ತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪ ಬೆಳಗಿಸದ ತಮಿಳುನಾಡು ಸರ್ಕಾರ; ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ತಿರುಪ್ಪರಂಕುಂದ್ರಂ ಬೆಟ್ಟದ ದೀಪದ ಕಂಬದಲ್ಲಿ ಕಾರ್ತಿಕ ದೀಪ ಬೆಳಗಿಸಲು ನೀಡಿದ್ದ ಸುಪ್ರೀಂ ಕೋರ್ಟ್ ಆದೇಶ ಪಾಲಿಸದ ತಮಿಳುನಾಡು ಸರ್ಕಾರದ ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ.
supreme-court-agrees-to-hear-contempt-plea-against-tamil-nadu-government-over-thiruparankundram-karthigai-deepam


ನವದೆಹಲಿ, 25 ನವೆಂಬರ್ (ಹಿ.ಸ.):

ತಮಿಳುನಾಡಿನ ಮಧುರೈ ಜಿಲ್ಲೆಯ ತಿರುಪ್ಪರಂಕುಂದ್ರಂ ಬೆಟ್ಟದ ಮೇಲಿರುವ ದೀಪದ ಕಂಬದಲ್ಲಿ ಸಾಂಪ್ರದಾಯಿಕ ಕಾರ್ತಿಕ ದೀಪ ಬೆಳಗಿಸಲು ಅನುಮತಿ ನೀಡಿದ್ದ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದ ತಮಿಳುನಾಡು ಸರ್ಕಾರದ ವಿರುದ್ಧ ಸಲ್ಲಿಕೆಯಾಗಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ.

ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ವಿಪುಲ್ ಎಂ. ಪಾಂಚೋಲಿ ಅವರನ್ನೊಳಗೊಂಡ ಪೀಠದ ಮುಂದೆ ಬುಧವಾರ ಈ ವಿಷಯ ಪ್ರಸ್ತಾಪಿಸಲಾಯಿತು. ಈ ವೇಳೆ ನಿಗದಿತ ಸ್ಥಳದಲ್ಲಿ ದೀಪ ಬೆಳಗಿಸಲು ಸಾಧ್ಯವಾಗದಿರುವ ಬಗ್ಗೆ ತಮಿಳುನಾಡು ಸರ್ಕಾರ ವಿಷಾದ ವ್ಯಕ್ತಪಡಿಸಿತು. ಪ್ರಕರಣಕ್ಕೆ ಸಂಬಂಧಿಸಿದ ಬೆಳವಣಿಗೆಗಳ ಕುರಿತು ಸ್ಥಿತಿಗತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುತ್ತಿರುವುದಾಗಿ ಸರ್ಕಾರದ ಪರ ವಕೀಲರು ತಿಳಿಸಿದರು.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಗುರುಕೃಷ್ಣ ಕುಮಾರ್, ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿದರು. ನಡೆದಿರುವ ಬೆಳವಣಿಗೆಗಳು ಅತ್ಯಂತ ದುರದೃಷ್ಟಕರವಾಗಿದ್ದು, ನ್ಯಾಯಾಲಯದ ಆದೇಶವನ್ನು ಪಾಲಿಸುವ ಬದಲು ವಿವಿಧ ತಂತ್ರಗಳನ್ನು ಅನುಸರಿಸಿ ಅಧಿಕಾರಿಗಳು ಅದನ್ನು ಉಲ್ಲಂಘಿಸಿದ್ದಾರೆ ಎಂದು ಆಕ್ಷೇಪಿಸಿದರು.

ನಿಷೇಧಾಜ್ಞೆಗಳು ಜಾರಿಯಲ್ಲಿವೆ ಹಾಗೂ ವಿವಾದಿತ ಸ್ಥಳದಲ್ಲಿ ದೀಪ ಬೆಳಗಿಸಲು ಸಾಂಪ್ರದಾಯಿಕ ಆಚರಣೆಗಳು ಅವಕಾಶ ನೀಡುವುದಿಲ್ಲ ಎಂದು ರಾಜ್ಯ ಸರ್ಕಾರ ಮದ್ರಾಸ್ ಹೈಕೋರ್ಟ್ಗೆ ತಿಳಿಸಿತ್ತು. ಆದರೆ, ಸುಪ್ರೀಂ ಕೋರ್ಟ್ ನೀಡಿದ್ದ ನಿರ್ದೇಶನದಂತೆ ಜ್ಯೋತಿಯನ್ನು ದೀಪತ್ತೂಣ್ಗೆ ಕೊಂಡೊಯ್ದು ಅಲ್ಲಿ ದೀಪ ಬೆಳಗಿಸಬೇಕಿತ್ತು ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು.

ನವೆಂಬರ್ 24ರಂದು ದೀಪ ಬೆಳಗಿಸಲು ಅನುಮತಿ

ಇದಕ್ಕೂ ಮುನ್ನ ನವೆಂಬರ್ 20ರಂದು ಸುಪ್ರೀಂ ಕೋರ್ಟ್, ಅರುಳ್ಮಿಗು ಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಆಡಳಿತ ಮಂಡಳಿಯಿಂದ ಅಧಿಕೃತಗೊಳಿಸಲಾದ ಸೀಮಿತ ಸಂಖ್ಯೆಯ ತಂಡಕ್ಕೆ ಸರ್ಕಾರಿ ಅಧಿಕಾರಿಗಳೊಂದಿಗೆ ಸೇರಿ ನವೆಂಬರ್ 24ರಂದು ದೀಪತ್ತೂಣ್ನಲ್ಲಿ ಕಾರ್ತಿಗೈ ದೀಪ ಬೆಳಗಿಸಲು ಅನುಮತಿ ನೀಡಿತ್ತು.

ಕಾರ್ಯಕ್ರಮದ ವ್ಯವಸ್ಥೆಗಳ ಸಮನ್ವಯ ಮತ್ತು ಮೇಲ್ವಿಚಾರಣೆಗಾಗಿ ಮಧುರೈ ಜಿಲ್ಲಾಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿತ್ತು. ಅಲ್ಲದೆ, ಕಾರ್ಯಕ್ರಮ ನಡೆದ ಮೂರು ದಿನಗಳೊಳಗೆ ಅನುಪಾಲನಾ ವರದಿ ಸಲ್ಲಿಸುವಂತೆಯೂ ನಿರ್ದೇಶಿಸಿತ್ತು.

ಆದರೆ, ನ್ಯಾಯಾಲಯದ ಅನುಮತಿಯ ಹೊರತಾಗಿಯೂ ನಿಗದಿತ ಸ್ಥಳದಲ್ಲಿ ದೀಪ ಬೆಳಗಿಸುವ ಕಾರ್ಯ ನಡೆದಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಮಧ್ಯಂತರ ಅನುಮತಿಯು ವಿವಾದಿತ ಸ್ಥಳದ ಮೇಲಿನ ಸಾಂಪ್ರದಾಯಿಕ ಹಕ್ಕುಗಳ ಕುರಿತು ಅಂತಿಮ ತೀರ್ಮಾನವಲ್ಲ ಎಂದು ಸುಪ್ರೀಂ ಕೋರ್ಟ್ ಈ ಹಿಂದೆಯೇ ಸ್ಪಷ್ಟಪಡಿಸಿತ್ತು.

ಇದೀಗ ನ್ಯಾಯಾಲಯದ ಆದೇಶ ಪಾಲನೆಯಾಗದಿರುವ ಕುರಿತು ಸಲ್ಲಿಕೆಯಾಗಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿರುವುದು ಪ್ರಕರಣಕ್ಕೆ ಮತ್ತಷ್ಟು ಮಹತ್ವ ತಂದಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande