
ಬೆಂಗಳೂರು, 24 ನವೆಂಬರ್ (ಹಿ.ಸ.):
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಎ1 ಪವಿತ್ರಾ ಗೌಡ ಮತ್ತೊಮ್ಮೆ ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ತಮ್ಮ ಸಹೋದರನ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲು ಮಧ್ಯಂತರ ಜಾಮೀನು ನೀಡುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ 4ಕ್ಕೆ ಮುಂದೂಡಿದೆ.
ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠದಲ್ಲಿ ಇಂದು ಪವಿತ್ರಾ ಗೌಡ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ಡಿಸೆಂಬರ್ 12 ಮತ್ತು 13ರಂದು ತಮ್ಮ ಸಹೋದರನ ವಿವಾಹ ಸಮಾರಂಭ ನಡೆಯಲಿದ್ದು, ಕುಟುಂಬದ ಪ್ರಮುಖ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಅಗತ್ಯವಾಗಿದೆ. ಹೀಗಾಗಿ ತಾತ್ಕಾಲಿಕವಾಗಿ ಜಾಮೀನು ಮಂಜೂರು ಮಾಡಬೇಕು ಎಂದು ಪವಿತ್ರಾ ಗೌಡ ಮನವಿ ಮಾಡಿದ್ದಾರೆ.
ವಿಚಾರಣೆ ವೇಳೆ ಪವಿತ್ರಾ ಗೌಡ ಪರ ವಕೀಲರು, ಅರ್ಜಿಯ ಪ್ರತಿಯನ್ನು ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ (ಎಸ್ಪಿಪಿ) ಸಲ್ಲಿಸಲು ಕಾಲಾವಕಾಶ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ನ್ಯಾಯಪೀಠ, ಅರ್ಜಿಯ ಪ್ರತಿ ಮತ್ತು ನೋಟಿಸ್ ಪಡೆದುಕೊಳ್ಳುವಂತೆ ಎಸ್ಪಿಪಿಗೆ ಸೂಚಿಸಿತು. ಅಲ್ಲದೆ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿ, ಮುಂದಿನ ವಿಚಾರಣೆಯನ್ನು ಡಿಸೆಂಬರ್ 4ಕ್ಕೆ ನಿಗದಿಪಡಿಸಿತು.
ಈ ಹಿಂದೆ ಜಾಮೀನು ಅರ್ಜಿ ತಿರಸ್ಕೃತ
ಇದಕ್ಕೂ ಮೊದಲು ಸೆಪ್ಟೆಂಬರ್ 26ರಂದು ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯವು ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದೀಗ ಹೈಕೋರ್ಟ್ನಲ್ಲಿ ಮತ್ತೊಮ್ಮೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಸಹೋದರನ ವಿವಾಹದಲ್ಲಿ ಭಾಗವಹಿಸುವ ಉದ್ದೇಶದಿಂದ ಮಧ್ಯಂತರ ಜಾಮೀನು ಕೋರಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಬಳಿಕ ಪವಿತ್ರಾ ಗೌಡ ಹಲವು ಬಾರಿ ಜಾಮೀನಿಗಾಗಿ ನ್ಯಾಯಾಲಯಗಳ ಮೊರೆ ಹೋಗಿದ್ದಾರೆ. ಸೆಷನ್ಸ್ ನ್ಯಾಯಾಲಯ, ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ಗಳಲ್ಲಿ ಸಾಮಾನ್ಯ ಮತ್ತು ಮಧ್ಯಂತರ ಜಾಮೀನು ಕೋರಿ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಆದರೆ ಈ ಹಿಂದಿನ ಪ್ರಯತ್ನಗಳಲ್ಲಿ ಅವರಿಗೆ ನಿರೀಕ್ಷಿತ ಫಲಿತಾಂಶ ಸಿಕ್ಕಿಲ್ಲ.
ಇದೀಗ ಡಿಸೆಂಬರ್ 4ರಂದು ನಡೆಯಲಿರುವ ವಿಚಾರಣೆ ಮಹತ್ವ ಪಡೆದುಕೊಂಡಿದ್ದು, ಸಹೋದರನ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲು ಪವಿತ್ರಾ ಗೌಡ ಅವರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಲಿದೆಯೇ ಎಂಬುದು ಕುತೂಹಲ ಮೂಡಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R