
ಪುತ್ತೂರು, 22 ನವೆಂಬರ್ (ಹಿ.ಸ.):
ರಾಜಕಾರಣವೆಂದರೆ ನಮ್ಮ ಬದುಕನ್ನು ಕಟ್ಟಿಕೊಳ್ಳುವುದಲ್ಲ, ಜನಸಾಮಾನ್ಯರ ಬದುಕನ್ನು ಕಟ್ಟಿಕೊಡುವುದು. ಅಧಿಕಾರವೆಂದರೆ ದರ್ಪದ ಸಾಧನವಲ್ಲ, ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಣ್ಣೀರು ಒರೆಸುವ ಜವಾಬ್ದಾರಿ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದರು.
ಪುತ್ತೂರಿನಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಆಯೋಜಿಸಿದ್ದ ‘ಅಶೋಕ್ ಜನಮನ–2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಳೆದ 14–15 ವರ್ಷಗಳಿಂದ ತಮ್ಮ ಸ್ವಂತ ದುಡಿಮೆಯ ಒಂದು ಭಾಗವನ್ನು ಸಮಾಜದ ಸೇವೆಗೆ ಮೀಸಲಿಟ್ಟು, ಸಾವಿರಾರು ತಾಯಂದಿರು ಹಾಗೂ ಅಕ್ಕತಂಗಿಯರ ಮುಖದಲ್ಲಿ ಸಂತೋಷ ಮೂಡಿಸುತ್ತಿರುವ ಅಶೋಕ್ ರೈ ಅವರ ಸಾಮಾಜಿಕ ಬದ್ಧತೆ ನಿಜಕ್ಕೂ ಶ್ಲಾಘನೀಯವಾಗಿದೆ ಎಂದರು.
ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಸಮಾಜದ ನಿಜವಾದ ಅಭಿವೃದ್ಧಿಯ ಅಡಿಪಾಯಗಳಾಗಿವೆ. ಪಂಡಿತ್ ಜವಾಹರಲಾಲ್ ನೆಹರು ಅವರು ಪ್ರತಿಪಾದಿಸಿದ ರಾಷ್ಟ್ರನಿರ್ಮಾಣದ ಆಶಯವೂ ಇದೇ ಆಗಿತ್ತು. ಬಡವರ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ, ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೌಲಭ್ಯ ಹಾಗೂ ಯುವಜನತೆಗೆ ಗೌರವಯುತ ಉದ್ಯೋಗ ದೊರೆಯಬೇಕು. ಈ ಮೂರು ಕ್ಷೇತ್ರಗಳಿಗೆ ಆದ್ಯತೆ ನೀಡುತ್ತಿರುವ ಅಶೋಕ್ ರೈ ಅವರ ಅಭಿವೃದ್ಧಿಯ ದೃಷ್ಟಿಕೋನ ಸ್ವಾಗತಾರ್ಹ ಎಂದು ಹೇಳಿದರು.
ಮಹಿಳೆಯರಿಗೆ ಗೌರವ ಸಲ್ಲಿಸುವುದರ ಜತೆಗೆ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಅಧಿಕಾರವನ್ನೂ ನೀಡಬೇಕು. ಮಹಿಳಾ ಮೀಸಲಾತಿಯ ಪರಿಣಾಮಕಾರಿ ಅನುಷ್ಠಾನವಾಗಬೇಕು ಎಂದು ಪ್ರತಿಪಾದಿಸಿದರು.
ಕರಾವಳಿಯ ಸಾಂಸ್ಕೃತಿಕ ಅಸ್ಮಿತೆಯಾಗಿರುವ ತುಳು ಹಾಗೂ ಕೊಡವ ಭಾಷೆಗಳಿಗೆ ಸಂವಿಧಾನದ ಎಂಟನೇ ಅನುಸೂಚಿಯಲ್ಲಿ ಸ್ಥಾನಮಾನ ಕಲ್ಪಿಸಲು ಕೇಂದ್ರ ಸರ್ಕಾರ ಮುಂದಾಗಬೇಕು. ಈ ನಿಟ್ಟಿನಲ್ಲಿ ನಮ್ಮ ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಸಮುದಾಯಗಳ ಧರ್ಮಗುರುಗಳು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪಿ.ವಿ. ಮೋಹನ್, ಮಾಜಿ ಸಚಿವ ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್, ರೈ ಎಸ್ಟೇಟ್ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ನ ಪದಾಧಿಕಾರಿಗಳು ಹಾಗೂ ಸಾವಿರಾರು ಸಾರ್ವಜನಿಕರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.