ಸಂವಿಧಾನದ ಆಶಯಗಳ ಸಾಕಾರಕ್ಕೆ ಎಲ್ಲರೂ ಕೈಜೋಡಿಸೋಣ: ಶಾಸಕ ಎಚ್.ಕೆ. ಪಾಟೀಲ
ಗದಗ, 26 ನವೆಂಬರ್ (ಹಿ.ಸ.) ಭಾರತೀಯ ಸಂವಿಧಾನವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮಾತ್ರ ಸೀಮಿತವಾಗಿಲ್ಲ. ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಂವಿಧಾನ ಸಹಕಾರಿಯಾಗಿದ್ದು, ಸಮಾಜದಲ್ಲಿ ಶಾಂತಿ, ಸುರಕ್ಷತೆ, ಸಮಾನತೆ ಹಾಗೂ ಸುವ್ಯವಸ್ಥೆ ನೆಲೆಸಲು ಸಂವಿಧಾನವೇ ಪ್ರಮುಖ ಆಧಾರವಾಗಿದೆ. ಆದ್ದರಿಂದ
ಫೋಟೋ


ಗದಗ, 26 ನವೆಂಬರ್ (ಹಿ.ಸ.)

ಭಾರತೀಯ ಸಂವಿಧಾನವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮಾತ್ರ ಸೀಮಿತವಾಗಿಲ್ಲ. ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಂವಿಧಾನ ಸಹಕಾರಿಯಾಗಿದ್ದು, ಸಮಾಜದಲ್ಲಿ ಶಾಂತಿ, ಸುರಕ್ಷತೆ, ಸಮಾನತೆ ಹಾಗೂ ಸುವ್ಯವಸ್ಥೆ ನೆಲೆಸಲು ಸಂವಿಧಾನವೇ ಪ್ರಮುಖ ಆಧಾರವಾಗಿದೆ. ಆದ್ದರಿಂದ ಸಂವಿಧಾನದ ಆಶಯಗಳನ್ನು ಅರಿತು ಅವುಗಳ ಸಾಕಾರಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಶಾಸಕ ಎಚ್.ಕೆ. ಪಾಟೀಲ ಕರೆ ನೀಡಿದರು.

ಗದಗ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನದ ಮೂಲಕ ಹೆಚ್ಚಿನ ಪ್ರಯೋಜನ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಿರುವವರೇ ಸಂವಿಧಾನ ದಿನಾಚರಣೆಯಿಂದ ದೂರ ಉಳಿಯುತ್ತಿರುವುದು ಖೇದಕರ ಸಂಗತಿಯಾಗಿದೆ. ಸಂವಿಧಾನದ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಸಂವಿಧಾನ ದಿನಾಚರಣೆಯು ಕೇವಲ ಸಮಾಜ ಕಲ್ಯಾಣ ಇಲಾಖೆಗೆ ಸೀಮಿತವಾಗಬಾರದು. ಕಾನೂನು ಇಲಾಖೆಯೂ ಸಕ್ರಿಯವಾಗಿ ಭಾಗವಹಿಸಿ ಮುಂದಿನ ದಿನಗಳಲ್ಲಿ ಇನ್ನಷ್ಟು ಅರ್ಥಪೂರ್ಣವಾಗಿ ಆಚರಿಸುವಂತಾಗಬೇಕು ಎಂದು ಅಭಿಪ್ರಾಯಪಟ್ಟರು.

ಜಗತ್ತಿನ ವಿವಿಧ ರಾಷ್ಟ್ರಗಳ ಸಂವಿಧಾನಗಳ ಸರಾಸರಿ ಬಾಳಿಕೆ ಸುಮಾರು 19 ವರ್ಷಗಳಷ್ಟಿದೆ. ಆದರೆ, ಭಾರತದ ಸಂವಿಧಾನವು 77 ವರ್ಷಗಳಾದರೂ ತನ್ನ ಸದೃಢತೆ ಮತ್ತು ಬಲಿಷ್ಠತೆಯನ್ನು ಉಳಿಸಿಕೊಂಡು ಮುನ್ನಡೆಯುತ್ತಿದೆ. ಇದು ನಮ್ಮ ಸಂವಿಧಾನದ ಶ್ರೇಷ್ಠತೆ ಹಾಗೂ ಗಟ್ಟಿತನಕ್ಕೆ ಸಾಕ್ಷಿಯಾಗಿದೆ. ಸಂವಿಧಾನವು ಕೇವಲ ಆಡಳಿತಾತ್ಮಕ ಕಾನೂನು ದಾಖಲೆಯಲ್ಲ, ಅದೊಂದು ಸಾಮಾಜಿಕ ಕೃತಿಯಾಗಿದೆ. ಭಾರತೀಯರಾದ ನಾವೆಲ್ಲರೂ ಒಂದೇ ಎಂಬ ರಾಷ್ಟ್ರೀಯ ಭಾವನೆ ಮೂಡಿಸುವ ಶಕ್ತಿ ಸಂವಿಧಾನಕ್ಕಿದೆ ಎಂದು ಹೇಳಿದರು.

ಸ್ವಾತಂತ್ರ್ಯ ಪೂರ್ವದಲ್ಲಿ ದೇಶದಲ್ಲಿ ಅಸ್ಪೃಶ್ಯತೆ ಸೇರಿದಂತೆ ಹಲವು ಸಾಮಾಜಿಕ ಅಸಮಾನತೆಗಳು ವ್ಯಾಪಕವಾಗಿ ನೆಲೆಸಿದ್ದವು. ಸಂವಿಧಾನ ಜಾರಿಯಾದ ನಂತರ ಸಮಾಜದಲ್ಲಿ ಮಹತ್ವದ ಬದಲಾವಣೆಗಳು ಸಂಭವಿಸಿವೆ. ಪ್ರತಿಯೊಬ್ಬರಿಗೂ ಸಮಾನ ಹಕ್ಕು, ಅವಕಾಶ ಮತ್ತು ಗೌರವ ದೊರೆಯಲು ಸಂವಿಧಾನ ದಾರಿದೀಪವಾಗಿದೆ. ಸಂವಿಧಾನದ ಆಶಯಗಳ ಮೇಲೆ ಪ್ರತಿಯೊಬ್ಬರೂ ಪ್ರೀತಿ ಮತ್ತು ಗೌರವ ಹೊಂದಿರಬೇಕು. ಅದರ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾನತೆಯ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.

ಸಮರ್ಥ ಹಾಗೂ ಚಾರಿತ್ರ್ಯವಂತ ವ್ಯಕ್ತಿಗಳಿಂದ ಮಾತ್ರ ಸದೃಢ ಸಮಾಜ ಮತ್ತು ರಾಷ್ಟ್ರ ನಿರ್ಮಾಣ ಸಾಧ್ಯ. ಸಂವಿಧಾನದ ಆಶಯಗಳನ್ನು ಅರಿತವರು ಉತ್ತಮ ಆಡಳಿತ ನೀಡಲು ಸಮರ್ಥರಾಗುತ್ತಾರೆ. ಹೀಗಾಗಿ ಸಂವಿಧಾನದ ಮೌಲ್ಯಗಳನ್ನು ತಿಳಿದುಕೊಂಡು ಅದರ ಮಾರ್ಗದಲ್ಲಿ ಮುನ್ನಡೆಯಬೇಕು. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ರಾಜೇಂದ್ರ ಪ್ರಸಾದ್ ಅವರ ಆದರ್ಶಗಳನ್ನು ಅರಿತು ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಸಾಗಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಆರಂಭದಲ್ಲಿ ಶಾಸಕ ಎಚ್.ಕೆ. ಪಾಟೀಲ ಅವರು ಜ್ಯೋತಿ ಬೆಳಗಿಸಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಂವಿಧಾನ ಪ್ರತಿಯೊಬ್ಬ ನಾಗರಿಕನ ಹಕ್ಕು ಮತ್ತು ಕರ್ತವ್ಯಗಳ ಮಾರ್ಗದರ್ಶಿ

ಎಚ್.ಸಿ.ಇ.ಎಸ್. ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಹಾಗೂ ಉಪನ್ಯಾಸಕ ಡಿ.ಜಿ. ಜೋಗಣ್ಣನವರ ಮಾತನಾಡಿ, ಭಾರತೀಯ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಹಾಗೂ ಸಹೋದರತ್ವದ ಹಕ್ಕುಗಳನ್ನು ಕಲ್ಪಿಸಿಕೊಟ್ಟಿದೆ. ಸಂವಿಧಾನವು ಕೇವಲ ಆಡಳಿತ ನಡೆಸುವ ಮಾರ್ಗಸೂಚಿಯಲ್ಲ. ಬದಲಾಗಿ ದೇಶದ ಪ್ರತಿಯೊಬ್ಬ ನಾಗರಿಕನ ಹಕ್ಕು ಮತ್ತು ಕರ್ತವ್ಯಗಳನ್ನು ನಿರ್ಧರಿಸುವ ಮಹತ್ವದ ಕಾನೂನು ಗ್ರಂಥವಾಗಿದೆ. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳು ಸಂವಿಧಾನದ ಮೂಲ ಆಶಯಗಳು, ಮೂಲಭೂತ ಹಕ್ಕುಗಳು ಹಾಗೂ ಮೂಲಭೂತ ಕರ್ತವ್ಯಗಳ ಕುರಿತು ಅರಿವು ಹೊಂದಬೇಕು. ದೇಶದ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಲು ಸಂವಿಧಾನದ ಮೌಲ್ಯಗಳನ್ನು ಗೌರವಿಸುವುದು ಅತ್ಯಗತ್ಯವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಮಹತ್ವ, ಕಾನೂನಿನ ಗೌರವ, ಸಾರ್ವಜನಿಕ ಆಸ್ತಿಯ ರಕ್ಷಣೆ ಹಾಗೂ ಸಾಮಾಜಿಕ ಜವಾಬ್ದಾರಿಗಳನ್ನು ಅರಿತು ನಡೆಯಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಸಂವಿಧಾನ ದಿನಾಚರಣೆಯು ಸಂವಿಧಾನದ ಮಹತ್ವವನ್ನು ಸ್ಮರಿಸುವುದರ ಜೊತೆಗೆ ಅದರ ಆಶಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರೇರಣೆ ನೀಡುವ ದಿನವಾಗಿದೆ. ಪ್ರತಿಯೊಬ್ಬರೂ ಸಂವಿಧಾನದ ತತ್ವಗಳನ್ನು ಗೌರವಿಸಿ ದೇಶದ ಪ್ರಗತಿ, ಏಕತೆ ಹಾಗೂ ಸಮಗ್ರ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಹೇಳಿದರು.

ಸಂವಿಧಾನದ ಪೀಠಿಕೆ ಬೋಧನೆ, ಜಾಗೃತಿ ಗೀತೆ ಪ್ರಸ್ತುತಿ

ಕಾರ್ಯಕ್ರಮದಲ್ಲಿ ಶರೀಷ್ ಬಿಳಿಯಲಿ ಹಾಗೂ ತಂಡದವರು ಸಂವಿಧಾನ ಜಾಗೃತಿ ಗೀತೆಯನ್ನು ಪ್ರಸ್ತುತಪಡಿಸಿದರು. ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ವಡೆಯಮಲ್ಲಾಪುರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ವಂದೇ ಮಾತರಂ ಹಾಗೂ ನಾಡಗೀತೆಯನ್ನು ಪ್ರಸ್ತುತಪಡಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಹಟ್ಟಿ ಸ್ವಾಗತಿಸಿದರು. ಪ್ರೊ. ಬಾಹುಬಲಿ ಜೈನರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಕಾರ್ಯಕ್ರಮದಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಚಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಕುಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್., ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್., ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಎಸ್.ಎನ್. ಬಳ್ಳಾರಿ, ಬಸವರಾಜ ಕಡೇಮನಿ, ಪ್ರೊ. ಸಂಗಮೇಶ್, ಅನಂತ ಸಿಂಗಾಡಿ, ಮಾರ್ತಾಂಡಪ್ಪ ಹಾದಿಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande