
ಕಲಬುರಗಿ, 26 ನವೆಂಬರ್ (ಹಿ.ಸ.):
ನಿವೇಶನ ವಿವಾದ ಬಗೆಹರಿಸುವುದಾಗಿ ಹೇಳಿ 30 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ಪೊಲೀಸ್ ಕಾನ್ಸ್ಟೇಬಲ್ಗೆ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಬ್ರಹ್ಮಪುರ ಪೊಲೀಸ್ ಠಾಣೆಯ ಅಂದಿನ ಕಾನ್ಸ್ಟೇಬಲ್ ಭೀಮಾನಾಯಕ್ ಶಿಕ್ಷೆಗೆ ಗುರಿಯಾದವರು. ಕಲಬುರಗಿಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಈ ಮಹತ್ವದ ತೀರ್ಪು ಪ್ರಕಟಿಸಿದ್ದು, ಐದು ವರ್ಷಗಳ ಜೈಲು ಶಿಕ್ಷೆಯ ಜೊತೆಗೆ 60 ಸಾವಿರ ರೂ. ದಂಡವನ್ನೂ ವಿಧಿಸಿದೆ.
ಪ್ರಕರಣದ ಹಿನ್ನೆಲೆ:
2022ರ ಜೂನ್ 9ರಂದು ರಿಯಲ್ ಎಸ್ಟೇಟ್ ನಿವೇಶನಕ್ಕೆ ಸಂಬಂಧಿಸಿದ ವಿವಾದವನ್ನು ಬಗೆಹರಿಸಿಕೊಡುವುದಾಗಿ ಹೇಳಿ ಕಾನ್ಸ್ಟೇಬಲ್ ಭೀಮಾನಾಯಕ್ 30 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ರಿಯಲ್ ಎಸ್ಟೇಟ್ ಉದ್ಯಮಿ ಅಬ್ದುಲ್ ಮಜೀದ್ ಮುಸ್ತಫಾ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಲಂಚದ ಹಣ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಭೀಮಾನಾಯಕ್ ಅವರನ್ನು ರೆಡ್ಹ್ಯಾಂಡ್ ಆಗಿ ಹಿಡಿದಿದ್ದರು.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಲೋಕಾಯುಕ್ತ ಇನ್ಸ್ಪೆಕ್ಟರ್ ಅಕ್ಕಮಹಾದೇವಿ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ, ಭ್ರಷ್ಟಾಚಾರ ತಡೆ ಕಾಯ್ದೆಯ ಕಲಂ 7(ಎ) ಅಡಿಯಲ್ಲಿ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಭೀಮಾನಾಯಕ್ಗೆ ಐದು ವರ್ಷಗಳ ಜೈಲು ಶಿಕ್ಷೆ ಹಾಗೂ 60 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.
--------------
ಹಿಂದೂಸ್ತಾನ್ ಸಮಾಚಾರ್ / BHARGAVI G R