
ವಿಜಯಪುರ, 24 ನವೆಂಬರ್ (ಹಿ.ಸ.)
ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕೈಗೊಂಡಿರುವ ಬೃಹತ್ ಅತಿಕ್ರಮಣ ತೆರವು ಕಾರ್ಯಾಚರಣೆ ಮುಂದುವರಿದಿದೆ. ನಗರದ ಮೋಬಿನ್ ಚೌಕ್ನಿಂದ ಖಾದಿ ಗ್ರಾಮೋದ್ಯೋಗದವರೆಗೆ ಇಂದು ತೆರವು ಕಾರ್ಯಾಚರಣೆ ನಡೆಸಲಾಗಿದ್ದು, ಸಾರ್ವಜನಿಕ ವಲಯದಲ್ಲಿ ಗಮನ ಸೆಳೆದಿದೆ.
ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಡಿ ಮಂಜೂರಾಗಿರುವ ₹150 ಕೋಟಿ ಅನುದಾನದ ರಸ್ತೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಸುಗಮವಾಗಿ ಅನುಷ್ಠಾನಗೊಳಿಸಲು ಮಹಾನಗರ ಪಾಲಿಕೆ ಈ ಕ್ರಮ ಕೈಗೊಂಡಿದೆ. ರಸ್ತೆ ಅಭಿವೃದ್ಧಿಗೆ ಅಡ್ಡಿಯಾಗಿರುವ ಕಟ್ಟಡಗಳ ಭಾಗಗಳು ಹಾಗೂ ಇತರೆ ಅತಿಕ್ರಮಣಗಳನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಪಾಲಿಕೆ ಅಧಿಕಾರಿ ಮಲ್ಲಿಕಾರ್ಜುನ ಪಟೇಲ್ ತಿಳಿಸಿದರು
ಸರ್ವೇ, ನೋಟಿಸ್ ಬಳಿಕ ತೆರವು
ಅತಿಕ್ರಮಣ ತೆರವು ಕಾರ್ಯಾಚರಣೆಗೂ ಮುನ್ನ ಸರ್ವೇ ಇಲಾಖೆಯ ಮೂಲಕ ಸಂಬಂಧಿಸಿದ ಪ್ರದೇಶಗಳ ಜಾಗವನ್ನು ಅಳತೆ ಮಾಡಲಾಗಿದೆ. ಬಳಿಕ ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆ ನಡೆಸಿದ ನಂತರ ನಿಯಮಾನುಸಾರ ತೆರವು ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೋಬಿನ್ ಚೌಕ್ನಿಂದ ಖಾದಿ ಗ್ರಾಮೋದ್ಯೋಗದವರೆಗಿನ ಸುಮಾರು ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ 75ಕ್ಕೂ ಹೆಚ್ಚು ಅತಿಕ್ರಮಣಗಳನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ಕಾರ್ಯಾಚರಣೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ಮೂರು ವಾರ್ಡ್ಗಳಲ್ಲಿ ಕಾರ್ಯಾಚರಣೆ
ನಗರದ ವಾರ್ಡ್ ಸಂಖ್ಯೆ 27, 28 ಮತ್ತು 30ರ ವ್ಯಾಪ್ತಿಯಲ್ಲಿ ತೆರವು ಕಾರ್ಯಾಚರಣೆ ಮುಂದುವರಿದಿದೆ. ಈಗಾಗಲೇ ಒಟ್ಟು ಕಾಮಗಾರಿಯಲ್ಲಿ ಶೇ.20ರಿಂದ 30ರಷ್ಟು ಕೆಲಸ ಪೂರ್ಣಗೊಂಡಿದ್ದು, ಇನ್ನೂ ಹೆಚ್ಚಿನ ಪ್ರಮಾಣದ ಕಾಮಗಾರಿ ಬಾಕಿ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಭಿವೃದ್ಧಿ ಯೋಜನೆಯಡಿ ಚರಂಡಿ ಸೇರಿದಂತೆ ಸುಮಾರು 10 ಮೀಟರ್ ಅಗಲದ ರಸ್ತೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಐತಿಹಾಸಿಕ ಸ್ಮಾರಕ ಹಾಗೂ ದರ್ಗಾದ ಹಳೆಯ ರಚನೆಗೆ ಧಕ್ಕೆಯಾಗದಂತೆ ಅವುಗಳನ್ನು ಹೊರತುಪಡಿಸಿ ಸುಮಾರು ಒಂದೂವರೆ ಕಿಲೋಮೀಟರ್ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.
ಬಿಗಿ ಪೊಲೀಸ್ ಬಂದೋಬಸ್ತ್
ತೆರವು ಕಾರ್ಯಾಚರಣೆಯ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಗಾಂಧಿ ಚೌಕ್ ಪೊಲೀಸ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಮಹಾನಗರ ಪಾಲಿಕೆ ಅಧಿಕಾರಿಗಳು, ಸರ್ವೇ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.
ಸಾರ್ವಜನಿಕರಿಗೆ ಆಯುಕ್ತರ ಮನವಿ
ನಗರದ ರಸ್ತೆ ಅಭಿವೃದ್ಧಿ ಹಾಗೂ ಸುಗಮ ಸಂಚಾರದ ದೃಷ್ಟಿಯಿಂದ ಸಾರ್ವಜನಿಕರು ಕಟ್ಟಡ ನಿರ್ಮಾಣ ಮಾಡುವಾಗ ಕಾನೂನು ನಿಯಮಗಳನ್ನು ಪಾಲಿಸಬೇಕು. ನಿಗದಿತ ಸೆಟ್ಬ್ಯಾಕ್ ಬಿಡಬೇಕು. ಕಟ್ಟಡ ನಿರ್ಮಾಣಕ್ಕೂ ಮುನ್ನ ಸಂಬಂಧಿಸಿದ ಇಲಾಖೆಯಿಂದ ಜಾಗದ ಅಳತೆ ಮಾಡಿಸಿಕೊಂಡು ನಿಯಮಾನುಸಾರ ನಿರ್ಮಾಣ ಕಾರ್ಯ ಕೈಗೊಳ್ಳಬೇಕು ಎಂದು ಆಯುಕ್ತರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande