ಜಗದ್ಗುರು ಅನ್ನದಾನೇಶ್ವರ ಶ್ರೀಗಳಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
ಗದಗ, 24 ನವೆಂಬರ್ (ಹಿ.ಸ.) 2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ಮುಂಡರಗಿ ಜಗದ್ಗುರು ಡಾ. ಅನ್ನದಾನೇಶ್ವರ ಮಹಾಶಿವಯೋಗಿಗಳಿಗೆ ನವೆಂಬರ್ 28ರಂದು ಮುಂಡರಗಿಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಸಿದ್ಧತೆಗಳ ಕ
ಫೋಟೋ


ಗದಗ, 24 ನವೆಂಬರ್ (ಹಿ.ಸ.)

2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ಮುಂಡರಗಿ ಜಗದ್ಗುರು ಡಾ. ಅನ್ನದಾನೇಶ್ವರ ಮಹಾಶಿವಯೋಗಿಗಳಿಗೆ ನವೆಂಬರ್ 28ರಂದು ಮುಂಡರಗಿಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಜಿಲ್ಲಾಧಿಕಾರಿ ಎನ್. ಶ್ರೀಧರ್ ಅಧ್ಯಕ್ಷತೆಯಲ್ಲಿ ಮುಂಡರಗಿ ತಹಶೀಲ್ದಾರ್ ಕಾರ್ಯಾಲಯದಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ಕಾರ್ಯಕ್ರಮದ ಯಶಸ್ಸಿಗೆ ವಿವಿಧ ಇಲಾಖೆಗಳು ಕೈಗೊಳ್ಳಬೇಕಾದ ಸಿದ್ಧತೆಗಳು ಹಾಗೂ ಜವಾಬ್ದಾರಿಗಳ ಕುರಿತು ಚರ್ಚಿಸಲಾಯಿತು. ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತರು, ಸಾರ್ವಜನಿಕರು ಹಾಗೂ ಗಣ್ಯರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ವ್ಯವಸ್ಥೆಗಳನ್ನು ಸಮರ್ಪಕವಾಗಿ ಕಲ್ಪಿಸಲು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾರ್ಯಕ್ರಮದ ವೇದಿಕೆ ನಿರ್ಮಾಣ ಮತ್ತು ಸಭಾಂಗಣದ ವ್ಯವಸ್ಥೆಯನ್ನು ಲೋಕೋಪಯೋಗಿ ಇಲಾಖೆ ಹಾಗೂ ಪುರಸಭೆಗೆ ವಹಿಸಲಾಯಿತು. ಮೆರವಣಿಗೆಯಲ್ಲಿ 50 ಮಹಿಳೆಯರಿಂದ ಕುಂಭಮೇಳ ಆಯೋಜಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಜವಾಬ್ದಾರಿ ನೀಡಲಾಯಿತು. ಸಾರ್ವಜನಿಕರಿಗೆ ಕುಡಿಯುವ ನೀರು, ಊಟದ ವ್ಯವಸ್ಥೆ ಹಾಗೂ ಮೆರವಣಿಗೆಗೆ ಸಾರೋಟ ವ್ಯವಸ್ಥೆ ಕಲ್ಪಿಸುವಂತೆಯೂ ಸೂಚಿಸಲಾಯಿತು.

ಕಾರ್ಯಕ್ರಮ ಮುಗಿದ ಬಳಿಕ ರಾತ್ರಿ ವೇಳೆ ಗ್ರಾಮೀಣ ಪ್ರದೇಶಗಳಿಗೆ ತೆರಳುವ ಸಾರ್ವಜನಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ವತಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಡಿಪೋ ವ್ಯವಸ್ಥಾಪಕರಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಸಮಾರಂಭಕ್ಕೆ ನಾಲ್ಕು ಸಾವಿರಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆಯಿದ್ದು, ಎಲ್ಲರಿಗೂ ಆಸನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಸಮನ್ವಯದಿಂದ ಹಾಗೂ ಅಚ್ಚುಕಟ್ಟಾಗಿ ನಿರ್ವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಪೂಜ್ಯ ಜಗದ್ಗುರುಗಳಿಗೆ ಅವರದೇ ಸ್ವಂತ ತಾಲೂಕಿನಲ್ಲಿ ಗೌರವಪೂರ್ವಕವಾಗಿ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಮುಂಡರಗಿ ತಾಲೂಕು ಈ ಮೂಲಕ ಮಾದರಿಯಾಗಬೇಕು. ಮುಂದಿನ ದಿನಗಳಲ್ಲಿ ಇತರ ಜಿಲ್ಲೆ ಹಾಗೂ ತಾಲೂಕುಗಳ ಸಾಧಕರಿಗೂ ಅವರ ಸ್ವಂತ ಊರಿನಲ್ಲಿ ಗೌರವ ಸಮಾರಂಭ ಆಯೋಜಿಸಲು ಈ ಕಾರ್ಯಕ್ರಮ ಪ್ರೇರಣೆಯಾಗಬೇಕು ಎಂದು ಜಿಲ್ಲಾಧಿಕಾರಿ ಅಭಿಪ್ರಾಯಪಟ್ಟರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಗಂಗಪ್ಪ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳ್ಳಾರಿ, ಮುಂಡರಗಿ ತಹಶೀಲ್ದಾರ್ ಪಿ.ಎಸ್. ಯರ್ರಿಸ್ವಾಮಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿಜಯಕುಮಾರ ಬೆಣ್ಣೆ, ಸಿಪಿಐ ಅಯ್ಯನಗೌಡ ಪಾಟೀಲ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಉದಯಕುಮಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande