
ಕಲಬುರಗಿ, 21 ನವೆಂಬರ್ (ಹಿ.ಸ.):
ಸ್ಥಳೀಯ ಲಾರಿ ಮಾಲೀಕರಿಗೆ ಸಿಮೆಂಟ್ ಸರಬರಾಜು ಮಾಡುವ ಆರ್ಡರ್ ನೀಡದೆ ಹೊರಗಿನವರಿಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಆರೋಪಿಸಿ ಲಾರಿ ಮಾಲೀಕರು ಅಲ್ಟ್ರಾಟೆಕ್ ಸಿಮೆಂಟ್ ಕಂಪನಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿರುವ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯ ಮಾರಾಟ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಸ್ಥಳೀಯ ಲಾರಿ ಮಾಲೀಕರಿಗೆ ಸಿಮೆಂಟ್ ಸಾಗಣೆ ಮತ್ತು ಸರಬರಾಜಿನ ಆರ್ಡರ್ ನೀಡದೆ, ಹೊರಗಿನ ಲಾರಿ ಮಾಲೀಕರಿಗೆ ಆರ್ಡರ್ ನೀಡಲಾಗುತ್ತಿದೆ ಎಂಬುದು ಪ್ರತಿಭಟನಾಕಾರರ ಆಕ್ರೋಶಕ್ಕೆ ಕಾರಣವಾಗಿದೆ.
ಇದೇ ವಿಚಾರವಾಗಿ ಆಕ್ರೋಶಗೊಂಡ ಲಾರಿ ಮಾಲೀಕರು ಸಿಮೆಂಟ್ ಕಂಪನಿಯ ಮಾರಾಟ ಕಚೇರಿಗೆ ನುಗ್ಗಿ ಕಚೇರಿಯ ಗಾಜುಗಳನ್ನು ಪುಡಿಪುಡಿ ಮಾಡಿದ್ದಾರೆ. ಇದರಿಂದ ಕಚೇರಿ ಆವರಣದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಸ್ಥಳೀಯ ಲಾರಿ ಮಾಲೀಕರಿಗೆ ಆದ್ಯತೆ ನೀಡಬೇಕು ಹಾಗೂ ಸಿಮೆಂಟ್ ಸರಬರಾಜಿನ ಆರ್ಡರ್ಗಳನ್ನು ಸ್ಥಳೀಯರಿಗೂ ಸಮಾನವಾಗಿ ಹಂಚಿಕೆ ಮಾಡಬೇಕು ಎಂಬುದು ಅವರ ಪ್ರಮುಖ ಬೇಡಿಕೆಯಾಗಿದೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R