ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಕೈಬಿಡಿ, ಸಮಸ್ಯೆಗೆ ಪರಿಹಾರ ನೀಡುತ್ತೇವೆ: ಡಿ.ಕೆ. ಶಿವಕುಮಾರ್
ಬೆಂಗಳೂರು, 26 ನವೆಂಬರ್ (ಹಿ.ಸ.): ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಅರಿವಿದೆ. ಸೂಕ್ತ ಪರಿಹಾರ ನೀಡುವ ಭರವಸೆ ನೀಡುತ್ತೇನೆ. ನಮ್ಮ ಮೇಲೆ ನಂಬಿಕೆ ಇಟ್ಟು ಪ್ರತಿಭಟನೆಯನ್ನು ಹಿಂಪಡೆಯಿರಿ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರಿಗ
ಸಿಎಂ ಫೈಲ್ ಪೋಟೋ


ಬೆಂಗಳೂರು, 26 ನವೆಂಬರ್ (ಹಿ.ಸ.):

ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಅರಿವಿದೆ. ಸೂಕ್ತ ಪರಿಹಾರ ನೀಡುವ ಭರವಸೆ ನೀಡುತ್ತೇನೆ. ನಮ್ಮ ಮೇಲೆ ನಂಬಿಕೆ ಇಟ್ಟು ಪ್ರತಿಭಟನೆಯನ್ನು ಹಿಂಪಡೆಯಿರಿ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರಿಗೆ ಮತ್ತೊಮ್ಮೆ ಮನವಿ ಮಾಡಿದ್ದಾರೆ.

ವಿಧಾನಸೌಧದ ಬಳಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು ಸಂಜೆ ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತೇನೆ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ. ನಾಡಿನ ಮುಖ್ಯಮಂತ್ರಿಯಾಗಿ ಎಲ್ಲ ಆಶಾ ಕಾರ್ಯಕರ್ತೆಯರು ಮತ್ತು ತಾಯಂದಿರಲ್ಲಿ ಪ್ರತಿಭಟನೆ ಹಿಂಪಡೆಯುವಂತೆ ನಮ್ರತೆಯಿಂದ ಮನವಿ ಮಾಡುತ್ತೇನೆ ಎಂದರು.

ನಾವು ನಿಮ್ಮ ಪರವಾಗಿದ್ದೇವೆ. ಸರ್ಕಾರವನ್ನು ಹೆದರಿಸುವ ಪ್ರಯತ್ನ ಮಾಡಬೇಡಿ. ಆಶಾ ಕಾರ್ಯಕರ್ತೆಯರು ಮೊದಲು ಪ್ರತಿಷ್ಠೆ ಬಿಟ್ಟು ಮಾತುಕತೆಗೆ ಮುಂದಾಗಬೇಕು. ಕೆಲವರು ತಮ್ಮ ರಾಜಕೀಯ ಉದ್ದೇಶಗಳಿಗಾಗಿ ನಿಮ್ಮನ್ನು ಬಳಸಿಕೊಳ್ಳುತ್ತಿದ್ದಾರೆ. ಆದರೆ ಅವರು ನಿಮಗೆ ಯಾವುದೇ ಸಹಾಯ ಮಾಡುವುದಿಲ್ಲ. ಈ ವಿಚಾರದಲ್ಲಿ ಹಲವು ಗಂಭೀರ ಅಂಶಗಳಿವೆ. ಆಶಾ ಕಾರ್ಯಕರ್ತೆಯರಷ್ಟೇ ಅಲ್ಲ, ಇದೇ ರೀತಿಯ ಪ್ರತಿಭಟನೆ ನಡೆಸಲು ಇನ್ನೂ ಹಲವರು ಸಿದ್ಧರಾಗುತ್ತಿದ್ದಾರೆ ಎಂದು ಹೇಳಿದರು.

ಬಿಜೆಪಿ ನಾಯಕರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಬಂದಿದ್ದಾರೆ. ಆದರೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತಿಲ್ಲವೇಕೆ? ಕೇಂದ್ರ ಸರ್ಕಾರವನ್ನು ಈ ವಿಚಾರದಲ್ಲಿ ಏಕೆ ಪ್ರಶ್ನಿಸುತ್ತಿಲ್ಲ? ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಈಗಾಗಲೇ ನೆರವು ನೀಡಿದೆ. ಈಗಲೂ ಸಮಸ್ಯೆಗೆ ಪರಿಹಾರ ಕಲ್ಪಿಸುತ್ತೇವೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವಾಗ ಮಹಿಳೆಯರಿಗೂ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ತಿಂಗಳಿಗೆ ಎರಡು ಸಾವಿರ ರೂಪಾಯಿ ಹಾಗೂ ಉಚಿತ ವಿದ್ಯುತ್ ಸೌಲಭ್ಯ ನೀಡಲಾಗುತ್ತಿದೆ. ಮಹಿಳೆಯರ ಬಗ್ಗೆ ಸರ್ಕಾರಕ್ಕೆ ವಿಶೇಷ ಕಾಳಜಿಯಿದೆ. ಆಶಾ ಕಾರ್ಯಕರ್ತೆಯರನ್ನು ಹಲವು ಬಾರಿ ಭೇಟಿಯಾಗಿದ್ದೇನೆ. ನೆಲಮಂಗಲಕ್ಕೂ ತೆರಳಿ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಹೆಣ್ಣುಮಕ್ಕಳು ಕುಟುಂಬದ ಕಣ್ಣು. ಅವರ ಸಮಸ್ಯೆಗಳನ್ನು ಪರಿಹರಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande