
ಕಲಬುರಗಿ, 25 ನವೆಂಬರ್ (ಹಿ.ಸ.):
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಕರ್ನಾಟಕದ ಕಲಬುರಗಿಗೆ ಭೇಟಿ ನೀಡಲಿದ್ದು, ಮಧ್ಯಾಹ್ನ ೩ ಗಂಟೆಗೆ ನಗರದ ನಗರೇಶ್ವರ ಶಾಲೆಯಿಂದ ಜಗತ್ ವೃತ್ತದವರೆಗೆ ನಡೆಯಲಿರುವ ಬೃಹತ್ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪರವಾಗಿ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಭಾರತೀಯ ಜನತಾ ಪಕ್ಷದ ವತಿಯಿಂದ ದೇಶಾದ್ಯಂತ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ತೊಲಗಿಸಿ’ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದರ ಭಾಗವಾಗಿ ಕಲಬುರಗಿಯಲ್ಲಿ ಬೃಹತ್ ಪಾದಯಾತ್ರೆ ಆಯೋಜಿಸಲಾಗಿದೆ.
ರಾಜನಾಥ್ ಸಿಂಗ್ ಅವರು ಪ್ರಪ್ರಥಮ ಬಾರಿಗೆ ಕಲಬುರಗಿಗೆ ಭೇಟಿ ನೀಡುತ್ತಿದ್ದು, ಅವರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ರಾಜನಾಥ್ ಸಿಂಗ್, ನವೆಂಬರ್ 25ರಂದು ಕಲಬುರಗಿಯಲ್ಲಿ ನಡೆಯಲಿರುವ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ತೊಲಗಿಸಿ’ ಪಾದಯಾತ್ರೆಯಲ್ಲಿ ಭಾಗವಹಿಸುವುದರ ಜತೆಗೆ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿರುವುದಾಗಿ ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಎದುರು ನೋಡುತ್ತಿರುವುದಾಗಿಯೂ ಅವರು ಹೇಳಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.