
ಹೊನ್ನಾಳಿ, 25 ನವೆಂಬರ್ (ಹಿ.ಸ.): ಬಸವಣ್ಣನವರ ಕುರಿತು ‘ಬಸವ ಮಂಟಪ’ ಕೃತಿಯಲ್ಲಿ ಪ್ರಕಟವಾಗಿರುವ ಆಕ್ಷೇಪಾರ್ಹ ಬರಹ ಹಾಗೂ ಲೇಖಕ ರವಿ ಹಂಜ ಅವರ ಹೇಳಿಕೆ ಹಾಗೂ ಬೆಲೆ ಏರಿಕೆ ಖಂಡಿಸಿ ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ಹೊನ್ನಾಳಿ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಘಟಕದ ವತಿಯಿಂದ ಬಸವಣ್ಣನವರ ವಿರುದ್ಧದ ಅವಹೇಳನಕಾರಿ ಬರಹವನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು.
ಸಮಾನತೆ, ಕಾಯಕ ಮತ್ತು ದಾಸೋಹದ ಮೂಲಕ ಸಮಾಜಕ್ಕೆ ಮಹತ್ವದ ಸಂದೇಶ ಸಾರಿದ ಬಸವಣ್ಣನವರ ಗೌರವಕ್ಕೆ ಧಕ್ಕೆ ತರುವ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕೃತಿಯಲ್ಲಿನ ಆಕ್ಷೇಪಾರ್ಹ ಅಂಶಗಳನ್ನು ತೀವ್ರವಾಗಿ ಖಂಡಿಸಿದ ಸಮಾಜದ ಮುಖಂಡರು, ಬಸವಣ್ಣನವರ ವಿಚಾರಧಾರೆಗೆ ಧಕ್ಕೆ ತಂದಿರುವವರ ವಿರುದ್ಧ ಸರ್ಕಾರ ತಕ್ಷಣ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಗೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಹಲವು ಗಣ್ಯರು ಬೆಂಬಲ ಸೂಚಿಸಿದರು.
ಇದರ ಬೆನ್ನಲ್ಲೇ ಹೊನ್ನಾಳಿ ಮತ್ತು ನ್ಯಾಮತಿ ಬಿಜೆಪಿ ಮಂಡಲಗಳ ವತಿಯಿಂದ ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಮತ್ತೊಂದು ಬೃಹತ್ ಪ್ರತಿಭಟನೆ ನಡೆಯಿತು. ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜಮಾಯಿಸಿ, ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ರಾಜ್ಯದ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಆರೋಪಿಸಿ ಘೋಷಣೆಗಳನ್ನು ಕೂಗಿದರು.
ಪ್ರತಿಭಟನಾಕಾರರು ಟೈರ್ ಸುಟ್ಟು ರಸ್ತೆ ತಡೆ ನಡೆಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸಲು ಹೊನ್ನಾಳಿ ಪೊಲೀಸರು ಮುಂದಾದರು. ಬಳಿಕ ಬಿಜೆಪಿ ಕಾರ್ಯಕರ್ತರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ಮುಂದುವರಿಸಿದರು.
ಪೊಲೀಸರು ತಮ್ಮ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ನಮ್ಮ ಹೋರಾಟದ ಸಂಕಲ್ಪವನ್ನು ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ. ಜನಸಾಮಾನ್ಯರ ಸಮಸ್ಯೆಗಳಿಗಾಗಿ ನಡೆಸುತ್ತಿರುವ ಪ್ರತಿಭಟನೆಯನ್ನು ತಡೆಯುವ ಪ್ರಯತ್ನ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯ ಕಾವು ಹೆಚ್ಚಾದ ಹಿನ್ನೆಲೆಯಲ್ಲಿ ಪೊಲೀಸರು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R