
ಗದಗ, 25 ನವೆಂಬರ್ (ಹಿ.ಸ.)
ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಗದಗ ಜಿಲ್ಲಾ ಕಂದಾಯ ಘಟಕದ 14 ಹುದ್ದೆಗಳಿಗೆ ಅರ್ಹತೆ ಪಡೆದಿರುವ 42 ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಯನ್ನು ಡಿಸೆಂಬರ್ 9ರಂದು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದ್ದಾರೆ.
ಕಂದಾಯ ಇಲಾಖೆಯ ಉಳಿಕೆ ಮೂಲ ವೃಂದದ 21 ಜಿಲ್ಲೆಗಳಲ್ಲಿ ಖಾಲಿ ಇರುವ ಒಟ್ಟು 505 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿತ್ತು. ಅದರಂತೆ ಪರೀಕ್ಷೆ ನಡೆಸಿ ಅಭ್ಯರ್ಥಿಗಳ ಅಂಕಪಟ್ಟಿಯನ್ನು ನವೆಂಬರ್ 2ರಂದು ಕೆಇಎ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ.
ಗದಗ ಜಿಲ್ಲಾ ಕಂದಾಯ ಘಟಕದ 14 ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆದ ಅಭ್ಯರ್ಥಿಗಳ ಪೈಕಿ 1:3 ಅನುಪಾತದಂತೆ 42 ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ತೃತೀಯ ಲಿಂಗಿ ಅಭ್ಯರ್ಥಿಗಳು ಲಭ್ಯವಿಲ್ಲದ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ ಅದೇ ನೇರ ಮೀಸಲಾತಿ ವರ್ಗದ ಇತರೆ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಲಾಗಿದೆ.
ಮೆರಿಟ್ ಪಟ್ಟಿಯನ್ನು ಗದಗ ಜಿಲ್ಲೆಯ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಪಟ್ಟಿಯಲ್ಲಿರುವ ಅಭ್ಯರ್ಥಿಗಳು ಕೆಇಎಗೆ ಸಲ್ಲಿಸಿರುವ ಅರ್ಜಿಯೊಂದಿಗೆ ಲಗತ್ತಿಸಿರುವ ಎಲ್ಲ ಮೂಲ ದಾಖಲೆಗಳು ಹಾಗೂ ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿದ ಎರಡು ಸೆಟ್ ದಾಖಲೆಗಳ ಪ್ರತಿಗಳೊಂದಿಗೆ ಡಿಸೆಂಬರ್ 9ರಂದು ಬೆಳಿಗ್ಗೆ 10.30ರಿಂದ ಸಂಜೆ 5.30ರವರೆಗೆ ಗದಗ ಜಿಲ್ಲಾಧಿಕಾರಿಗಳ ಕಚೇರಿಯ ಆಡಿಟೋರಿಯಂ ಹಾಲ್ನಲ್ಲಿ ಖುದ್ದಾಗಿ ಹಾಜರಾಗಿ ದಾಖಲೆಗಳ ಪರಿಶೀಲನೆಗೆ ಒಳಪಡಬೇಕು.
ನಿಗದಿತ ದಿನಾಂಕದಂದು ದಾಖಲೆ ಪರಿಶೀಲನೆಗೆ ಹಾಜರಾಗದ ಅಭ್ಯರ್ಥಿಗಳನ್ನು ನೇಮಕಾತಿ ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಗೈರುಹಾಜರಾದವರಿಗೆ ಎರಡನೇ ಅವಕಾಶ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP