
ಕಲಬುರಗಿ, 23 ನವೆಂಬರ್ (ಹಿ.ಸ.):
ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಎರಡು ಎಲೆಕ್ಟ್ರಿಕಲ್ ಅಂಗಡಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಕಲಬುರಗಿ ನಗರದ ನ್ಯೂ ಜೇವರ್ಗಿ ಕ್ರಾಸ್ ಬಳಿ ನಡೆದಿದೆ.
ಚಂದ್ರಕಾಂತ್ ಅವರಿಗೆ ಸೇರಿದ ಎರಡು ಎಲೆಕ್ಟ್ರಿಕಲ್ ಅಂಗಡಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಸುಮಾರು 30ರಿಂದ 40 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದು ಅಂದಾಜಿಸಲಾಗಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬೆಂಕಿ ಕ್ಷಣಾರ್ಧದಲ್ಲಿ ಅಂಗಡಿಗಳಿಗೆ ವ್ಯಾಪಿಸಿದ್ದು, ಅಂಗಡಿಯಲ್ಲಿದ್ದ ವಿದ್ಯುತ್ ಉಪಕರಣಗಳು ಹಾಗೂ ಇತರೆ ವಸ್ತುಗಳು ಸುಟ್ಟು ಕರಕಲಾಗಿವೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯು ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬರಬೇಕಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R