ಡಿ.೧೦ ರಂದು ಬೆಳಗಾವಿಯಲ್ಲಿ ಲಿಂಗಾಯತ ದೌರ್ಜನ್ಯ ದಿನ ಆಚರಣೆ: ಬಸವಜಯ ಮೃತ್ಯುಂಜಯ ಶ್ರೀಗಳ ಘೋಷಣೆ
ಬಾಗಲಕೋಟೆ, 21 ನವೆಂಬರ್ (ಹಿ.ಸ.) ಮೀಸಲಾತಿ ಹೋರಾಟದ ಸಂದರ್ಭದಲ್ಲಿ ಪಂಚಮಸಾಲಿ ಸಮಾಜದ ಜನರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವ ಕ್ರಮವನ್ನು ಖಂಡಿಸಿ, ಡಿಸೆಂಬರ್ 10ರಂದು ಬೆಳಗಾವಿಯಲ್ಲಿ ‘ಲಿಂಗಾಯತ ದೌರ್ಜನ್ಯ ದಿನ’ ಆಚರಿಸಲಾಗುವುದು ಎಂದು ಪಂಚಮಸಾಲಿ ಸಮಾಜದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ
2ಏ ಮೀಸಲಾತಿ


ಬಾಗಲಕೋಟೆ, 21 ನವೆಂಬರ್ (ಹಿ.ಸ.)

ಮೀಸಲಾತಿ ಹೋರಾಟದ ಸಂದರ್ಭದಲ್ಲಿ ಪಂಚಮಸಾಲಿ ಸಮಾಜದ ಜನರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವ ಕ್ರಮವನ್ನು ಖಂಡಿಸಿ, ಡಿಸೆಂಬರ್ 10ರಂದು ಬೆಳಗಾವಿಯಲ್ಲಿ ‘ಲಿಂಗಾಯತ ದೌರ್ಜನ್ಯ ದಿನ’ ಆಚರಿಸಲಾಗುವುದು ಎಂದು ಪಂಚಮಸಾಲಿ ಸಮಾಜದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಘೋಷಿಸಿದರು.

ಮುಧೋಳ್ ತಾಲೂಕಿನ ಬುದ್ನಿ ಪಿ.ಎಂ. ಗ್ರಾಮದಲ್ಲಿ ವೀರರಾಣಿ ಕಿತ್ತೂರು ರಾಣಿ ಚನ್ನಮ್ಮ ಗ್ರಾಮೀಣಾಭಿವೃದ್ಧಿ ಸೇವಾ ಸಂಘದ ನೇತೃತ್ವದಲ್ಲಿ ಆಯೋಜಿಸಿದ್ದ ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯುತ್ಸವ ಹಾಗೂ ವಿಜಯೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ಪಂಚಮಸಾಲಿ ಸಮಾಜದ ಮೀಸಲಾತಿ ಹಕ್ಕಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಸರ್ಕಾರ ಸೂಕ್ತ ಸ್ಪಂದನೆ ನೀಡಬೇಕು. ನಮ್ಮ ಸಮಾಜದ ಜನರು ತಮ್ಮ ನ್ಯಾಯಯುತ ಬೇಡಿಕೆಗಾಗಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಅವರ ಮೇಲೆ ಲಾಠಿ ಪ್ರಹಾರ ನಡೆಸಿರುವುದು ಖಂಡನೀಯ. ಈ ಘಟನೆಯನ್ನು ಸಮಾಜದ ಜನರು ಮರೆಯಬಾರದು. ಇದರ ವಿರುದ್ಧ ಪ್ರತಿಭಟನೆಯ ರೂಪದಲ್ಲಿ ಡಿಸೆಂಬರ್ 10ರಂದು ಬೆಳಗಾವಿಯಲ್ಲಿ ಲಿಂಗಾಯತ ದೌರ್ಜನ್ಯ ದಿನ ಆಚರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಸಮಾಜದ ಮೀಸಲಾತಿ ಬೇಡಿಕೆಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ನಡೆಯುವ ಹೋರಾಟದಲ್ಲಿ ಪ್ರತಿಯೊಬ್ಬರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಬೆಳಗಾವಿಯಲ್ಲಿ ನಡೆಯಲಿರುವ ಹೋರಾಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಬಾಂಧವರು ಆಗಮಿಸಿ ಒಗ್ಗಟ್ಟಿನ ಶಕ್ತಿ ಪ್ರದರ್ಶಿಸಬೇಕು ಎಂದು ಕರೆ ನೀಡಿದರು.

ಸಮಾಜದ ಹಕ್ಕುಗಳಿಗಾಗಿ ಸಂಘಟಿತ ಹೋರಾಟ ಅಗತ್ಯವಾಗಿದೆ. ಜನರು ಒಗ್ಗಟ್ಟಿನಿಂದ ಧ್ವನಿ ಎತ್ತಿದಾಗ ಮಾತ್ರ ತಮ್ಮ ಬೇಡಿಕೆಗಳಿಗೆ ಸರ್ಕಾರದ ಗಮನ ಸೆಳೆಯಲು ಸಾಧ್ಯ. ಹೀಗಾಗಿ ಗ್ರಾಮೀಣ ಭಾಗದಿಂದಲೂ ಸಮಾಜದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಇನ್ನೂ ಒಂದೂವರೆ ವರ್ಷದಲ್ಲಿ ಚುನಾವಣೆ ಎದುರಾಗಲಿರುವ ಹಿನ್ನೆಲೆಯಲ್ಲಿ ಸಮಾಜದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದರೆ ನಮ್ಮ ಬೇಡಿಕೆಗಳಿಗೆ ಸರ್ಕಾರದ ಮಟ್ಟದಲ್ಲಿ ಹೆಚ್ಚಿನ ಮನ್ನಣೆ ದೊರೆಯಲಿದೆ ಎಂಬ ವಿಶ್ವಾಸವಿದೆ. ಮೀಸಲಾತಿ ವಿಚಾರದಲ್ಲಿ ಸಮಾಜದ ಹಿತಾಸಕ್ತಿಯನ್ನು ಕಾಪಾಡಲು ಎಲ್ಲರೂ ಒಗ್ಗಟ್ಟಿನಿಂದ ಮುಂದುವರಿಯಬೇಕು ಎಂದು ಬಸವಜಯ ಮೃತ್ಯುಂಜಯ ಶ್ರೀಗಳು ತಿಳಿಸಿದರು.

ಚನ್ನಮ್ಮ ಜಯಂತ್ಯುತ್ಸವ ಮತ್ತು ವಿಜಯೋತ್ಸವ

ಇದಕ್ಕೂ ಮುನ್ನ ಗ್ರಾಮದಲ್ಲಿ ವೀರರಾಣಿ ಕಿತ್ತೂರು ರಾಣಿ ಚನ್ನಮ್ಮ ಅವರ ಜಯಂತ್ಯುತ್ಸವ ಹಾಗೂ ವಿಜಯೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರು, ಧಾರ್ಮಿಕ ಮುಖಂಡರು ಹಾಗೂ ಗ್ರಾಮಸ್ಥರು ಭಾಗವಹಿಸಿ ರಾಣಿ ಚನ್ನಮ್ಮ ಅವರ ಧೈರ್ಯ, ಸಾಹಸ, ದೇಶಪ್ರೇಮ ಮತ್ತು ಹೋರಾಟದ ಆದರ್ಶಗಳನ್ನು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಮರೇಗುದ್ದಿಯ ಡಾ. ವಿರುಪಾದೀಶ್ವರ ಮಹಾಸ್ವಾಮಿಗಳು, ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಧರೆಪ್ಪ ಸಾಂಗ್ಲಿಕರ, ಮುಖಂಡರಾದ ಸಿದ್ದು ಕೊಣ್ಣೂರ, ಶ್ರೀಶೈಲಗೌಡ ಪಾಟೀಲ, ಎಸ್.ಬಿ. ದಾನಪ್ಪಗೋಳ, ಮಹಾದೇವ ಈಟಿ, ಸದಾಶಿವ ರಡ್ಯಾರೆಟ್ಟಿ, ಮಲ್ಲಪ್ಪಗೌಡ ದೊಡಮನಿ, ಲಕ್ಕಪ್ಪಗೌಡ ಬಿರಾದಾರಪಾಟೀಲ, ಸುಭಾಷ ಕೋರಡ್ಡಿ, ಗಂಗಯ್ಯ ಮರೇಗುದ್ದಿ, ರುದ್ರಯ್ಯ ಹುನ್ನೂರ, ಸಿದ್ದಪ್ಪ ಪೂಜಾರಿ, ಮಲ್ಲಪ್ಪ ಯಾದವಾಡ, ಹೊನ್ನಪ್ಪ ರಡ್ಯಾರೆಟ್ಟಿ, ಮಲ್ಲಪ್ಪ ರಡ್ಯಾರೆಟ್ಟಿ, ಅಶೋಕ ರಡ್ಯಾರೆಟ್ಟಿ, ಬಸವರಾಜ ಕೊಪ್ಪದ, ಬಸಪ್ಪ ಅಳ್ಳಿಮಟ್ಟಿ ಸೇರಿದಂತೆ ಸಮಾಜದ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande