
ಕೊಪ್ಪಳ, 22 ನವೆಂಬರ್ (ಹಿ.ಸ.):
ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಮಹಿಳಾ ಸಚಿವ ಸ್ಥಾನದ ಭರ್ತಿಗೆ ಹೈಕಮಾಂಡ್ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಿಳಾ ಸಚಿವ ಸ್ಥಾನ ಖಾಲಿ ಇರುವುದು ಸತ್ಯ. ನಮ್ಮದು ಹೈಕಮಾಂಡ್ ಪಕ್ಷವಾಗಿದ್ದು, ಎಲ್ಲ ವಿಚಾರಗಳನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ. ಆದಷ್ಟು ಬೇಗ ಮಹಿಳಾ ಸಚಿವ ಸ್ಥಾನವನ್ನು ಭರ್ತಿ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಸವಣ್ಣನವರ ಕುರಿತು ಅವಹೇಳನಕಾರಿ ಬರಹಕ್ಕೆ ಖಂಡನೆ
ಜಗಜ್ಯೋತಿ ಬಸವಣ್ಣನವರ ಕುರಿತು ರವಿ ಹಂಜ್ ಅವಹೇಳನಕಾರಿ ಬರಹ ಪ್ರಕಟಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಲೇಖಕರ ನಡೆಯನ್ನು ಖಂಡಿಸುತ್ತೇನೆ. ಇಂತಹ ಕೃತ್ಯ ಎಸಗಿದವರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.
ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕೆಲವರು ಇಂತಹ ಕೃತ್ಯಗಳಲ್ಲಿ ತೊಡಗುತ್ತಾರೆ. ಅವರ ಹಿನ್ನೆಲೆಯನ್ನು ಸ್ವಲ್ಪ ಪರಿಶೀಲಿಸಿ ನೋಡಬೇಕು ಎಂದು ಮಧು ಬಂಗಾರಪ್ಪ ಹೇಳಿದರು.
15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ
ರಾಜ್ಯದಲ್ಲಿ ಶಿಕ್ಷಣ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಭರ್ತಿ ಕುರಿತು ಮಾತನಾಡಿದ ಸಚಿವರು, ಬಿಇಒ, ಡಿಡಿಪಿಐ ಹಾಗೂ ಹಿರಿಯ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಬಡ್ತಿ ಹಾಗೂ ಇಲಾಖೆಯ ವಿವಿಧ ಆಂತರಿಕ ಪ್ರಕ್ರಿಯೆಗಳ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ನೇರ ನೇಮಕಾತಿ ಮೂಲಕ ಖಾಲಿ ಹುದ್ದೆಗಳನ್ನು ತುಂಬಲು ಸರ್ಕಾರದ ಮಟ್ಟದಲ್ಲಿಯೂ ಪ್ರಯತ್ನಗಳು ನಡೆಯುತ್ತಿವೆ ಎಂದರು.
ರಾಜ್ಯದಲ್ಲಿ ಹೊಸದಾಗಿ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಕೊಪ್ಪಳ ಸೇರಿದಂತೆ ಈ ಭಾಗದ ಜಿಲ್ಲೆಗಳಲ್ಲಿಯೂ ಶಿಕ್ಷಕರ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗುವುದು. ನೂತನ ತಾಲೂಕುಗಳಲ್ಲಿ ಬಿಇಒ ಕಚೇರಿಗಳನ್ನು ಸ್ಥಾಪಿಸುವ ಪ್ರಯತ್ನವೂ ನಡೆಯುತ್ತಿದೆ. ಶಿಕ್ಷಣ ಇಲಾಖೆಯು ದೊಡ್ಡ ಇಲಾಖೆಯಾಗಿರುವುದರಿಂದ ಆದ್ಯತೆಯ ಮೇರೆಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.
ಅನುದಾನಿತ ಶಿಕ್ಷಕರ ಬೇಡಿಕೆ ಪರಿಶೀಲನೆ
ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಪ್ರತಿಭಟನೆ ಹಾಗೂ ಬೇಡಿಕೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ಅನುದಾನಿತ ಶಿಕ್ಷಣ ಸಂಸ್ಥೆಗಳ ಬೇಡಿಕೆಗಳನ್ನು ನಿಯಮಾನುಸಾರ ಪರಿಶೀಲಿಸಿ ಈಡೇರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಕಳಪೆ ಶೂ ವಿತರಣೆ ಆರೋಪ ನಿರಾಕರಣೆ
ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಶೂ ವಿತರಣೆ ಮಾಡಲಾಗಿದೆ ಎಂಬ ಆರೋಪವನ್ನು ಸಚಿವರು ತಳ್ಳಿಹಾಕಿದರು. ರಾಜ್ಯದ ಯಾವುದೇ ಶಾಲೆಯಲ್ಲಿಯೂ ವಿದ್ಯಾರ್ಥಿಗಳಿಗೆ ಕಳಪೆ ಶೂ ವಿತರಣೆ ಮಾಡಿಲ್ಲ. ಕೆಲವೆಡೆ ಶೂಗಳ ಅಳತೆಯಲ್ಲಿ ವ್ಯತ್ಯಾಸವಾಗಿರಬಹುದು. ಆದರೆ ಗುಣಮಟ್ಟದಲ್ಲಿ ಯಾವುದೇ ಲೋಪವಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ಶೂ ಖರೀದಿಗೆ ಟೆಂಡರ್ ಪ್ರಕ್ರಿಯೆ ನಡೆಸುವ ಮೂಲಕ ಸರ್ಕಾರಕ್ಕೆ 32 ಕೋಟಿ ರೂಪಾಯಿ ಉಳಿತಾಯ ಮಾಡಲಾಗಿದೆ. ಸಾರ್ವಜನಿಕ ಹಣವನ್ನು ಉಳಿಸುವ ಉದ್ದೇಶದಿಂದ ಪಾರದರ್ಶಕವಾಗಿ ಟೆಂಡರ್ ಕರೆಯಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
--------------
ಹಿಂದೂಸ್ತಾನ್ ಸಮಾಚಾರ್ / BHARGAVI G R