಗಳ ಅನುಕೂಲಕ್ಕಾಗಿ ಮೆಟ್ಟಿಲುಗಳನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.

ಪಾದಚಾರಿಗಳ ಸುರಕ್ಷತೆಗೆ ಸ್ಕೈವಾಕ್

ಕೋಣನಕುಂಟೆ ಕ್ರಾಸ್‌ನಲ್ಲಿ ಮೆಟ್ರೋ ನಿಲ್ದಾಣ ನಿರ್ಮಾಣವಾಗುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಸಾರ್ವಜನಿಕರ ಓಡಾಟ ಹೆಚ್ಚಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಪಾದಚಾರಿಗಳು ಸುರಕ್ಷಿತವಾಗಿ ರಸ್ತೆ ದಾಟಲು ಅನುಕೂಲವಾಗುವಂತೆ ಸ್ಕೈವಾಕ್ ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಡಿಸೆಂಬರ್‌ನಲ್ಲಿಯೂ ವಾರ್ಡ್ ಒನ್ ಅಭಿಯಾನ ಮುಂದುವರಿಕೆ

ನವೆಂಬರ್ 1ರಿಂದ ಆರಂಭಗೊಂಡಿರುವ ವಾರ್ಡ್ ಒನ್ ಅಭಿಯಾನದಡಿ ಮೊದಲ ಹಂತದಲ್ಲಿ 43 ವಾರ್ಡ್‌ಗಳು, ಎರಡನೇ ಹಂತದಲ್ಲಿ 40 ವಾರ್ಡ್‌ಗಳು ಹಾಗೂ ಮೂರನೇ ಹಂತದಲ್ಲಿ 41 ವಾರ್ಡ್‌ಗಳನ್ನು ಆಯ್ಕೆ ಮಾಡಲಾಗಿದೆ. ಈ ವಾರ್ಡ್‌ಗಳಲ್ಲಿ ಸ್ವಚ್ಛತೆ, ರಸ್ತೆ, ಪಾದಚಾರಿ ಮಾರ್ಗ, ವಿದ್ಯುತ್ ವ್ಯವಸ್ಥೆ, ಮರಗಳ ಕೊಂಬೆಗಳ ತೆರವು, ರಸ್ತೆ ಗುಂಡಿಗಳು ಮತ್ತು ಕಸದ ಸಮಸ್ಯೆ ಸೇರಿದಂತೆ ವಿವಿಧ ಮೂಲಸೌಕರ್ಯ ಸಮಸ್ಯೆಗಳನ್ನು ಗುರುತಿಸಿ ಪರಿಹರಿಸಲಾಗುತ್ತಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ 369 ವಾರ್ಡ್‌ಗಳಲ್ಲಿಯೂ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಡಿಸೆಂಬರ್ ತಿಂಗಳಲ್ಲಿಯೂ ಮುಂದುವರಿಸಲಾಗುವುದು ಎಂದು ಸಚಿವರು ತಿಳಿಸಿದರು.

ಜೆಟ್ಟಿಂಗ್ ಯಂತ್ರಗಳ ಬಳಕೆಗೆ ಸೂಚನೆ

ವಾರ್ಡ್ ಒನ್ ಅಭಿಯಾನದಡಿ ಜೆಟ್ಟಿಂಗ್ ಯಂತ್ರಗಳ ಕಾರ್ಯವೈಖರಿಯನ್ನು ಪರಿಶೀಲಿಸಿದ ಸಚಿವರು, ಯಂತ್ರಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸ್ಥಳೀಯ ಅಪಾರ್ಟ್‌ಮೆಂಟ್‌ಗಳನ್ನು ಗುರುತಿಸಿ ನಕ್ಷೆ ಸಿದ್ಧಪಡಿಸುವುದರ ಜತೆಗೆ, ಸಂಸ್ಕರಿಸಿದ ನೀರಿನ ಗುಣಮಟ್ಟವನ್ನು ಪರೀಕ್ಷಿಸಬೇಕು. ಗುಣಮಟ್ಟದ ನೀರನ್ನು ಜೆಟ್ಟಿಂಗ್ ಯಂತ್ರಗಳ ಕಾರ್ಯಾಚರಣೆಗೆ ಬಳಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ಕೃಷ್ಣಪ್ಪ, ಮುಖ್ಯ ಆಯುಕ್ತ ಮಹೇಶ್ವರ್ ರಾವ್, ನಗರ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್, ಅಪರ ಆಯುಕ್ತ ನವೀನ್ ಕುಮಾರ್ ರಾಜು, ಮುಖ್ಯ ಅಭಿಯಂತರ ಬಸವರಾಜ್ ಕಬಾಡೆ, ಲೋಕೇಶ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande