
ಕಲಬುರಗಿ, 22 ನವೆಂಬರ್ (ಹಿ.ಸ.):
ಬಸವ ಮಂಟಪ ಪುಸ್ತಕ ವಿವಾದಕ್ಕೆ ಸಂಬಂಧಿಸಿದಂತೆ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ ವಿಶ್ವೇಶ್ವರ ಭಟ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಲಬುರಗಿಯಲ್ಲಿ ಬಸವಾಭಿಮಾನಿಗಳು ಪ್ರತಿಭಟನೆ ನಡೆಸಿದರು.
ನಗರದ ಗಾಂಧಿ ನಗರದ ಮಹಾದ್ವಾರದ ಬಳಿ ಶಿವಾಜಿ ನಗರದ ಬಸವ ಮಿತ್ರ ಮಂಡಳಿ ಹಾಗೂ ಬಸವಲಿಂಗೇಶ್ವರ ಪಂಚ ಮಂಡಳಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಪ್ರತಿಭಟನಾಕಾರರು ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ ವಿಶ್ವೇಶ್ವರ ಭಟ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೆ, ರವಿ ಹಂಜ್ ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ಭಾವಚಿತ್ರ ದಹನ ಮಾಡುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಸವಾಭಿಮಾನಿ ಶಿವಲಿಂಗಪ್ಪ ಕೆಂಗ್ನಾಳ್ ಹಾಗೂ ಹೋರಾಟಗಾರ ಸಂಗಮೇಶ್, ವಿವಾದಿತ ಪುಸ್ತಕವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡರೆ ಮಾತ್ರ ಸಾಲದು.
ಪುಸ್ತಕದ ವಿವಾದದ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆಹಚ್ಚಲು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಲೇಖಕ ರವಿ ಹಂಜ್ ವಿರುದ್ಧ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ತನಿಖೆ ನಡೆಸಬೇಕು. ಪ್ರಕರಣದ ಹಿಂದಿರುವವರನ್ನು ಬಹಿರಂಗಪಡಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಬಸವಣ್ಣನವರ ವಿಚಾರಧಾರೆ ಹಾಗೂ ಗೌರವಕ್ಕೆ ಧಕ್ಕೆ ತರುವಂತಹ ಕೃತ್ಯಗಳನ್ನು ಸಹಿಸುವುದಿಲ್ಲ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R