
ಬಾಗಲಕೋಟೆ, 25 ನವೆಂಬರ್ (ಹಿ.ಸ.)
ಹುನಗುಂದ ಪಟ್ಟಣದ ವಾಣಿಪೇಟೆ (ಕುಂಭಾರ) ಓಣಿಯಲ್ಲಿ ನಡೆದ ಶ್ರೀ ನೀಲಗಂಗಾ ಜಾತ್ರಾ ಮಹೋತ್ಸವವು ಭಕ್ತಿ, ಸಂಭ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ಧೂರಿಯಾಗಿ ಜರುಗಿತು.
ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ರಸಮಂಜರಿ ಕಾರ್ಯಕ್ರಮವನ್ನು ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ಉದ್ಯಮಗಳ ಸಚಿವ, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಅವರು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಜಾತ್ರಾ ಮಹೋತ್ಸವಗಳು ಧಾರ್ಮಿಕ ನಂಬಿಕೆಯ ಪ್ರತೀಕವಾಗಿರುವುದರ ಜೊತೆಗೆ ಗ್ರಾಮೀಣ ಹಾಗೂ ಸ್ಥಳೀಯ ಕಲಾ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಮಹತ್ವದ ಸಾಂಸ್ಕೃತಿಕ ಆಚರಣೆಗಳಾಗಿವೆ. ಇಂತಹ ಕಾರ್ಯಕ್ರಮಗಳು ಜನರಲ್ಲಿ ಪರಸ್ಪರ ಪ್ರೀತಿ, ಸೌಹಾರ್ದತೆ ಮತ್ತು ಒಗ್ಗಟ್ಟಿನ ಭಾವನೆಯನ್ನು ಬೆಳೆಸುತ್ತವೆ ಎಂದು ಅಭಿಪ್ರಾಯಪಟ್ಟರು.
ರಸಮಂಜರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಲಾವಿದರಿಗೆ ಶುಭ ಹಾರೈಸಿದ ಸಚಿವರು, ತಮ್ಮ ಸಂಗೀತ ಮತ್ತು ಕಲಾ ಪ್ರದರ್ಶನದ ಮೂಲಕ ಪ್ರೇಕ್ಷಕರನ್ನು ರಂಜಿಸುವ ಕಲಾವಿದರ ಪ್ರತಿಭೆಯನ್ನು ಪ್ರೋತ್ಸಾಹಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande