
ಬೆಂಗಳೂರು, 26 ನವೆಂಬರ್ (ಹಿ.ಸ.):
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ₹187 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದಲಿತ ಸಮುದಾಯದ ಹಣ ದುರುಪಯೋಗಪಡಿಸಿಕೊಂಡ ಪ್ರಕರಣದಲ್ಲಿ ಸಂಬಂಧಪಟ್ಟ ಸಚಿವರು, ಶಾಸಕರು ಹಾಗೂ ಅಧಿಕಾರಿಗಳಿಗೆ ಹೊಣೆಗಾರಿಕೆಯಿಂದ ವಿನಾಯಿತಿ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ವಾಲ್ಮೀಕಿ ನಿಗಮದಲ್ಲಿ ₹187 ಕೋಟಿ ಹಗರಣ ನಡೆದಿರುವುದು ನಿಜವೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ವಿಧಾನಮಂಡಲದ ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಆದರೆ, ಮುಖ್ಯಮಂತ್ರಿಗಳಾಗಿದ್ದವರು, ಅಂದಿನ ಹಣಕಾಸು ಸಚಿವರಾಗಿದ್ದ ಸಿದ್ದರಾಮಯ್ಯ, ಇಲಾಖೆಯ ಸಚಿವರಾಗಿದ್ದ ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷರಾಗಿದ್ದ ಕಾಂಗ್ರೆಸ್ ಶಾಸಕ ಬಸವರಾಜ ದದ್ದಲ್ ಯಾರೂ ಜವಾಬ್ದಾರರಲ್ಲವೆಂದಾದರೆ ಹಣ ಲೂಟಿ ಮಾಡಿದವರು ಯಾರು ಎಂದು ಪ್ರಶ್ನಿಸಿದ್ದಾರೆ.
ಹಗರಣ ನಡೆದಿರುವುದನ್ನು ಒಪ್ಪಿಕೊಂಡ ಬಳಿಕ ಅದರ ಹೊಣೆಗಾರರು ಯಾರು ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ಪರಿಶಿಷ್ಟ ಸಮುದಾಯಗಳಿಗೆ ಮೀಸಲಿಟ್ಟ ಹಣ ದುರುಪಯೋಗವಾಗಿರುವ ಪ್ರಕರಣದಲ್ಲಿ ತಪ್ಪಿತಸ್ಥರು ಯಾರೆಂಬುದನ್ನು ಬಹಿರಂಗಪಡಿಸಿ, ಕನ್ನಡಿಗರಿಗೆ ಲೆಕ್ಕ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಪರಿಶಿಷ್ಟ ಸಮುದಾಯಗಳ ಹಣ ದುರುಪಯೋಗವಾಗಿರುವುದರ ಜೊತೆಗೆ ಪ್ರಾಮಾಣಿಕ ದಲಿತ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿರುವ ಅಶೋಕ್, ಸಂಬಂಧಪಟ್ಟ ಸಚಿವರು ಮತ್ತು ಶಾಸಕರು ಸಂವಿಧಾನ ದಿನ ಆಚರಿಸುವ ನೈತಿಕತೆ ಹೊಂದಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರಂಟಿ ಎಂದರೆ ಹಗರಣದಲ್ಲಿ ಭಾಗಿಯಾದವರಿಗೆ ಕ್ಲೀನ್ಚಿಟ್ ನೀಡುವುದೇ ಎಂದು ವ್ಯಂಗ್ಯವಾಡಿರುವ ಅವರು, ಕರ್ನಾಟಕದ ಇತಿಹಾಸದಲ್ಲಷ್ಟೇ ಅಲ್ಲ, ದೇಶದ ಇತಿಹಾಸದಲ್ಲಿಯೂ ಇಂತಹ ಸರ್ಕಾರ ಮತ್ತೊಂದಿರಲಿಕ್ಕಿಲ್ಲ ಎಂದು ಟೀಕಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.