
ಬೆಂಗಳೂರು, 26 ನವೆಂಬರ್ (ಹಿ.ಸ.):
ರಾಜ್ಯ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಹತ್ತನೇ ದಿನಕ್ಕೆ ಕಾಲಿಟ್ಟಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರು ಹಗಲು-ರಾತ್ರಿ ಎನ್ನದೆ ಧರಣಿ ಮುಂದುವರಿಸಿದ್ದು, ಜಪಾನ್ ಪ್ರವಾಸ ಮುಗಿಸಿ ರಾಜ್ಯಕ್ಕೆ ಮರಳುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ.
ಮಾಸಿಕ ಗೌರವಧನವನ್ನು 5 ಸಾವಿರ ರೂ.ಗಳಿಂದ 15 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು ಎಂಬುದು ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರ ಪ್ರಮುಖ ಬೇಡಿಕೆಯಾಗಿದೆ. ಇದರ ಜೊತೆಗೆ ಬಾಕಿ ಇರುವ ಪ್ರೋತ್ಸಾಹಧನ ಬಿಡುಗಡೆ, ನಿವೃತ್ತಿ ಸೌಲಭ್ಯ, ಅನಾರೋಗ್ಯ ಮತ್ತು ಅಪಘಾತದ ಸಂದರ್ಭದಲ್ಲಿ ಆರ್ಥಿಕ ನೆರವು ಹಾಗೂ ಕೆಲಸದ ಒತ್ತಡ ಕಡಿಮೆ ಮಾಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.
ಜಪಾನ್ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಡಿಯೋ ಕರೆ ಮೂಲಕ ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗಳೊಂದಿಗೆ ಮಾತನಾಡಿ, ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದ್ದರು. ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಬೇಡಿಕೆಗಳ ಕುರಿತು ಚರ್ಚಿಸಿ, ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.
ಈ ವೇಳೆ ಮಾತನಾಡಿದ್ದ ಸಿಎಂ, ಆಶಾ ಕಾರ್ಯಕರ್ತೆಯರ ಬಗ್ಗೆ ನನಗೆ ವಿಶೇಷ ಕಾಳಜಿ ಇದೆ. ನಿಮ್ಮ ಸಮಸ್ಯೆಗಳಿಗೆ ಖಂಡಿತ ಪರಿಹಾರ ಕಂಡುಕೊಳ್ಳುತ್ತೇವೆ. ಸರ್ಕಾರದ ಮೇಲೆ ವಿಶ್ವಾಸವಿಡಿ, ಪ್ರತಿಭಟನೆ ಹಿಂಪಡೆಯಿರಿ ಎಂದು ಮನವಿ ಮಾಡಿದ್ದರು.
ಆದರೆ ಮುಖ್ಯಮಂತ್ರಿಗಳ ವಿಡಿಯೋ ಕರೆ ಮನವಿಗೆ ಪ್ರತಿಭಟನಾಕಾರರು ಒಪ್ಪಿಗೆ ಸೂಚಿಸಿಲ್ಲ. ಕೇವಲ ಮೌಖಿಕ ಭರವಸೆಗೆ ಹೋರಾಟ ಹಿಂಪಡೆಯುವುದಿಲ್ಲ. ಮುಖ್ಯಮಂತ್ರಿ ಖುದ್ದಾಗಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ತಮ್ಮ ಬೇಡಿಕೆಗಳ ಈಡೇರಿಕೆಗೆ ಲಿಖಿತ ಭರವಸೆ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.
ನವೆಂಬರ್ 17ರಂದು ಆರಂಭಗೊಂಡಿರುವ ಈ ಹೋರಾಟಕ್ಕೆ ವಿವಿಧ ಸಂಘಟನೆಗಳು, ರಾಜಕೀಯ ನಾಯಕರು ಹಾಗೂ ಚಿತ್ರರಂಗದ ಗಣ್ಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ನಟಿ ರಮ್ಯಾ ಸೇರಿದಂತೆ ಹಲವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
ಇದೀಗ ಜಪಾನ್ ಪ್ರವಾಸ ಮುಗಿಸಿ ಮರಳುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಂದಿರುವ ಪ್ರಮುಖ ಸವಾಲುಗಳಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆಯೂ ಒಂದಾಗಿದೆ. ಇಂದು ಸಿಎಂ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಕರ್ತೆಯರೊಂದಿಗೆ ಮಾತುಕತೆ ನಡೆಸುತ್ತಾರೆಯೇ? ಅವರ ಬೇಡಿಕೆಗಳಿಗೆ ಲಿಖಿತ ಭರವಸೆ ನೀಡುತ್ತಾರೆಯೇ? ಎಂಬ ಕುತೂಹಲ ಮೂಡಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R