
ಬೆಂಗಳೂರು, 23 ನವೆಂಬರ್ (ಹಿಂ.ಸ.):
ರಾಜ್ಯದಲ್ಲಿ ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಹಲವು ಬಾರಿ ಪತ್ರ ಬರೆದಿದ್ದರೂ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ಈ ಹಿನ್ನೆಲೆಯಲ್ಲಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಹಾಗೂ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕೇಂದ್ರ ಸರ್ಕಾರ ಬರ ಪರಿಹಾರ ನೀಡದ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿ ಪ್ರತಿಭಟನೆ ನಡೆಸಬೇಕಾಯಿತು. ಆದರೂ ಕೇಂದ್ರ ಸ್ಪಂದಿಸದ ಕಾರಣ ಸುಪ್ರೀಂ ಕೋರ್ಟ್ ಮೊರೆ ಹೋಗಬೇಕಾಯಿತು.
ನ್ಯಾಯಾಲಯದ ನಿರ್ದೇಶನದ ಬಳಿಕ ರಾಜ್ಯ ಕೇಳಿದ್ದ 18 ಸಾವಿರ ಕೋಟಿ ರೂ.ಗಳ ಪೈಕಿ ಕೇವಲ 3,500 ಕೋಟಿ ರೂ.ಗಳನ್ನು ನೀಡಲಾಗಿತ್ತು ಎಂದು ಹೇಳಿದರು.
ಈ ಬಾರಿ ಅಂತಹ ಪರಿಸ್ಥಿತಿ ನಿರ್ಮಾಣವಾಗುವುದಿಲ್ಲ ಎಂಬ ವಿಶ್ವಾಸವಿದೆ. ಕೇಂದ್ರ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಬಹುದು ಎಂದು ನಿರೀಕ್ಷಿಸಿದ್ದೇವೆ. ರಾಜ್ಯಕ್ಕೆ ಕೇಂದ್ರದ ತಂಡಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವರದಿಯನ್ನೂ ಸಲ್ಲಿಸಿವೆ. ಈಗಾಗಲೇ ರಾಜ್ಯ ಸರ್ಕಾರ ಮೂರು ಮನವಿಗಳನ್ನು ಸಲ್ಲಿಸಿ 22 ಸಾವಿರ ಕೋಟಿ ರೂ. ಪರಿಹಾರಕ್ಕೆ ಬೇಡಿಕೆ ಇಟ್ಟಿದೆ. ಕೇಂದ್ರ ಸರ್ಕಾರ ಸಮಗ್ರವಾಗಿ ಪರಿಶೀಲಿಸಿ ಸೂಕ್ತ ಪರಿಹಾರ ನೀಡಿದರೆ ಸಂತೋಷವಾಗಲಿದೆ ಎಂದರು.
ರೈತರಿಗೆ ತಲಾ 5 ಸಾವಿರ ರೂ. ಪರಿಹಾರ ವಿತರಣೆ
ರಾಜ್ಯ ಸರ್ಕಾರ ಈಗಾಗಲೇ ರೈತರಿಗೆ ತಲಾ 5 ಸಾವಿರ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದು, ಹಣ ವಿತರಿಸುವ ಪ್ರಕ್ರಿಯೆ ಆರಂಭವಾಗಿದೆ. ಬಹುತೇಕ ಎಲ್ಲ ಜಿಲ್ಲೆಗಳ ರೈತರಿಗೂ ಪರಿಹಾರ ತಲುಪಿಸುವ ಕಾರ್ಯ ನಡೆಯುತ್ತಿದೆ. ವಿಧಾನಮಂಡಲ ಅಧಿವೇಶನ ಆರಂಭವಾಗುವ ಮೊದಲು ಘೋಷಿಸಿರುವ ಪರಿಹಾರವನ್ನು ರೈತರಿಗೆ ತಲುಪಿಸುವ ಉದ್ದೇಶವಿದೆ. ಈ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಬರ ಪರಿಹಾರದ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರಾಜ್ಯದ ಬೆಂಬಲಕ್ಕೆ ನಿಲ್ಲಬೇಕು. ರಾಜ್ಯ ಮತ್ತು ಕೇಂದ್ರ ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗುವ ಬದಲು ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು. ರೈತರಿಗೆ ನೆರವಾಗುವುದು ಎಲ್ಲರ ಆದ್ಯತೆಯಾಗಬೇಕು ಎಂದು ಹೇಳಿದರು.
ಸಿಎಂ ಜಪಾನ್ ಪ್ರವಾಸದ ಬಗ್ಗೆ ವಿಜಯೇಂದ್ರ ಟೀಕೆಗೆ ತಿರುಗೇಟು
ಮುಖ್ಯಮಂತ್ರಿ ಹಾಗೂ ಅಧಿಕಾರಿಗಳ ಜಪಾನ್ ಪ್ರವಾಸದ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಡಿರುವ ಟೀಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಇವೆಲ್ಲ ಚಿಲ್ಲರೆ ಪ್ರತಿಕ್ರಿಯೆಗಳು ಎಂದು ಹೇಳಿದರು.
ರಾಜ್ಯದ ಬಂಡವಾಳ ಹೂಡಿಕೆ ಆಕರ್ಷಿಸುವ ಉದ್ದೇಶದಿಂದ ಜವಾಬ್ದಾರಿಯುತ ಮುಖ್ಯಮಂತ್ರಿಗಳು ವಿದೇಶಕ್ಕೆ ತೆರಳಿದ್ದಾರೆ. ಬೇರೆ ದೇಶಗಳ ಉದ್ಯಮಿಗಳನ್ನು ಭೇಟಿಯಾಗಿ ರಾಜ್ಯಕ್ಕೆ ಬಂಡವಾಳ ಹೂಡಿಕೆ ಮಾಡುವಂತೆ ಆಹ್ವಾನಿಸುವುದು ಹಾಗೂ ಸರ್ಕಾರ ಹೂಡಿಕೆದಾರರಿಗೆ ಅಗತ್ಯ ಸಹಕಾರ ನೀಡಲಿದೆ ಎಂಬ ವಿಶ್ವಾಸ ಮೂಡಿಸುವುದು ಪ್ರವಾಸದ ಉದ್ದೇಶವಾಗಿದೆ. ಇಂತಹ ವಿಚಾರಗಳನ್ನು ಸರಿಯಾದ ರೀತಿಯಲ್ಲಿ ಅರ್ಥೈಸಿಕೊಳ್ಳಬೇಕು. ಟೀಕೆ ಮಾಡುವುದು ಸುಲಭ, ಆದರೆ ಅದರ ಹಿಂದಿನ ಉದ್ದೇಶವನ್ನು ಅರ್ಥಮಾಡಿಕೊಳ್ಳುವುದು ಮುಖ್ಯ ಎಂದು ಹೇಳಿದರು.
ಕೆಪಿಎಸ್ಸಿ ಅಕ್ರಮ ಪ್ರಕರಣ: ಸಂಪುಟದಲ್ಲಿ ಚರ್ಚೆ
ಕೆಪಿಎಸ್ಸಿ ಅಕ್ರಮಕ್ಕೆ ಸಂಬಂಧಿಸಿದಂತೆ ಹೊಸ ಎಫ್ಐಆರ್ ದಾಖಲಿಸುವಂತೆ ಹೈಕೋರ್ಟ್ ಆದೇಶಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ವಿಷಯವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು.
ನ್ಯಾಯಾಲಯದ ನಿರ್ದೇಶನಗಳೇನು ಎಂಬುದನ್ನು ಪರಿಶೀಲಿಸಿ, ಅಂತಿಮವಾಗಿ ಯಾವ ನಿರ್ಧಾರ ಕೈಗೊಳ್ಳಬೇಕು ಎಂಬುದನ್ನು ತೀರ್ಮಾನಿಸಲಾಗುವುದು ಎಂದು ತಿಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R