
ಮಂಡ್ಯ, 22 ನವೆಂಬರ್ (ಹಿ.ಸ.):
ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿ ಪ್ರತಿ ಟನ್ ಕಬ್ಬಿಗೆ ₹4,500 ಎಫ್ಆರ್ಪಿ (ನ್ಯಾಯಸಮ್ಮತ ಮತ್ತು ಲಾಭದಾಯಕ ಬೆಲೆ) ನಿಗದಿಪಡಿಸುವಂತೆ ಒತ್ತಾಯಿಸಿ ಮಂಡ್ಯ ರಕ್ಷಣಾ ವೇದಿಕೆ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಬ್ಬು ಹಾಗೂ ಮನವಿ ಪತ್ರವನ್ನು ಕೊರಿಯರ್ ಮೂಲಕ ರವಾನಿಸಲಾಯಿತು.
ಶ್ರೀರಂಗಪಟ್ಟಣದ ಪ್ರೊಫೆಷನಲ್ ಕೊರಿಯರ್ ಕಚೇರಿ ಮೂಲಕ ಪ್ರಧಾನಿ ಕಾರ್ಯಾಲಯಕ್ಕೆ ಕಬ್ಬು ಮತ್ತು ಮನವಿ ಪತ್ರವನ್ನು ಕಳುಹಿಸಲಾಯಿತು. ಮಂಡ್ಯ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಶಂಕರ್ ಬಾಬು ನೇತೃತ್ವದಲ್ಲಿ ಈ ವಿನೂತನ ಪ್ರತಿಭಟನೆ ನಡೆಯಿತು.
ಕಬ್ಬಿಗೆ ಸೂಕ್ತ ಎಫ್ಆರ್ಪಿ ದರ ನಿಗದಿಪಡಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿಳಂಬ ಮಾಡುತ್ತಿವೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಎರಡೂ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಬ್ಬು ಬೆಳೆಗಾರರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ರೈತರ ನೆರವಿಗೆ ಕೇಂದ್ರ ಸರ್ಕಾರ ತಕ್ಷಣ ಧಾವಿಸಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ಈ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಿ, ಪ್ರತಿ ಟನ್ ಕಬ್ಬಿಗೆ ₹4,500 ಎಫ್ಆರ್ಪಿ ದರ ನಿಗದಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ರೈತರು ಬೆಳೆದ ಕಬ್ಬಿಗೆ ನ್ಯಾಯಯುತ ಬೆಲೆ ದೊರೆಯದಿದ್ದರೆ ಅವರ ಬದುಕು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿದೆ. ಅನ್ನದಾತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ರೈತರ ಬೇಡಿಕೆಗೆ ಸ್ಪಂದಿಸಬೇಕು ಎಂದು ಶಂಕರ್ ಬಾಬು ಒತ್ತಾಯಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R