
ಬಾಗಲಕೋಟೆ, 22 ನವೆಂಬರ್ (ಹಿ.ಸ.)
ತಾಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ವಿಜಯಾನಂದ ಕಾಶಪ್ಪನವರ ತಿಳಿಸಿದರು.
ನೀರು ಪ್ರತಿಯೊಂದು ಜೀವಿಯ ಹಕ್ಕು ಹಾಗೂ ಪ್ರತಿಯೊಂದು ಕುಟುಂಬದ ಬದುಕಿನ ಪ್ರಮುಖ ಆಧಾರವಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ನೀರಿನ ಸೌಲಭ್ಯವಿಲ್ಲದ ಪ್ರದೇಶಗಳನ್ನು ಗುರುತಿಸಿ ಬೋರ್ವೆಲ್ಗಳನ್ನು ಕೊರೆಸುವುದು, ನೀರಿನ ಕೊರತೆ ಇರುವ ಗ್ರಾಮಗಳಲ್ಲಿ ಅಗತ್ಯಕ್ಕೆ ತಕ್ಕಂತೆ ಪೈಪ್ಲೈನ್ ಅಳವಡಿಸಿ ಸಮರ್ಪಕ ನೀರು ಪೂರೈಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಹೇಳಿದರು.
ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಅಗತ್ಯವಿರುವ ಕಾಮಗಾರಿಗಳನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಲು ಅನುದಾನದ ಕೊರತೆಯಾಗದಂತೆ ಕ್ರಮ ವಹಿಸುವ ಭರವಸೆಯನ್ನೂ ನೀಡಲಾಗಿದೆ. ಗ್ರಾಮೀಣ ಭಾಗದ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬುದು ಸರ್ಕಾರದ ಉದ್ದೇಶವಾಗಿದೆ ಎಂದರು.
ಪ್ರತಿಯೊಂದು ಗ್ರಾಮಕ್ಕೂ ಸಮರ್ಪಕ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವುದು ಹಾಗೂ ಪ್ರತಿಯೊಂದು ಮನೆಗೂ ನೀರು ತಲುಪಿಸುವುದು ನಮ್ಮ ಆದ್ಯತೆಯಾಗಿದೆ. ಜನರ ಮೂಲಭೂತ ಅಗತ್ಯಗಳನ್ನು ಈಡೇರಿಸುವುದು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಸಚಿವ ವಿಜಯಾನಂದ ಕಾಶಪ್ಪನವರ ತಿಳಿಸಿದರು.
ಕುಡಿಯುವ ನೀರಿನ ಸಮಸ್ಯೆ ಕಂಡುಬರುವ ಗ್ರಾಮಗಳಲ್ಲಿ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳು ಮುತುವರ್ಜಿ ವಹಿಸಬೇಕು. ನೀರು ಪೂರೈಕೆಯಲ್ಲಿ ಯಾವುದೇ ತೊಂದರೆಯಾಗದಂತೆ ನಿರಂತರ ನಿಗಾ ವಹಿಸುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande