
ಬಾಗಲಕೋಟೆ, 21 ನವೆಂಬರ್ (ಹಿ.ಸ.)
ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸರ್ಕಾರಿ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದಲ್ಲಿ ಆಯೋಜಿಸಿದ್ದ ‘ಪ್ರಜಾಸೇವಾ ಆಂದೋಲನ’ ಕಾರ್ಯಕ್ರಮಕ್ಕೆ ಸಣ್ಣ ಕೈಗಾರಿಕೆ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ಸಂದರ್ಭದಲ್ಲಿ ಸಚಿವ ವಿಜಯಾನಂದ ಕಾಶಪ್ಪನವರ ಅವರು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಕ್ಷೇತ್ರದ ವಿವಿಧ ಗ್ರಾಮಗಳು ಹಾಗೂ ಪಟ್ಟಣ ಪ್ರದೇಶಗಳ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿದರು. ಕುಡಿಯುವ ನೀರು, ರಸ್ತೆ, ಚರಂಡಿ, ಮೂಲಸೌಕರ್ಯ, ಕಂದಾಯ, ಪಿಂಚಣಿ ಸೇರಿದಂತೆ ಸಾರ್ವಜನಿಕರಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಕುರಿತು ಜನರು ಸಚಿವರ ಗಮನಕ್ಕೆ ತಂದರು.
ಜನರ ಸಮಸ್ಯೆಗಳನ್ನು ಆಲಿಸಿದ ಸಚಿವರು, ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆ ಹಾಗೂ ಆದೇಶಗಳನ್ನು ನೀಡಿದರು. ಸಾರ್ವಜನಿಕರ ಅರ್ಜಿಗಳನ್ನು ವಿಳಂಬ ಮಾಡದೆ ಪರಿಶೀಲಿಸಿ, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಬೇಕು. ಜನರು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ಪ್ರತಿಯೊಂದು ಅರ್ಜಿಗೂ ಅಧಿಕಾರಿಗಳು ಜವಾಬ್ದಾರಿಯುತವಾಗಿ ಸ್ಪಂದಿಸಬೇಕು ಎಂದು ಸೂಚಿಸಿದರು.
ಸರ್ಕಾರದ ಆಡಳಿತ ವ್ಯವಸ್ಥೆಯನ್ನು ಜನಸ್ನೇಹಿಯಾಗಿಸುವುದು ಹಾಗೂ ಸಾರ್ವಜನಿಕರ ಕುಂದುಕೊರತೆಗಳಿಗೆ ತ್ವರಿತ ಪರಿಹಾರ ಒದಗಿಸುವುದು ಪ್ರಜಾಸೇವಾ ಆಂದೋಲನದ ಪ್ರಮುಖ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಜನರಿಗೆ ಉತ್ತಮ ಸೇವೆ ನೀಡಬೇಕು ಎಂಬ ಆಶಯದೊಂದಿಗೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande