


ಬಳ್ಳಾರಿ, 24 ನವೆಂಬರ್ (ಹಿ.ಸ.)
ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಅಡಿಯಲ್ಲಿ ಬಿಡುಗಡೆಯಾಗಿರುವ ಅನುದಾನವನ್ನು ನಿಗದಿತ ಕಾಲಮಿತಿಯೊಳಗೆ ಸಮರ್ಪಕವಾಗಿ ಬಳಸಿಕೊಂಡು, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಹೇಳಿದರು.
ಮಂಗಳವಾರ, ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಕರ್ನಾಟಕ ಅನುಸೂಚಿತ ಜಾತಿಗಳ ಉಪ ಯೋಜನೆ ಮತ್ತು ಅನುಸೂಚಿತ ಬುಡಕಟ್ಟುಗಳ ಉಪಯೋಜನೆ (ಯೋಜನೆ ರೂಪಿಸುವುದು, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ) ಅಧಿನಿಯಮ-2013ರ ಸೆಕ್ಷನ್-11ರ ಅಡಿಯಲ್ಲಿ ರಚಿಸಲಾದ ಜಿಲ್ಲಾ ಮೇಲ್ವಿಚಾರಣಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಸಕ್ತ ಆರ್ಥಿಕ ಸಾಲಿನಲ್ಲಿ ವಿವಿಧ ಇಲಾಖೆಗಳಿಗೆ ಹಂಚಿಕೆಯಾಗಿರುವ ಅನುದಾನವನ್ನು ಸಂಪೂರ್ಣವಾಗಿ ವೆಚ್ಚ ಮಾಡಬೇಕು. ಅನುದಾನ ವಾಪಸ್ ಹೋದರೆ ಸಂಬAಧಪಟ್ಟ ಇಲಾಖೆಯ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.
ಪರಿಶಿಷ್ಟ ಜಾತಿ ಉಪಯೋಜನೆ (ಎಸ್ಎಸ್ಪಿ) ಮತ್ತು ಗಿರಿಜನ ಉಪಯೋಜನೆ (ಟಿಎಸ್ಪಿ) ಅಡಿ ನೀಡಲಾಗುವ ಸರ್ಕಾರದ ಅನುದಾನವು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಬೇಕು ಹಾಗೂ ಯೋಜನೆಗಳ ಪ್ರಗತಿಯಲ್ಲಿ ಯಾವುದೇ ಲೋಪದೋಷಗಳಾಗದಂತೆ ಎಚ್ಚರ ವಹಿಸಬೇಕು ಎಂದು ಸಂಬ0ಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಳ್ಳಾರಿ ಜಿಲ್ಲೆಯಲ್ಲಿ ಎಸಿ ಮತ್ತು ಎಸ್ಟಿ ಜನಸಂಖ್ಯೆಯ ಪ್ರಮಾಣ ಶೇ.40 ಕ್ಕೂ ಹೆಚ್ಚಿರುವುದರಿಂದ, ಫಲಾನುಭವಿ ಆಧಾರಿತ ಯೋಜನೆಗಳ ಪ್ರಯೋಜನವು ಆ ಸಮುದಾಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ತಲುಪಬೇಕು. ಯೋಜನೆಗಳ ಹಂಚಿಕೆ ಮತ್ತು ವಿತರಣೆ ಸಂದರ್ಭದಲ್ಲಿ ತೆಗೆದ ಛಾಯಾಚಿತ್ರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು ಹಾಗೂ ಪ್ರತಿಯೊಂದು ಹಂತದಲ್ಲೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈ ಹಿಂದೆ ಜಿಲ್ಲೆಯಲ್ಲಿ ಅನುದಾನ ದುರ್ಬಳಕೆ ಮತ್ತು ನಿಯಮ ಉಲ್ಲಂಘನೆಗೆ ಸಂಬ0ಧಿಸಿದ0ತೆ ತನಿಖಾ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ, ಮುಂದಿನ ದಿನಗಳಲ್ಲಿ ಯಾವುದೇ ಲೋಪವಾಗದಂತೆ ಕಾರ್ಯನಿರ್ವಹಿಸಬೇಕು ಎಂದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಸೌಲಭ್ಯ ನೀಡುವಾಗ ಎಫ್ಐಡಿ, ಆಧಾರ್ ಕಾರ್ಡ್ ಮತ್ತು ಆರ್ಟಿಸಿ ದಾಖಲೆಗಳನ್ನು ಕಡ್ಡಾಯವಾಗಿ ಪರಿಶೀಲಿಸಿ, ನಿಜವಾದ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ತಲುಪುವಂತೆ ನೋಡಿಕೊಳ್ಳಬೇಕು. ತಪ್ಪು ಮಾಹಿತಿ ಅಥವಾ ಅಕ್ರಮಗಳಿಗೆ ಅವಕಾಶ ನೀಡಬಾರದು ಎಂದು ಸೂಚಿಸಿದರು.
ವಿವಿಧ ನಿಗಮಗಳು ಹಾಗೂ ಇಲಾಖೆಗಳ ವತಿಯಿಂದ ನೀಡಲಾಗುವ ಸ್ವಯಂ ಉದ್ಯೋಗ ಸಾಲ, ಸಹಾಯಧನ ಮತ್ತು ಇತರೆ ವೈಯಕ್ತಿಕ ಸೌಲಭ್ಯಗಳಿಗೆ ಅರ್ಹ ಫಲಾನುಭವಿಗಳನ್ನು ಪಾರದರ್ಶಕವಾಗಿ ಆಯ್ಕೆ ಮಾಡಬೇಕು ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ತೋಟಗಾರಿಕೆ, ಪಶುಪಾಲನೆ, ಶಿಕ್ಷಣ, ಆರೋಗ್ಯ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳ ಪ್ರಗತಿಯನ್ನು ಸಭೆಯಲ್ಲಿ ಪರಿಶೀಲಿಸಿದರು.
ಸಭೆಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತ ಪಿ.ಎಸ್. ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಚಿದಾನಂದಪ್ಪ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೋದಿನ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್