
ಗದಗ, 25 ನವೆಂಬರ್ (ಹಿ.ಸ.)
ಗದಗ ಜಿಲ್ಲೆಯ ಯುವಕ-ಯುವತಿಯರಿಗೆ ಉದ್ಯೋಗ ಮಾರುಕಟ್ಟೆಯ ಬೇಡಿಕೆಗೆ ಅನುಗುಣವಾಗಿ ಕೌಶಲ್ಯ ತರಬೇತಿ ಒದಗಿಸುವುದರ ಜೊತೆಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
2026-27ನೇ ಸಾಲಿನ ಸಿ.ಎಂ.ಕೆ.ಕೆ.ವೈ.-2.0 ಯೋಜನೆಯಡಿ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ತರಬೇತಿ ಸಂಸ್ಥೆಗಳು ಸಲ್ಲಿಸಿರುವ ಕ್ರಿಯಾ ಯೋಜನೆಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಸರ್ಕಾರದ ವಿವಿಧ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯೋಗ ಕಲ್ಯಾಣ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು. ನಿಗದಿತ ಕಾಲಮಿತಿಯಲ್ಲಿ ಯೋಜನೆಗಳ ಪ್ರಗತಿ ಸಾಧಿಸಲು ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಡೇ-ನಲ್ಡ್ ವಿಭಾಗ, ಡಿಜೆಎವೈಎಸ್, ಪಿಎಂ ಸ್ವನಿಧಿ ಹಾಗೂ ಸ್ವನಿಧಿ ಸೇ ಸಮೃದ್ಧಿ ಯೋಜನೆಗಳ ಅನುಷ್ಠಾನದ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಈ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈಗಾಗಲೇ ವಿವಿಧ ಕೌಶಲ್ಯ ತರಬೇತಿ ಪಡೆದ ಅಭ್ಯರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಜಿಲ್ಲೆಯ ಯುವಕ-ಯುವತಿಯರು ವೆಬ್ಸೈಟ್ನಲ್ಲಿ ನೋಂದಾಯಿಸಿಕೊಂಡು ಅರ್ಜಿ ಸಲ್ಲಿಸಬೇಕು. ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರನ್ನು ಒಂದೇ ವೇದಿಕೆಯಲ್ಲಿ ಸಂಪರ್ಕಿಸುವಲ್ಲಿ ಉದ್ಯೋಗ ಸೇತು ಯೋಜನೆ ಪ್ರಮುಖ ಪಾತ್ರ ವಹಿಸಲಿದೆ ಎಂದರು.
ಜಿಟಿಟಿಸಿ ನರಗುಂದ ತರಬೇತಿ ಸಂಸ್ಥೆಯ ಮೂಲಕ ನಡೆಯುತ್ತಿರುವ ತರಬೇತಿ ಕಾರ್ಯಕ್ರಮಗಳನ್ನು ಪರಿಶೀಲಿಸಿದ ಅವರು, ಉದ್ಯೋಗ ಮಾರುಕಟ್ಟೆಯಲ್ಲಿ ಬೇಡಿಕೆಯಿರುವ ವಿವಿಧ ಕ್ಷೇತ್ರಗಳಿಗೆ ಅನುಗುಣವಾಗಿ ತರಬೇತಿ ಆಯೋಜಿಸಬೇಕು. ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಮೂಲಕ ಕೈಗಾರಿಕೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿಶಿಕ್ಷು ತರಬೇತಿ ಅವಕಾಶಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಇನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಂಡಿರುವ ಫಲಾನುಭವಿಗಳ 24 ತಿಂಗಳ ಅಂಕಿ-ಅಂಶಗಳ ವರದಿ ಸಲ್ಲಿಸಬೇಕು. ಉದ್ಯೋಗ ಪಡೆದ ಫಲಾನುಭವಿಗಳ ಸಂಪೂರ್ಣ ಮಾಹಿತಿಯನ್ನು ಒದಗಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಎನ್.ಎಸ್.ಕುಲಕರ್ಣಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಪ್ರಾಚಾರ್ಯರು, ಖಾಸಗಿ ತರಬೇತಿ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP