
ಬೆಂಗಳೂರು, 21 ನವೆಂಬರ್ (ಹಿ.ಸ.):
ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಸಾಮಾಜಿಕ ಮಾಧ್ಯಮದಲ್ಲಿ ಬೆಂಬಲ ವ್ಯಕ್ತಪಡಿಸಿದ್ದಾರೆ.
ಮಹಿಳಾ ಕಾರ್ಯಕರ್ತೆಯರು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿದ್ದರೂ ಸರ್ಕಾರ ಅವರ ಅಳಲಿಗೆ ಸ್ಪಂದಿಸುತ್ತಿಲ್ಲವೇಕೆ ಎಂದು ಪ್ರಶ್ನಿಸುವ ಮೂಲಕ ರಾಜ್ಯ ಸರ್ಕಾರದ ಗಮನ ಸೆಳೆದಿದ್ದಾರೆ.
ಸರ್ಕಾರದ ಗಮನ ಸೆಳೆಯಲು ಮಹಿಳೆಯರು ಬೀದಿಗಿಳಿದು ಹೋರಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದನ್ನು ರಮ್ಯಾ ಪ್ರಶ್ನಿಸಿದ್ದಾರೆ.
ಪ್ರತಿಭಟನಾ ಸ್ಥಳದಿಂದ ಸರ್ಕಾರದ ಕೇಂದ್ರ ಕಚೇರಿ ಕೇವಲ 1.5 ಕಿ.ಮೀ. ದೂರದಲ್ಲಿದ್ದರೂ ಹೋರಾಟ ನಿರತ ಮಹಿಳೆಯರ ಧ್ವನಿ ಆಡಳಿತದ ಕಿವಿಗೆ ತಲುಪುತ್ತಿಲ್ಲವೇ ಎಂಬ ಅರ್ಥದಲ್ಲಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆಶಾ ಕಾರ್ಯಕರ್ತೆಯರು ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿದ್ದು, ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನರ ಆರೋಗ್ಯ ಸೇವೆಗಾಗಿ ಶ್ರಮಿಸುತ್ತಿದ್ದಾರೆ.
ಆದರೆ ತಮ್ಮ ಸೇವೆಗೆ ತಕ್ಕ ಗೌರವ, ವೇತನ ಹಾಗೂ ಸೌಲಭ್ಯಗಳಿಗಾಗಿ ಅವರು ನಿರಂತರವಾಗಿ ಹೋರಾಟ ನಡೆಸಬೇಕಾಗಿದೆ ಎಂಬುದು ಈ ಪ್ರತಿಭಟನೆಯ ಪ್ರಮುಖ ವಿಚಾರವಾಗಿದೆ.
ಮಹಿಳೆಯರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು. ಅವರ ಬೇಡಿಕೆಗಳನ್ನು ಆಲಿಸಿ ಸೂಕ್ತ ಪರಿಹಾರ ಕಲ್ಪಿಸಬೇಕು ಎಂಬ ಸಂದೇಶವನ್ನು ರಮ್ಯಾ ಅವರ ಬೆಂಬಲ ವ್ಯಕ್ತಪಡಿಸುವ ನಿಲುವು ಮುಂದಿಟ್ಟಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R