
ವಿಜಯಪುರ, 25 ನವೆಂಬರ್ (ಹಿ.ಸ.)
ವಿಜಯಪುರ ಮಹಾನಗರ ಪಾಲಿಕೆಯ 35 ಸದಸ್ಯರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಸದಸ್ಯರ ಪರವಾಗಿ ತೀರ್ಪು ನೀಡಿದ್ದು, ಪಾಲಿಕೆಯ ಎಲ್ಲಾ 35 ಸದಸ್ಯರು ತಮ್ಮ ಸ್ಥಾನಗಳಲ್ಲಿ ಅರ್ಹರಾಗಿ ಮುಂದುವರಿಯಲು ಅವಕಾಶ ದೊರೆತಿದೆ. ನ್ಯಾಯಾಲಯದ ಈ ತೀರ್ಪಿನಿಂದ ಪಾಲಿಕೆ ಸದಸ್ಯರು ಕಾನೂನು ಹೋರಾಟದಲ್ಲಿ ಜಯ ಸಾಧಿಸಿದಂತಾಗಿದೆ.
ತೀರ್ಪಿನಿಂದ ಸಂತಸಗೊಂಡ ಮಹಾಪೌರ ಎಂ.ಎಸ್. ಕರಡಿ ಹಾಗೂ ಪಾಲಿಕೆ ಸದಸ್ಯರಾದ ಶಿವರುದ್ರ ಬಾಗಲಕೋಟ, ಪ್ರೇಮಾನಂದ ಬಿರಾದಾರ, ಕಿರಣ್ ಪಾಟೀಲ್ ಸೇರಿದಂತೆ ಇತರ ಸದಸ್ಯರು ಪರಸ್ಪರ ಸಿಹಿ ಹಂಚಿಕೊಂಡು ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪಾಲಿಕೆ ಸದಸ್ಯರು, ನ್ಯಾಯಾಲಯದ ತೀರ್ಪು ನಮಗೆ ನ್ಯಾಯ ದೊರೆತ ಸಂತಸ ತಂದಿದೆ. ಸತ್ಯಕ್ಕೆ ಜಯ ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ಸಾಹದಿಂದ ನಗರದ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತೇವೆ ಎಂದು ಹೇಳಿದರು.
ಶಾಸಕ ಯತ್ನಾಳ್ ಮಾರ್ಗದರ್ಶನದಲ್ಲಿ ಅಭಿವೃದ್ಧಿಗೆ ಒತ್ತು
ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ಮಾರ್ಗದರ್ಶನದಲ್ಲಿ ಪಾಲಿಕೆಯ ಉಳಿದ ಅವಧಿಯಲ್ಲಿ ನಗರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಕುಡಿಯುವ ನೀರು, ರಸ್ತೆ, ಚರಂಡಿ, ಸ್ವಚ್ಛತೆ ಸೇರಿದಂತೆ ಸಾರ್ವಜನಿಕರಿಗೆ ಅಗತ್ಯವಿರುವ ಮೂಲಸೌಕರ್ಯಗಳ ಅಭಿವೃದ್ಧಿಗೆ ಒಟ್ಟಾಗಿ ಶ್ರಮಿಸಲಾಗುವುದು ಎಂದು ಸದಸ್ಯರು ತಿಳಿಸಿದರು.
35 ಸದಸ್ಯರ ಅನರ್ಹತೆ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಹೊರಬಿದ್ದ ಹಿನ್ನೆಲೆಯಲ್ಲಿ ಪಾಲಿಕೆ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಮೂಡಿದ್ದು, ಸದಸ್ಯರು ಮುಂದಿನ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande