ವಸತಿ ವಿನ್ಯಾಸ, ಉದ್ಯಾನವನ, ಪ್ರಾಧಿಕಾರ ಕಚೇರಿ ನಿರ್ಮಾಣಕ್ಕೆ ಚಾಲನೆ
ಗದಗ, 25 ನವೆಂಬರ್ (ಹಿ.ಸ.) ಗದಗ-ಬೆಟಗೇರಿ ನಗರವನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿ, ಸುಂದರ ಹಾಗೂ ಮಾದರಿ ನಗರವನ್ನಾಗಿಸುವ ನಿಟ್ಟಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಅವರು ಹೇಳಿದರು. ಗ
ಫೋಟೋ


ಗದಗ, 25 ನವೆಂಬರ್ (ಹಿ.ಸ.)

ಗದಗ-ಬೆಟಗೇರಿ ನಗರವನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿ, ಸುಂದರ ಹಾಗೂ ಮಾದರಿ ನಗರವನ್ನಾಗಿಸುವ ನಿಟ್ಟಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಅವರು ಹೇಳಿದರು.

ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬುಧವಾರ ನಗರದ ಕಬಾಡರ ಲೇಔಟ್ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಅಂದಾಜು ₹27 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಭಿವೃದ್ಧಿಪಡಿಸಿದ ನಿವೇಶನಗಳನ್ನು ರಿಯಾಯಿತಿ ದರದಲ್ಲಿ ಜನರಿಗೆ ಒದಗಿಸುವ ಯೋಜನೆ ಉತ್ತಮ ಕಾರ್ಯವಾಗಿದೆ. ದೇಶದಲ್ಲಿ ನಗರೀಕರಣದ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಿಂದೆ ಶೇ.13ರಷ್ಟಿದ್ದ ನಗರವಾಸಿಗಳ ಪ್ರಮಾಣ ಇಂದು ಶೇ.39ಕ್ಕೆ ಏರಿಕೆಯಾಗಿದೆ. ಇದರಿಂದ ನಗರಗಳಲ್ಲಿ ಜನಸಂಖ್ಯೆಯ ಒತ್ತಡ ಹೆಚ್ಚಾಗಿ ಕುಡಿಯುವ ನೀರು, ರಸ್ತೆ, ಒಳಚರಂಡಿ ಸೇರಿದಂತೆ ಮೂಲಸೌಕರ್ಯಗಳ ಅಗತ್ಯವೂ ಹೆಚ್ಚಾಗಿದೆ. ಹೀಗಾಗಿ ವ್ಯವಸ್ಥಿತ ನಗರ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದರು.

ವಿಶ್ವದಲ್ಲಿಯೇ ಅತಿ ಹೆಚ್ಚು ಜನರು ಬಂದು ನೆಲೆಸುತ್ತಿರುವ ನಗರಗಳಲ್ಲಿ ಬೆಂಗಳೂರು ಪ್ರಮುಖವಾಗಿದೆ. ಪ್ರಸ್ತುತ ಸುಮಾರು 1.40 ಕೋಟಿ ಜನರು ಬೆಂಗಳೂರಿನಲ್ಲಿ ವಾಸಿಸುತ್ತಿದ್ದು, 1.30 ಕೋಟಿ ವಾಹನಗಳಿವೆ. ಇಷ್ಟೊಂದು ಜನಸಂಖ್ಯೆಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ದೊಡ್ಡ ಸವಾಲಾಗಿದೆ. ನಗರಗಳ ಬೆಳವಣಿಗೆಗೆ ಅನುಗುಣವಾಗಿ ಯೋಜಿತ ಅಭಿವೃದ್ಧಿ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ಹೇಳಿದರು.

ಶಾಸಕ ಎಚ್.ಕೆ. ಪಾಟೀಲ ಅವರು ಜನರ ಬಗ್ಗೆ ಅಪಾರ ಕಾಳಜಿ ಹೊಂದಿರುವ ಜನನಾಯಕರಾಗಿದ್ದು, ಅವರ ದೂರದೃಷ್ಟಿಯ ಚಿಂತನೆಗಳು ಸಮಾಜದ ಅಭಿವೃದ್ಧಿಗೆ ಅಗತ್ಯವಾಗಿವೆ. ಸಹಕಾರಿ ಬೀಷ್ಮ ದಿವಂಗತ ಕೆ.ಎಚ್. ಪಾಟೀಲ ಅವರು ಮುತ್ಸದ್ದಿ ರಾಜಕಾರಣಿಯಾಗಿದ್ದರು. ಅವರೊಂದಿಗೆ ಎರಡು ಬಾರಿ ಶಾಸಕರಾಗಿ ಕಾರ್ಯನಿರ್ವಹಿಸಿದ ಅನುಭವ ನನಗಿದೆ ಎಂದು ಸ್ಮರಿಸಿದರು.

ಜಿಲ್ಲೆಯಲ್ಲಿ ಪ್ರಸ್ತುತ ಬರಗಾಲದ ಪರಿಸ್ಥಿತಿ ತೀವ್ರವಾಗಿದ್ದು, ರೈತರು ಹಾಗೂ ಬಡವರು ಸಂಕಷ್ಟ ಎದುರಿಸುತ್ತಿದ್ದಾರೆ. 17-18ನೇ ಶತಮಾನದಲ್ಲಿ ಕಂಡುಬಂದಂತಹ ಭೀಕರ ಬರಗಾಲದ ಪರಿಸ್ಥಿತಿ ಮತ್ತೆ ಎದುರಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ನಮ್ಮ ಮನವಿಗೆ ಸ್ಪಂದಿಸಿ ಗದಗ ಜಿಲ್ಲೆಗೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಜಿಲ್ಲೆಯನ್ನೂ ಬರಪೀಡಿತವೆಂದು ಘೋಷಿಸಲಾಗಿದೆ. ರಾಜ್ಯದಲ್ಲಿ ಬರದಿಂದಾಗಿ ಸುಮಾರು ₹60 ಸಾವಿರ ಕೋಟಿ ನಷ್ಟ ಉಂಟಾಗಿದ್ದರೂ ಕೇಂದ್ರ ಸರ್ಕಾರದಿಂದ ಈವರೆಗೆ ಪರಿಹಾರ ಅನುದಾನ ಬಿಡುಗಡೆಯಾಗಿಲ್ಲ ಎಂದು ಸಚಿವ ರಾಯರಡ್ಡಿ ತಿಳಿಸಿದರು.

2023ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಬರಗಾಲದ ಸಂಕಷ್ಟದ ಸಂದರ್ಭದಲ್ಲಿ ಈ ಯೋಜನೆಗಳು ಬಡ ಕುಟುಂಬಗಳಿಗೆ ನೆರವಾಗಿವೆ. ಮಹಿಳೆಯರು ಉಚಿತ ಬಸ್ ಪ್ರಯಾಣದ ಸೌಲಭ್ಯ ಬಳಸಿಕೊಂಡಿರುವುದು ದೇಶದ ಗಮನ ಸೆಳೆದಿದೆ. ಗ್ಯಾರಂಟಿ ಯೋಜನೆಗಳು ಬಡವರ ಪಾಲಿಗೆ ವರದಾನವಾಗಿವೆ ಎಂದರು.

ಕರ್ನಾಟಕವು ಅಭಿವೃದ್ಧಿ ಹೊಂದುತ್ತಿರುವ ಪ್ರಮುಖ ರಾಜ್ಯವಾಗಿದ್ದು, ಬೆಂಗಳೂರಿನಲ್ಲಿ ದೇಶದ ಅತ್ಯಂತ ಹೆಚ್ಚಿನ ಸಂಖ್ಯೆಯ ಇಂಜಿನಿಯರ್ಗಳು ಕಾರ್ಯನಿರ್ವಹಿಸುತ್ತಿದ್ದಾರೆ. ರಾಜ್ಯದ ಬಜೆಟ್ ಗಾತ್ರ 2023ರಲ್ಲಿ ₹3.28 ಲಕ್ಷ ಕೋಟಿಯಷ್ಟಿದ್ದು, ಪ್ರಸ್ತುತ ₹4.80 ಲಕ್ಷ ಕೋಟಿಗೆ ಏರಿಕೆಯಾಗಿದೆ. ಜಿಎಸ್ಟಿ ಸಂಗ್ರಹದಲ್ಲಿಯೂ ಕರ್ನಾಟಕ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ಪ್ರತಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿ ವಿಶೇಷ ಅನುದಾನ ನೀಡುತ್ತಿದ್ದು, ರಸ್ತೆ ಅಭಿವೃದ್ಧಿಗೂ ಆದ್ಯತೆ ನೀಡಲಾಗಿದೆ. ಈ ತಿಂಗಳಲ್ಲಿ ರಾಜ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಇನ್ನಷ್ಟು ಅನುದಾನ ನೀಡುವ ನಿರೀಕ್ಷೆಯಿದೆ ಎಂದರು.

ಗದಗ ಜಿಲ್ಲೆಗೆ ಮಾಲಿನ್ಯರಹಿತ ಕೈಗಾರಿಕೆಗಳನ್ನು ಆಕರ್ಷಿಸುವ ಮೂಲಕ ಆರ್ಥಿಕ ಅಭಿವೃದ್ಧಿಗೆ ವೇಗ ನೀಡಬೇಕಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸೂಕ್ತ ಯೋಜನೆ ರೂಪಿಸಿ, ಎಲ್ಲ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಮುಂದಿನ ತಿಂಗಳಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸುತ್ತೇನೆ.

ಅಧಿಕಾರಿಗಳು ಜನರೊಂದಿಗೆ ಗೌರವಯುತವಾಗಿ ನಡೆದುಕೊಳ್ಳಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ವಿಚಾರಗಳಿಗೆ ಮನ್ನಣೆ ನೀಡಬೇಕು. ಅಧಿಕಾರಿಗಳು ಶಿಸ್ತುಬದ್ಧವಾಗಿ ಕರ್ತವ್ಯ ನಿರ್ವಹಿಸಬೇಕು. ಕರ್ತವ್ಯ ನಿರ್ಲಕ್ಷ್ಯ ಅಥವಾ ಲೋಪ ಕಂಡುಬಂದಲ್ಲಿ ಯಾವುದೇ ಮುಲಾಜಿಲ್ಲದೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

*ಗದಗ ಅಭಿವೃದ್ಧಿಗೆ ಹೊಸ ವೇಗ: ಶಾಸಕ ಎಚ್.ಕೆ. ಪಾಟೀಲ*

ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್.ಕೆ. ಪಾಟೀಲ ಮಾತನಾಡಿ, ಗದಗ ನಗರದಲ್ಲಿ ಸುಸಜ್ಜಿತ ವಸತಿ ವಿನ್ಯಾಸ ನಿರ್ಮಿಸಬೇಕೆಂಬ ಬಹುದಿನಗಳ ಕನಸು ಇಂದು ಸಾಕಾರಗೊಳ್ಳುತ್ತಿರುವುದು ಅತ್ಯಂತ ಸಂತಸ ತಂದಿದೆ. 18.19 ಎಕರೆ ಪ್ರದೇಶವನ್ನು ಅಭಿವೃದ್ಧಿಪಡಿಸಲು ₹19.69 ಕೋಟಿ ಅನುದಾನದ ಯೋಜನೆ ರೂಪಿಸಿ ಇಂದು ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದರು.

ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಕಚೇರಿ ಕಟ್ಟಡವನ್ನು ಅಂದಾಜು ₹5 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಭೂಮಿಪೂಜೆ ನೆರವೇರಿಸಲಾಗಿದೆ. ಅಲ್ಲದೆ, ಸುಮಾರು 18 ಉದ್ಯಾನವನಗಳನ್ನು ₹4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗಳಿಗೂ ಚಾಲನೆ ನೀಡಲಾಗಿದೆ. ಈ ಎಲ್ಲ ಕಾಮಗಾರಿಗಳು ನಿಗದಿತ ಕಾಲಮಿತಿಯಲ್ಲಿ ಗುಣಮಟ್ಟದೊಂದಿಗೆ ಪೂರ್ಣಗೊಳ್ಳಬೇಕು ಎಂದು ಸೂಚಿಸಿದರು.

ಗದಗ ನಗರ ವೇಗವಾಗಿ ಬೆಳೆಯುತ್ತಿದ್ದು, ಅದರ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡಬೇಕಿದೆ. ವೈಜ್ಞಾನಿಕ ಯೋಜನೆಗಳ ಮೂಲಕ ಸುಂದರ ಹಾಗೂ ಸುಸಜ್ಜಿತ ನಗರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು. ಗದಗ-ಬೆಟಗೇರಿ ವ್ಯಾಪಾರ, ಸಂಸ್ಕೃತಿ ಹಾಗೂ ಪ್ರದರ್ಶನ ಪ್ರಾಧಿಕಾರದ ಮೂಲಕ 32 ಎಕರೆ ಪ್ರದೇಶವನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಗೃಹ ಮಂಡಳಿಯಿಂದಲೂ ಈ ಪ್ರದೇಶದ ಅಭಿವೃದ್ಧಿಗೆ ಪ್ರಯತ್ನಗಳು ನಡೆಯುತ್ತಿವೆ. ಈ ಜಾಗವನ್ನು ಸರ್ಕಾರದ ವಶಕ್ಕೆ ಪಡೆಯಲು ಸಹಕರಿಸಿದ ಅಧಿಕಾರಿಗಳನ್ನು ಅಭಿನಂದಿಸಿದರು.

2027ರ ಅಂತ್ಯದೊಳಗೆ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ

ಗದಗ ನಗರದ ಕುಡಿಯುವ ನೀರಿನ ಸಮಸ್ಯೆ ಬಹುದೊಡ್ಡ ಸವಾಲಾಗಿದೆ. ಪ್ರತಿದಿನ ಸುಮಾರು 34 ಲಕ್ಷ ಲೀಟರ್ ನೀರು ಲಭ್ಯವಾಗುತ್ತಿದ್ದರೂ ಸಮರ್ಪಕ ಹಂಚಿಕೆಯಾಗದಿರುವುದು ಸಮಸ್ಯೆಗೆ ಕಾರಣವಾಗಿದೆ. ಸಿಂಗಟಾಲೂರಿನಿಂದ ಪಾಪನಾಶಿವರೆಗೆ ನೀರು ಪೂರೈಸುವ ಪೈಪ್ಲೈನ್ ಪದೇಪದೆ ಒಡೆದುಹೋಗುತ್ತಿರುವುದರಿಂದ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಈ ಸಮಸ್ಯೆ ಪರಿಹರಿಸಲು ₹59 ಕೋಟಿ ವೆಚ್ಚದ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ.

ಓವರ್ಹೆಡ್ ಟ್ಯಾಂಕ್ಗಳು ಹಾಗೂ ಇತರ ಮೂಲಸೌಕರ್ಯ ನಿರ್ಮಾಣಕ್ಕೆ ₹29 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆ ಆರಂಭಿಸಲಾಗಿದೆ. ಪಾಪನಾಶಿ ಪ್ರದೇಶದಲ್ಲಿ ₹21 ಕೋಟಿ ವೆಚ್ಚದಲ್ಲಿ ನೀರು ಸಂಗ್ರಹಣಾ ಯೋಜನೆ ರೂಪಿಸಲಾಗಿದ್ದು, ಜನವರಿಯಲ್ಲಿ ಕಾಮಗಾರಿ ಆರಂಭವಾಗಲಿದೆ. ಈ ಎಲ್ಲ ಕಾಮಗಾರಿಗಳು ಪೂರ್ಣಗೊಂಡ ಬಳಿಕ 2027ರ ಅಂತ್ಯದ ವೇಳೆಗೆ ಗದಗ ನಗರದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯುವ ನಿರೀಕ್ಷೆಯಿದೆ ಎಂದರು.

ಗದಗ ನಗರವನ್ನು ಮಾದರಿ ನಗರವನ್ನಾಗಿಸುವ ಉದ್ದೇಶದಿಂದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಕುಮಾರವ್ಯಾಸನ ನೆನಪಿನೊಂದಿಗೆ ಪ್ರವಾಸಿಗರು ಗದಗಕ್ಕೆ ಆಗಮಿಸುವಂತಾಗಬೇಕು. ಐತಿಹಾಸಿಕ ಜುಮ್ಮಾ ಮಸೀದಿ ಹಾಗೂ ತ್ರಿಕೂಟೇಶ್ವರ ದೇವಸ್ಥಾನಗಳಿಗೆ ಹೆಚ್ಚಿನ ಪ್ರವಾಸಿಗರು ಭೇಟಿ ನೀಡುವಂತೆ ನಗರದ ಪ್ರವಾಸೋದ್ಯಮ ಅಭಿವೃದ್ಧಿಗೂ ನಗರಾಭಿವೃದ್ಧಿ ಪ್ರಾಧಿಕಾರ ವಿಶೇಷ ಗಮನ ಹರಿಸಬೇಕು ಎಂದು ಹೇಳಿದರು.

ಪ್ರಾಧಿಕಾರದ ಆಯುಕ್ತ ಎಸ್.ಸಿ. ಬೇವೂರ ಸ್ವಾಗತಿಸಿದರು. ಪ್ರೊ.ಬಾಹುಬಲಿ ಜೈನರ್ ನಿರ್ವಹಿಸಿದರು.

ಮುಖ್ಯ ಅತಿಥಿಗಳಾಗಿ ಗದಗ ಬೆಟಗೇರಿ ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ , ಕರ್ನಾಟಕ ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್.ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಬಿ.ಅಸೂಟಿ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಅಶೋಕ ಮಂದಾಲಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಕುಲ್ ಜೈನ್ , ಜಿಲ್ಲಾ ಪೋಲಿಸವರಿಷ್ಟಾಧಿಕಾರಿ ಮಿಥುನ್, ಗದಗ ಬೆಟಗೇರಿ ನಗರಾಭಿವೃಧ್ದಿ ಪ್ರಾಧಿಕಾರದ ಸದಸ್ಯಗಳಾದ ಬಸವರಾಜ ಎಮ್. ಕಡೇಮನಿ, ಮಲ್ಲಿಕಾರ್ಜುನ ಸಿ.ಐಲಿ, ಬಸವರಾಜ. ಎನ್. ಯರನಾಳ, ಶ್ರೀಮತಿ ಜಾನಕಿ.ಎಸ್. ಮಲ್ಲಾಪೂರ, ಚಂದ್ರಶೇಖರ ತಡಸದ ಹಾಗೂ ಗದಗ ಬೆಟಗೇರಿ ನಗರಸಭೆ ಸದಸ್ಯರು ಹಾಜರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande