
ಕನ್ನೌಜ್, 24 ನವೆಂಬರ್ (ಹಿ.ಸ.):
ಉತ್ತರ ಪ್ರದೇಶದ ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಶಾಲಾ ಬಸ್ಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಕ್ಕಳು ಮೃತಪಟ್ಟಿದ್ದು, 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕನ್ನೌಜ್ ಜಿಲ್ಲೆಯ ಥಾಥಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಶಾಲಾ ಬಸ್ನಲ್ಲಿ ಸುಮಾರು 50 ಮಕ್ಕಳು ಹಾಗೂ ಆರು ಶಿಕ್ಷಕರು ಪ್ರಯಾಣಿಸುತ್ತಿದ್ದರು. ಆಗ್ರಾದಿಂದ ಕೌಶಂಬಿಗೆ ಶಾಲಾ ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿಗಳು ಪ್ರವಾಸ ಮುಗಿಸಿಕೊಂಡು ವಾಪಸ್ ಆಗುತ್ತಿದ್ದರು.
ಈ ವೇಳೆ ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಬಸ್ ನಿಂತಿದ್ದಾಗ, ಹಿಂದಿನಿಂದ ಅತಿ ವೇಗವಾಗಿ ಬಂದ ಟ್ರಕ್ ಬಸ್ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ನಲ್ಲಿದ್ದ ಹಲವು ಮಕ್ಕಳು ಗಾಯಗೊಂಡಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಗಾಯಾಳು ಮಕ್ಕಳನ್ನು ಆಂಬುಲೆನ್ಸ್ಗಳ ಮೂಲಕ ತಿರ್ವಾ ವೈದ್ಯಕೀಯ ಕಾಲೇಜಿಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಯಿತು.
ಈ ಕುರಿತು ಪ್ರತಿಕ್ರಿಯಿಸಿರುವ ಕನ್ನೌಜ್ ಜಿಲ್ಲಾಧಿಕಾರಿ ಅಶುತೋಷ್ ಮೋಹನ್ ಅಗ್ನಿಹೋತ್ರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನೋದ್ ಕುಮಾರ್ ಅವರು ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿ ಗಾಯಗೊಂಡ ಮಕ್ಕಳ ಆರೋಗ್ಯ ಸ್ಥಿತಿಯನ್ನು ವಿಚಾರಿಸಿದರು. ಅಲ್ಲದೆ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ವೈದ್ಯಕೀಯ ಸಿಬ್ಬಂದಿಗೆ ಸೂಚನೆ ನೀಡಿದರು.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದುಬರಬೇಕಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R