ಯೋಗೀಶ್ ಗೌಡ ಹತ್ಯೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದುಪಡಿಸಿದ ಸರ್ವೋಚ್ಚ ನ್ಯಾಯಾಲಯ; ಎರಡು ವಾರಗಳಲ್ಲಿ ಶರಣಾಗತಿಗೆ ಸೂಚನೆ
ನವದೆಹಲಿ, 25 ನವೆಂಬರ್ (ಹಿ.ಸ.): ಧಾರವಾಡದ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದು ಪಡಿಸಿ ಸರ್ವೋಚ್ಚ ನ್ಯಾಯಾಲಯ ಅದೇಶ ನೀಡಿದೆ. ಕರ್ನಾಟಕ ಉಚ್ಚ ನ್ಯಾಯಾಲಯ ನೀಡಿದ್ದ ಜಾಮೀನು ಆದೇಶವನ್ನು ರದ್ದುಗೊಳಿಸ
ವಿನಯ ಕುಲಕರ್ಣಿ ಫೈಲ್ ಪೋಟೋ


ನವದೆಹಲಿ, 25 ನವೆಂಬರ್ (ಹಿ.ಸ.):

ಧಾರವಾಡದ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದು ಪಡಿಸಿ ಸರ್ವೋಚ್ಚ ನ್ಯಾಯಾಲಯ ಅದೇಶ ನೀಡಿದೆ.

ಕರ್ನಾಟಕ ಉಚ್ಚ ನ್ಯಾಯಾಲಯ ನೀಡಿದ್ದ ಜಾಮೀನು ಆದೇಶವನ್ನು ರದ್ದುಗೊಳಿಸಿರುವ ಸರ್ವೋಚ್ಚ ನ್ಯಾಯಾಲಯ , ಎರಡು ವಾರಗಳೊಳಗೆ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗುವಂತೆ ವಿನಯ್ ಕುಲಕರ್ಣಿಗೆ ಸೂಚಿಸಿದೆ.

ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಠ ಈ ಮಹತ್ವದ ಆದೇಶ ಹೊರಡಿಸಿದೆ. ಈ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ವಿನಯ್ ಕುಲಕರ್ಣಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಅಲ್ಲದೆ, ಶಿಕ್ಷೆ ಅಮಾನತು ಆದೇಶವನ್ನೂ ನೀಡಿತ್ತು.

ಆದರೆ, ಹೈಕೋರ್ಟ್ ನೀಡಿದ್ದ ಜಾಮೀನು ಹಾಗೂ ಶಿಕ್ಷೆ ಅಮಾನತು ಆದೇಶವನ್ನು ಪ್ರಶ್ನಿಸಿ ಸಿಬಿಐ ಮತ್ತು ಕೊಲೆಯಾದ ಯೋಗೀಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇದೀಗ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿ, ಎರಡು ವಾರಗಳಲ್ಲಿ ಸೆಷನ್ಸ್ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿದೆ. ಇದರಿಂದಾಗಿ ವಿನಯ್ ಕುಲಕರ್ಣಿ ಮತ್ತೆ ಜೈಲು ಸೇರುವ ಪರಿಸ್ಥಿತಿ ಎದುರಾಗಿದೆ.

ಪ್ರಕರಣದ ಹಿನ್ನೆಲೆ:

2016ರ ಜೂನ್ 15ರಂದು ಧಾರವಾಡದ ಸಪ್ತಾಪುರದಲ್ಲಿರುವ ಜಿಮ್ನಲ್ಲಿ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಅವರನ್ನು ದುಷ್ಕರ್ಮಿಗಳ ತಂಡ ಬರ್ಬರವಾಗಿ ಹತ್ಯೆ ಮಾಡಿತ್ತು. ಈ ಸಂಬಂಧ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಳಿಕ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು. ತನಿಖೆ ನಡೆಸಿದ ಸಿಬಿಐ, ಹತ್ಯೆಯ ಹಿಂದೆ ರಾಜಕೀಯ ದ್ವೇಷ ಹಾಗೂ ಸಂಚಿನ ಆರೋಪಗಳನ್ನು ಮುಂದಿಟ್ಟಿತ್ತು. ಈ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande