
ಬೆಂಗಳೂರು, 26 ನವೆಂಬರ್ (ಹಿ.ಸ.):
ಭಾರತದ ಪ್ರತಿಯೊಬ್ಬ ಪ್ರಜೆಗೂ ಹಕ್ಕು ಮತ್ತು ನ್ಯಾಯದ ಬೆಳಕು ನೀಡಿದ ಮಹಾನ್ ಚೇತನ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಸಂವಿಧಾನ ದಿನದಂದು ಸ್ಮರಿಸಬೇಕು. ಸಂವಿಧಾನ ನಮ್ಮೆಲ್ಲರ ಬದುಕಿನ ಪ್ರಾಣಗ್ರಂಥವಾಗಿದ್ದು, ಅದನ್ನು ಉಳಿಸಿಕೊಂಡು ಹೋಗುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸಂವಿಧಾನ ದಿನದ ಅಂಗವಾಗಿ ಗುರುವಾರ ಮಾತನಾಡಿದ ಅವರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾದಾಗ ಮೊದಲಿಗೆ ರೆಹಮಾನ್ ಖಾನ್ ಅವರಿಂದ ಸಂವಿಧಾನದ ಪೀಠಿಕೆಯನ್ನು ಓದಿಸುವ ಮೂಲಕ ಸಂವಿಧಾನದ ಮಹತ್ವ ಸಾರುವ ಕಾರ್ಯಕ್ಕೆ ಚಾಲನೆ ನೀಡಿದ್ದೆ ಎಂದು ಸ್ಮರಿಸಿದರು.
ಹಿಂದೆ ಮಹದೇವಪ್ಪ ಅವರು ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬ ಮಕ್ಕಳಿಗೂ ಮತ್ತು ಜನಸಾಮಾನ್ಯರಿಗೂ ತಲುಪಿಸುವ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಿದ್ದರು. ಈಗ ಸಚಿವ ಮುನಿಯಪ್ಪ ಅವರು ಈ ಕಾರ್ಯವನ್ನು ಕಾಳಜಿಯಿಂದ ಮುಂದುವರಿಸುತ್ತಿದ್ದಾರೆ ಎಂದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶಾಲಾ-ಕಾಲೇಜುಗಳು ಹಾಗೂ ಸರ್ಕಾರದ ಎಲ್ಲ ಕಾರ್ಯಕ್ರಮಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದುವಂತೆ ಆದೇಶ ಹೊರಡಿಸಲಾಗಿದೆ. ಸಂವಿಧಾನವನ್ನು ಉಳಿಸಿಕೊಂಡರೆ ಮಾತ್ರ ನಮ್ಮ ಬದುಕು ಮತ್ತು ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಸಾಧ್ಯ ಎಂಬ ಅರಿವು ಮೂಡಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.
ಮಹಾತ್ಮ ಗಾಂಧೀಜಿ ಅವರು ಕಾಂಗ್ರೆಸ್ ಪಕ್ಷದ ಜವಾಬ್ದಾರಿ ವಹಿಸಿಕೊಂಡು ನೂರು ವರ್ಷ ಪೂರ್ಣಗೊಂಡ ಸಂದರ್ಭದಲ್ಲಿ 'ಜೈ ಭೀಮ್, ಜೈ ಬಾಪು, ಜೈ ಸಂವಿಧಾನ್' ಎಂಬ ಹೆಸರಿನಲ್ಲಿ ಕಾರ್ಯಕ್ರಮ ರೂಪಿಸಲಾಗಿತ್ತು. ಪ್ರತಿಯೊಬ್ಬ ನಾಗರಿಕನ ಸಂಕಷ್ಟದ ಸಮಯದಲ್ಲಿ ಸಂವಿಧಾನ ನೆರವಿಗೆ ಬರುತ್ತದೆ. ನ್ಯಾಯಾಲಯದ ಮೂಲಕ ನ್ಯಾಯ ಪಡೆದುಕೊಳ್ಳಲು ಸಾಧ್ಯವಾಗಿರುವುದೂ ಸಂವಿಧಾನ ನೀಡಿರುವ ಹಕ್ಕುಗಳಿಂದಲೇ ಎಂದು ತಿಳಿಸಿದರು.
ನಮ್ಮ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ನಾವೆಲ್ಲರೂ ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ಸಂವಿಧಾನದ ಪುಸ್ತಕವನ್ನು ಇಟ್ಟುಕೊಂಡು ಗೌರವ ಸಲ್ಲಿಸಿದ್ದೇವೆ. ಸಂವಿಧಾನದ ಮೇಲೆ ನಂಬಿಕೆ ಇಟ್ಟು ಬದುಕುತ್ತಿದ್ದೇವೆ. ಅದರ ಆಶಯಗಳನ್ನು ರಕ್ಷಿಸಿ ಮುಂದಿನ ಪೀಳಿಗೆಗೂ ತಲುಪಿಸುವ ಕೆಲಸವನ್ನು ಎಲ್ಲರೂ ಒಗ್ಗಟ್ಟಿನಿಂದ ಮಾಡಬೇಕು ಎಂದು ಕರೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.