
ನವದೆಹಲಿ, 26 ನವೆಂಬರ್ (ಹಿ.ಸ.):
ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿಯನ್ನು ಕಡಿತಗೊಳಿಸಿ, ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸುವ ಉದ್ದೇಶವನ್ನು ಪ್ರಮುಖ ವಿರೋಧ ಪಕ್ಷ ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ.
ಸಂವಿಧಾನ ದಿನದ ಅಂಗವಾಗಿ ಗುರುವಾರ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾದ ತಮ್ಮ ಲೇಖನದಲ್ಲಿ ಪ್ರಧಾನಿ ಮೋದಿ ಈ ಆರೋಪ ಮಾಡಿದ್ದು, ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಂವಿಧಾನ ರಚನಾಕಾರರು ತಿರಸ್ಕರಿಸಿದ್ದ ವಿಚಾರಗಳನ್ನೇ ವಿರೋಧ ಪಕ್ಷ ಮತ್ತೆ ಮುನ್ನೆಲೆಗೆ ತರುತ್ತಿದೆ ಎಂದು ಅವರು ಟೀಕಿಸಿದ್ದಾರೆ.
1949ರ ನವೆಂಬರ್ 26ರಂದು ಭಾರತದ ಸಂವಿಧಾನ ಅಂಗೀಕಾರಗೊಂಡ ದಿನವನ್ನು ಸ್ಮರಿಸಿದ ಮೋದಿ, ಒಬಿಸಿ ಮೀಸಲಾತಿಯನ್ನು ಕಡಿತಗೊಳಿಸಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಯತ್ನವನ್ನು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನಾಕಾರರು ಸಂಪೂರ್ಣವಾಗಿ ವಿರೋಧಿಸಿದ್ದರು ಎಂದು ತಮ್ಮ ಲೇಖನದಲ್ಲಿ ಉಲ್ಲೇಖಿಸಿದ್ದಾರೆ.
ಇದೇ ವೇಳೆ, ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುತ್ತಿರುವ ವಿರೋಧ ಪಕ್ಷದ ನಿಲುವನ್ನೂ ಪ್ರಧಾನಿ ಪ್ರಶ್ನಿಸಿದ್ದಾರೆ. ವಿರೋಧ ಪಕ್ಷವು ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸುವ ಬದಲು 'ಅವ್ರೋಧ ಪಕ್ಷ'ದಂತೆ ವರ್ತಿಸುತ್ತಿದೆ ಎಂದು ಟೀಕಿಸಿರುವ ಅವರು, ಪ್ರಜಾಪ್ರಭುತ್ವದ ಪ್ರಕ್ರಿಯೆಗಳಿಗೆ ಅಡ್ಡಿಪಡಿಸುವುದು ಸಾಂವಿಧಾನಿಕ ಜವಾಬ್ದಾರಿಗಳನ್ನು ನಿರ್ವಹಿಸುವುದಕ್ಕೆ ಪರ್ಯಾಯವಲ್ಲ ಎಂದು ಹೇಳಿದ್ದಾರೆ.
ಮಹಿಳಾ ಮೀಸಲಾತಿ ವಿಚಾರದಲ್ಲಿಯೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಮೋದಿ, ಶಾಸಕಾಂಗ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ಸಂವಿಧಾನ ತಿದ್ದುಪಡಿ ಮಸೂದೆ ಸಂಸತ್ತಿನಲ್ಲಿ ಸೋಲಲು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷದ ನಿಲುವೇ ಕಾರಣ ಎಂದು ಆರೋಪಿಸಿದ್ದಾರೆ.
ಮಹಿಳೆಯರಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಮಹತ್ವದ ಮಸೂದೆಯನ್ನು ಅಂಗೀಕರಿಸಲು ಅವಕಾಶ ನೀಡದಿರುವುದು ವಿರೋಧ ಪಕ್ಷದ ಸಂವಿಧಾನಾತ್ಮಕ ಮೌಲ್ಯಗಳ ಬಗೆಗಿನ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಅವರು ಟೀಕಿಸಿದ್ದಾರೆ.
ದೇಶದ ಮಹಿಳೆಯರಿಗೆ ನ್ಯಾಯ ಮತ್ತು ಸಮಾನ ಪ್ರಾತಿನಿಧ್ಯ ದೊರಕಿಸುವ ನಿಟ್ಟಿನಲ್ಲಿ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿರುವ ಪ್ರಧಾನಿ ಮೋದಿ, ಭಾರತದ ನಾರಿಶಕ್ತಿಗೆ ನ್ಯಾಯ ದೊರಕುವುದನ್ನು ತಡೆಯಲು ಯಾವುದೇ ಶಕ್ತಿಯಿಂದಲೂ ಸಾಧ್ಯವಿಲ್ಲ ಎಂದು ಭರವಸೆ ನೀಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R