
ಶ್ರೀರಂಗಪಟ್ಟಣ, 24 ನವೆಂಬರ್ (ಹಿ.ಸ.):
ಮೈಸೂರು–ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸರಕು ಸಾಗಣೆ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿ ಗೇಟ್ ಬಳಿಯ ಫ್ಲೈಓವರ್ ಮೇಲೆ ಈ ದುರ್ಘಟನೆ ಸಂಭವಿಸಿದೆ. ನಂಜನಗೂಡಿನ ದೇವಸ್ಥಾನಕ್ಕೆ ತೆರಳುತ್ತಿದ್ದ ಎರಡು ಕುಟುಂಬಗಳ ಸದಸ್ಯರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.
ಈ ವೇಳೆ ಮುಂದೆ ಸಾಗುತ್ತಿದ್ದ ಸರಕು ಸಾಗಣೆ ಲಾರಿಗೆ ಕಾರು ಹಿಂಬದಿಯಿಂದ ಬಲವಾಗಿ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಗುತ್ತಲು ಬಡಾವಣೆಯ ಮಹದೇವು (49) ಹಾಗೂ ತೈಲೂರು ಗ್ರಾಮದ ರಿತ್ವಿಕಾ (8) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗೌರಿ, ಲತಾ, ಶಿವರಾಜು ಮತ್ತು ಪ್ರಾರ್ಥವ್ಯ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರೀಲ್ಸ್ ಮಾಡಿ ವಾಟ್ಸ್ಆ್ಯಪ್ ಸ್ಟೇಟಸ್ಗೆ ಹಾಕಿದ್ದ ಕುಟುಂಬ:
ನಂಜನಗೂಡಿನ ದೇವಸ್ಥಾನಕ್ಕೆ ತೆರಳುತ್ತಿದ್ದ ಕುಟುಂಬದ ಸದಸ್ಯರು ಪ್ರಯಾಣದ ದೃಶ್ಯಗಳನ್ನು ರೀಲ್ಸ್ ಮಾಡಿ ವಾಟ್ಸ್ಆ್ಯಪ್ ಸ್ಟೇಟಸ್ಗೆ ಹಾಕಿಕೊಂಡಿದ್ದರು ಎನ್ನಲಾಗಿದೆ.
ಆದರೆ, ದೇವಸ್ಥಾನಕ್ಕೆ ತೆರಳುವ ಮಾರ್ಗಮಧ್ಯೆಯೇ ಸಂಭವಿಸಿದ ಅಪಘಾತ ಎರಡು ಕುಟುಂಬಗಳಲ್ಲಿ ಶೋಕದ ವಾತಾವರಣ ಸೃಷ್ಟಿಸಿದೆ.
ವಿಷಯ ತಿಳಿಯುತ್ತಿದ್ದಂತೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R