ಕೊರಟಗೆರೆಯಲ್ಲಿ ಹಲವು ಜನಪರ ಕಾಮಗಾರಿಗಳನ್ನು ಉದ್ಘಾಟಿಸಿದ ಡಾ. ಜಿ. ಪರಮೇಶ್ವರ್
ತುಮಕೂರು, 21 ನವೆಂಬರ್ (ಹಿ.ಸ.): ಕೊರಟಗೆರೆ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಜನರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಉದ್ದೇಶದಿಂದ ಉಪಮುಖ್ಯಮಂತ್ರಿ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು. ಕೊರಟಗೆರೆ ಪಟ್ಟಣದಲ್ಲಿ
ಕೊರಟಗೆರೆಯಲ್ಲಿ ಹಲವು ಜನಪರ ಕಾಮಗಾರಿಗಳನ್ನು ಉದ್ಘಾಟಿಸಿದ ಡಾ. ಜಿ. ಪರಮೇಶ್ವರ್


ತುಮಕೂರು, 21 ನವೆಂಬರ್ (ಹಿ.ಸ.):

ಕೊರಟಗೆರೆ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಜನರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಉದ್ದೇಶದಿಂದ ಉಪಮುಖ್ಯಮಂತ್ರಿ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು.

ಕೊರಟಗೆರೆ ಪಟ್ಟಣದಲ್ಲಿ ಆಯೋಜಿಸಿದ್ದ ಪ್ರಜಾಸೇವಾ ಅಭಿಯಾನ ಕಾರ್ಯಕ್ರಮಕ್ಕೂ ಮುನ್ನ ಲೋಕೋಪಯೋಗಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಿರ್ಮಿಸಲಾಗಿರುವ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ, ಬೆಸ್ಕಾಂ ಉಪವಿಭಾಗ ಕಚೇರಿ ಹಾಗೂ ನೂತನ ಬಸ್ ತಂಗುದಾಣವನ್ನು ಉದ್ಘಾಟಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಿದರು.

102 ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ

ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ 6.50 ಕೋಟಿ ರೂ. ಅನುದಾನದಲ್ಲಿ ನಾಲ್ಕು ಅಂತಸ್ತಿನ ವಿದ್ಯಾರ್ಥಿನಿಲಯ ನಿರ್ಮಿಸಲಾಗಿದೆ. ಇಲ್ಲಿ ಒಟ್ಟು 102 ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸುವ ವ್ಯವಸ್ಥೆಯಿದೆ.

ನೆಲಮಹಡಿಯಲ್ಲಿ ವಾರ್ಡನ್ ಕೊಠಡಿ, ಅಡುಗೆಮನೆ, ಊಟದ ಹಾಲ್ ಹಾಗೂ ಅನಾರೋಗ್ಯ ಪೀಡಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಉಳಿದ ಮಹಡಿಗಳಲ್ಲಿ ವಿದ್ಯಾರ್ಥಿಗಳ ವಾಸ್ತವ್ಯಕ್ಕೆ ಕೊಠಡಿಗಳು, ಸ್ನಾನಗೃಹ ಮತ್ತು ಶೌಚಾಲಯಗಳ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪೂರಕ ವಾತಾವರಣ ನಿರ್ಮಾಣವಾಗಲಿದೆ.

ವಿದ್ಯುತ್ ಸೇವೆಗಳಿಗೆ ಹೊಸ ಕಚೇರಿ

ಕೊರಟಗೆರೆ ಪಟ್ಟಣದ ಕೆಪಿಟಿಸಿಎಲ್ ಆವರಣದಲ್ಲಿ ಬೆಸ್ಕಾಂ ಉಪವಿಭಾಗ ಕಚೇರಿ ಹಾಗೂ ಒಎಂ-1 ಮತ್ತು ಒಎಂ-2 ವಿಭಾಗಗಳ ಕಚೇರಿ ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ಪೂರಕ ಕಾಮಗಾರಿಗಳಿಗೆ 2.44 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇದರಿಂದ ವಿದ್ಯುತ್ ಇಲಾಖೆಯ ಆಡಳಿತಾತ್ಮಕ ಕಾರ್ಯಚಟುವಟಿಕೆಗಳಿಗೆ ಅನುಕೂಲವಾಗುವುದರ ಜೊತೆಗೆ ಸಾರ್ವಜನಿಕರಿಗೆ ವಿದ್ಯುತ್ ಸಂಬಂಧಿತ ಸೇವೆಗಳನ್ನು ಸುಗಮವಾಗಿ ಒದಗಿಸಲು ನೆರವಾಗಲಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ಬಸ್ ತಂಗುದಾಣವನ್ನೂ ಉದ್ಘಾಟಿಸಲಾಯಿತು.

76 ಫಲಾನುಭವಿಗಳಿಗೆ ಸವಲತ್ತು ವಿತರಣೆ

ಕಾರ್ಯಕ್ರಮದಲ್ಲಿ ವಿವಿಧ ಸರ್ಕಾರಿ ಯೋಜನೆಗಳಡಿ 76 ಫಲಾನುಭವಿಗಳಿಗೆ ಡಾ. ಜಿ. ಪರಮೇಶ್ವರ್ ಸವಲತ್ತುಗಳನ್ನು ವಿತರಿಸಿದರು. ವಿಶೇಷಚೇತನ ಫಲಾನುಭವಿಗಳಿಗೆ ದ್ವಿಚಕ್ರ ವಾಹನಗಳನ್ನು ವಿತರಿಸುವ ಮೂಲಕ ಅವರ ಸ್ವಾವಲಂಬಿ ಬದುಕಿಗೆ ನೆರವಾದರು.

ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಮೊಬೈಲ್ ಕ್ಯಾಂಟೀನ್ ಹಾಗೂ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.

ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ, ವಿದ್ಯುತ್ ಸೇವೆಗಳ ಸುಧಾರಣೆಗೆ ಕಚೇರಿ ವ್ಯವಸ್ಥೆ, ಪ್ರಯಾಣಿಕರಿಗೆ ಬಸ್ ತಂಗುದಾಣ ಹಾಗೂ ವಿವಿಧ ವರ್ಗಗಳ ಫಲಾನುಭವಿಗಳಿಗೆ ಸರ್ಕಾರಿ ಸವಲತ್ತುಗಳ ವಿತರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ಚಾಲನೆ ನೀಡುವ ಮೂಲಕ ಕೊರಟಗೆರೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಲಾಯಿತು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande