
ಬಾಗಲಕೋಟೆ, 23 ನವೆಂಬರ್ (ಹಿ.ಸ.)
ಬೀಳಗಿ ತಾಲೂಕಿನ ನಾಗರಾಳ ತಾಂಡಾ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಕುಮಾರ್ ಲಮಾಣಿ ಅವರು ಮೃತ ವ್ಯಕ್ತಿಯ ಕಾನೂನುಬದ್ಧ ವಾರಸುದಾರರಿಗೆ ವಂಚಿಸಿ, ನಕಲಿ ದಾಖಲೆಗಳನ್ನು ಸೃಷ್ಟಿಸುವ ಮೂಲಕ ತಮ್ಮ ಸಂಬಂಧಿಕರ ಹೆಸರಿಗೆ ಸುಮಾರು 12 ಎಕರೆ ಜಮೀನನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿದ್ದಾರೆ ಎಂದು ರವೀಂದ್ರ ಲಮಾಣಿ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಆರೋಪಿಸಿರುವ ರವೀಂದ್ರ ಲಮಾಣಿ, ಮೃತ ವ್ಯಕ್ತಿಯ ಆಸ್ತಿಗೆ ಸಂಬಂಧಿಸಿದಂತೆ ಕಾನೂನುಬದ್ಧ ವಾರಸುದಾರರಿಗೆ ಸಲ್ಲಬೇಕಾದ ಹಕ್ಕನ್ನು ಕಡೆಗಣಿಸಿ, ನಕಲಿ ದಾಖಲೆಗಳನ್ನು ಸೃಷ್ಟಿಸಿ ಜಮೀನನ್ನು ಸಂಬಂಧಿಕರ ಹೆಸರಿಗೆ ಮಾಡಲಾಗಿದೆ ಎಂದು ದೂರಿದ್ದಾರೆ.
ಸರ್ಕಾರಿ ಅಧಿಕಾರಿಗಳ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಸಾರ್ವಜನಿಕರ ಆಸ್ತಿ ಮತ್ತು ಕಂದಾಯ ದಾಖಲೆಗಳ ನಿರ್ವಹಣೆಯಲ್ಲಿ ಪಾರದರ್ಶಕತೆ ಹಾಗೂ ಕಾನೂನುಬದ್ಧವಾಗಿ ನಡೆದುಕೊಳ್ಳಬೇಕು. ಆದರೆ, ಗ್ರಾಮ ಲೆಕ್ಕಾಧಿಕಾರಿಯ ವಿರುದ್ಧ ಇಷ್ಟೊಂದು ಗಂಭೀರ ಆರೋಪ ಕೇಳಿಬಂದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮೃತ ವ್ಯಕ್ತಿಯ ಕಾನೂನುಬದ್ಧ ವಾರಸುದಾರರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕು. ಜಮೀನಿನ ಮೂಲ ದಾಖಲೆಗಳು, ಪಹಣಿ, ಖಾತೆ ಬದಲಾವಣೆ ಹಾಗೂ ಇತರ ಕಂದಾಯ ದಾಖಲೆಗಳನ್ನು ಪರಿಶೀಲಿಸಬೇಕು. ಆರೋಪ ಸಾಬೀತಾದಲ್ಲಿ ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರವೀಂದ್ರ ಲಮಾಣಿ ಒತ್ತಾಯಿಸಿದ್ದಾರೆ.
ಜಿಲ್ಲಾಡಳಿತ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ನಿಷ್ಪಕ್ಷಪಾತ ತನಿಖೆ ನಡೆಸುವ ಮೂಲಕ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂಬುದು ಅವರ ಆಗ್ರಹವಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande