
ಬಾಗಲಕೋಟೆ , 26 ನವೆಂಬರ್ (ಹಿ.ಸ.)
ಮುಧೋಳ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನ.27ರಂದು ನಗರದ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಂ ಭವನದಲ್ಲಿ ಭಕ್ತ ಕನಕದಾಸರ ಜಯಂತಿ ಹಾಗೂ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಾರ್ವಜನಿಕರು ಹಾಗೂ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಹಕರಿಸಬೇಕೆಂದು ಮುಧೋಳ ತಾಲೂಕು ಕುರುಬರ ಸಂಘದ ಅಧ್ಯಕ್ಷ ಯಮನಪ್ಪ ಹೊರಟ್ಟಿ ಮನವಿ ಮಾಡಿದರು.
ನಗರದ ಕಾನಿಪ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಕ್ತ ಕನಕದಾಸರು ತಮ್ಮ ಕೀರ್ತನೆಗಳು ಹಾಗೂ ಸಾಮಾಜಿಕ ಚಿಂತನೆಗಳ ಮೂಲಕ ಸಮಾಜಕ್ಕೆ ಸಮಾನತೆ, ಭಕ್ತಿ, ಮಾನವೀಯತೆ ಮತ್ತು ಸೌಹಾರ್ದತೆಯ ಸಂದೇಶ ಸಾರಿದ ಮಹಾನ್ ಸಂತರು. ಅವರ ಆದರ್ಶ ಹಾಗೂ ವಿಚಾರಧಾರೆಗಳನ್ನು ಇಂದಿನ ಯುವಪೀಳಿಗೆಗೆ ಪರಿಚಯಿಸುವುದು ಇಂತಹ ಜಯಂತಿ ಕಾರ್ಯಕ್ರಮಗಳ ಮುಖ್ಯ ಉದ್ದೇಶವಾಗಿದೆ ಎಂದರು.
ಜಯಂತಿ ಅಂಗವಾಗಿ ಭಕ್ತ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಸಮರ್ಪಿಸಲಾಗುವುದು. ಇದೇ ಸಂದರ್ಭದಲ್ಲಿ ಸಮಾಜದ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು. ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಅವರ ಮುಂದಿನ ಶೈಕ್ಷಣಿಕ ಸಾಧನೆಗೆ ಉತ್ತೇಜನ ನೀಡುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.
ಸಮಾಜದ ಸಂಘಟನೆ, ಶೈಕ್ಷಣಿಕ ಪ್ರಗತಿ ಹಾಗೂ ಸಾಂಸ್ಕೃತಿಕ ಪರಂಪರೆಯ ಉಳಿವಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು. ಆದ್ದರಿಂದ ನ.27ರಂದು ನಡೆಯಲಿರುವ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರು, ಯುವಕರು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಯಮನಪ್ಪ ಹೊರಟ್ಟಿ ಕರೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ದುಂಡಪ್ಪ ಹೊರಟ್ಟಿ, ಪರಮಾನಂದ ಕುಟರಟ್ಟಿ, ಮಲ್ಲಪ್ಪ ಮಂಟೂರ, ದುಂಡಪ್ಪ ಇಟಕನ್ನವರ, ಅಶೋಕ ಕುಳಲಿ, ಯುವ ಘಟಕದ ಅಧ್ಯಕ್ಷ ಬೀರಪ್ಪ ಹುದ್ದಾರ, ರಂಗಪ್ಪ ಪಾಟೀಲ, ಮಹೇಶ ಮಳಲಿ, ಆನಂದ ಗುರ್ಜಟ್ಟಿ, ಹೊಳಬಸು ಕುಳಲಿ ಹಾಗೂ ನಾಗರಾಜ ಹೊಸಮನಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande