
ವಿಜಯಪುರ, 21 ನವೆಂಬರ್ (ಹಿ.ಸ.)
ದೇಶದ ಪ್ರತಿಯೊಬ್ಬ ನಾಗರಿಕರು ಉಳಿತಾಯದ ಮನೋಭಾವ ಬೆಳೆಸಿಕೊಂಡು, ಆರ್ಥಿಕ ಶಿಸ್ತು ಹಾಗೂ ಉತ್ತಮ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಸಂದೇಶಕ್ಕೆ ವಿಜಯಪುರ ಲೋಕಸಭಾ ಸಂಸದ ರಮೇಶ ಜಿಗಜಿಣಗಿ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ನೀಡಿರುವ ಉಳಿತಾಯದ ಮಹತ್ವ, ದುಂದುವೆಚ್ಚಕ್ಕೆ ಕಡಿವಾಣ ಹಾಗೂ ಆರ್ಥಿಕ ಶಿಸ್ತಿನ ಸಂದೇಶ ಇಂದಿನ ಕಾಲಘಟ್ಟದಲ್ಲಿ ಅತ್ಯಂತ ಪ್ರಸ್ತುತವಾಗಿದೆ. ಪ್ರತಿಯೊಂದು ಕುಟುಂಬವೂ ತನ್ನ ಆದಾಯಕ್ಕೆ ಅನುಗುಣವಾಗಿ ಖರ್ಚು ಮಾಡುವುದರ ಜೊತೆಗೆ ಭವಿಷ್ಯದ ಅಗತ್ಯಗಳಿಗಾಗಿ ಉಳಿತಾಯ ಮಾಡುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಇದರಿಂದ ಕುಟುಂಬದ ಆರ್ಥಿಕ ಭದ್ರತೆ ಬಲಗೊಳ್ಳುವುದಲ್ಲದೆ, ಸಂಕಷ್ಟದ ಸಮಯದಲ್ಲಿ ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ದೇಶದ ಅಭಿವೃದ್ಧಿಗೆ ಆರ್ಥಿಕವಾಗಿ ಸದೃಢವಾಗಿರುವ ಕುಟುಂಬಗಳು ಹಾಗೂ ಜವಾಬ್ದಾರಿಯುತ ನಾಗರಿಕರು ಪ್ರಮುಖ ಶಕ್ತಿಯಾಗಿದ್ದಾರೆ. ಅನಗತ್ಯ ಖರ್ಚುಗಳನ್ನು ನಿಯಂತ್ರಿಸಿ, ಉಳಿತಾಯಕ್ಕೆ ಆದ್ಯತೆ ನೀಡುವ ಮೂಲಕ ಪ್ರತಿಯೊಬ್ಬರೂ ತಮ್ಮ ಕುಟುಂಬದ ಭವಿಷ್ಯವನ್ನು ಸುರಕ್ಷಿತಗೊಳಿಸಿಕೊಳ್ಳಬೇಕು. ಪ್ರಧಾನಿ ಮೋದಿ ಅವರು ನೀಡಿರುವ ಈ ಸಂದೇಶ ಜನಸಾಮಾನ್ಯರಲ್ಲಿ ಆರ್ಥಿಕ ಜಾಗೃತಿ ಮೂಡಿಸುವ ಉತ್ತಮ ಮಾರ್ಗದರ್ಶನವಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ಹಲವು ವರ್ಷಗಳಿಂದ ಕೇಂದ್ರ ಸರ್ಕಾರ ಬಡತನ ನಿರ್ಮೂಲನೆ ಹಾಗೂ ಜನರ ಆರ್ಥಿಕ ಸಬಲೀಕರಣಕ್ಕೆ ಹಲವು ಅಭಿವೃದ್ಧಿ ಮತ್ತು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. 2011ರಿಂದ 2023ರ ಅವಧಿಯಲ್ಲಿ ದೇಶದಲ್ಲಿ ಸುಮಾರು 50 ಕೋಟಿ ಜನರು ಬಡತನದಿಂದ ಹೊರಬಂದಿರುವುದು ಮಹತ್ವದ ಬೆಳವಣಿಗೆಯಾಗಿದೆ. ಸರ್ಕಾರದ ವಿವಿಧ ಯೋಜನೆಗಳು ಹಾಗೂ ಜನರ ಜೀವನಮಟ್ಟ ಸುಧಾರಣೆಗೆ ಕೈಗೊಂಡ ಕ್ರಮಗಳು ಈ ಬದಲಾವಣೆಗೆ ಪೂರಕವಾಗಿವೆ ಎಂದು ಅವರು ಉಲ್ಲೇಖಿಸಿದ್ದಾರೆ.
ಇದೇ ಸಂದರ್ಭದಲ್ಲಿ ದೇಶದ ಭವಿಷ್ಯವಾಗಿರುವ ಯುವಜನತೆಯ ಆರೋಗ್ಯ ಮತ್ತು ಭವಿಷ್ಯದ ಬಗ್ಗೆಯೂ ವಿಶೇಷ ಕಾಳಜಿ ವಹಿಸಬೇಕಿದೆ. ಯುವಕರು ಮಾದಕ ವ್ಯಸನಗಳಿಂದ ದೂರವಿದ್ದು, ಆರೋಗ್ಯಕರ ಜೀವನಶೈಲಿ, ಶಿಸ್ತು ಮತ್ತು ಸಕಾರಾತ್ಮಕ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು. ಯುವಶಕ್ತಿಯೇ ರಾಷ್ಟ್ರದ ನಿಜವಾದ ಸಂಪತ್ತು. ಯುವಜನತೆ ಸರಿಯಾದ ಮಾರ್ಗದಲ್ಲಿ ಮುನ್ನಡೆದಾಗ ಮಾತ್ರ ಸದೃಢ ಸಮಾಜ ಹಾಗೂ ಅಭಿವೃದ್ಧಿ ಹೊಂದಿದ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಉಳಿತಾಯ, ಆರ್ಥಿಕ ಶಿಸ್ತು ಹಾಗೂ ಆರೋಗ್ಯಕರ ಜೀವನಶೈಲಿಯ ಸಂದೇಶವನ್ನು ಪ್ರತಿಯೊಬ್ಬರೂ ತಮ್ಮ ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ವೈಯಕ್ತಿಕ ಆರ್ಥಿಕ ಭದ್ರತೆಯ ಜೊತೆಗೆ ಸಮಾಜದ ಮತ್ತು ದೇಶದ ಪ್ರಗತಿಗೂ ಕೈಜೋಡಿಸುವ ಮೂಲಕ ಆತ್ಮನಿರ್ಭರ ಹಾಗೂ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಕರೆ ನೀಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande