


ಬಳ್ಳಾರಿ, 27 ನವೆಂಬರ್ (ಹಿ.ಸ.)
ಹಾಲುಮತ ಸಮಾಜದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸರ್ಕಾರದೊಂದಿಗೆ ಚರ್ಚಿಸಿ ಶೀಘ್ರದಲ್ಲೇ 10 ಎಕರೆ ಭೂಮಿ ಮಂಜೂರು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿ ಭರವಸೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ವತಿಯಿಂದ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮ0ದಿರದಲ್ಲಿ ಆಯೋಜಿಸಲಾಗಿದ್ದ, ಸಂತಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮ ಅವರು ಉದ್ಘಾಟಿಸಿ ಮಾತನಾಡಿದರು.
ಸಮಾಜದ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಅಗತ್ಯ ಸಹಕಾರ ನೀಡಲಿದೆ. ಸಮಾಜದ ಕಟ್ಟಡ ನಿರ್ಮಾಣಕ್ಕಾಗಿ 50 ಲಕ್ಷ ಸಹಾಯಧನ ನೀಡಲಾಗುವುದು ಎಂದು ತಿಳಿಸಿದರು.
ನಗರದಲ್ಲಿ ಸಂಗೊಳ್ಳಿ ರಾಯಣ್ಣ ಅವರ ಪುತ್ಥಳಿಯನ್ನು ನಿರ್ಮಾಣ ಮಾಡಿ, ಜನವರಿಯಲ್ಲಿ ಉದ್ಘಾಟನೆ ನೆರವೇರಿಸಲಾಗುವುದು. ರಾಜ್ಯ ಸರ್ಕಾರವು ಸಮಾಜದ ಜನರ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಹೇಳಿದರು.
ಸರಳಾದೇವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಕೆ. ಬಸಪ್ಪ ಅವರು ವಿಶೇಷ ಉಪನ್ಯಾಸ ನೀಡಿ, ಸಂತಶ್ರೇಷ್ಠ ಕನಕದಾಸರು ತಮ್ಮ ಸಾಹಿತ್ಯ ಹಾಗೂ ಕೀರ್ತನೆಗಳ ಮೂಲಕ ಸಮಾಜದಲ್ಲಿದ್ದ ಜಾತಿ ವ್ಯವಸ್ಥೆ ಮತ್ತು ಅಸಮಾನತೆಗಳ ವಿರುದ್ಧ ಧ್ವನಿ ಎತ್ತಿದ ಮಹಾನ್ ಸಂತರು. ತಮ್ಮ ಸಾಹಿತ್ಯದ ಮೂಲಕ ಸಮಾನತೆ, ಮಾನವೀಯತೆ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶವನ್ನು ಜನರಿಗೆ ಸಾರಿದರು ಎಂದು ತಿಳಿಸಿದರು.
ಅವರ ಜೀವನ ಮತ್ತು ಸಾಹಿತ್ಯ ಇಂದಿನ ಸಮಾಜಕ್ಕೂ ಪ್ರಸ್ತುತವಾಗಿದ್ದು, ವಿದ್ಯಾರ್ಥಿಗಳು ಕನಕದಾಸರ ಜೀವನ ಚರಿತ್ರೆ ಹಾಗೂ ಸಾಹಿತ್ಯವನ್ನು ಅಧ್ಯಯನ ಮಾಡಬೇಕು ಎಂದು ಸಲಹೆ ನೀಡಿದರು.
ಬಳ್ಳಾರಿ ತಹಸೀಲ್ದಾರ್ ನರಸಪ್ಪ ಅವರು ಮಾತನಾಡಿ, ಸಂತಶ್ರೇಷ್ಠ ಕನಕದಾಸರು ತಮ್ಮ ಜೀವನ ಹಾಗೂ ಸಾಹಿತ್ಯದ ಮೂಲಕ ಸಮಾಜದಲ್ಲಿ ಅನೇಕ ಬದಲಾವಣೆಗಳಿಗೆ ಕಾರಣರಾದವರು. ಅವರ ಪ್ರಮುಖ ಕೀರ್ತನೆಗಳನ್ನು ಪ್ರತಿಯೊಬ್ಬರೂ ಓದಬೇಕು. ಸಮಾಜದಲ್ಲಿ ಎಲ್ಲರನ್ನು ಸಮಾನವಾಗಿ ಗೌರವಿಸಬೇಕು ಎಂಬ ಮೌಲ್ಯವನ್ನು ತಮ್ಮ ಸಾಹಿತ್ಯದ ಮೂಲಕ ತಿಳಿಸಿಕೊಟ್ಟ ಮಹಾನ್ ದಾರ್ಶನಿಕರಾಗಿದ್ದಾರೆ ಎಂದು ಹೇಳಿದರು.
*:ಪುತ್ಥಳಿಗೆ ಮಾಲಾರ್ಪಣೆ ಹಾಗೂ ಭವ್ಯ ಮೆರವಣಿಗೆ:*
ಕನಕದಾಸರ ಜಯಂತಿ ಅಂಗವಾಗಿ ಬೆಳಿಗ್ಗೆ 9 ಗಂಟೆಗೆ ನಗರದ ಕನಕ ವೃತ್ತದಲ್ಲಿರುವ ಭಕ್ತ ಕನಕದಾಸರ ಪುತ್ಥಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಜಿಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ., ಮಹಾನಗರ ಪಾಲಿಕೆ ಮೇಯರ್ ಪಿ. ಗಾದೆಪ್ಪ, ಮಹಾನಗರ ಪಾಲಿಕೆ ಆಯುಕ್ತ ರಾಜೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ನಂತರ ಕನಕ ವೃತ್ತದಿಂದ ಆರಂಭವಾದ ಮೆರವಣಿಗೆಯು ವಾಲ್ಮೀಕಿ ವೃತ್ತ, ಕನಕದುರ್ಗಮ್ಮ ದೇವಸ್ಥಾನ, ಗಡಿಗಿ ಚನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಹಳೇ ಬ್ರೂಸ್ಪೇಟೆ ಪೊಲೀಸ್ ಠಾಣೆ, ತೇರು ಬೀದಿ ಹಾಗೂ ಎಚ್.ಆರ್. ಗವಿಯಪ್ಪ ವೃತ್ತದ ಮೂಲಕ ಸಾಗಿ ಡಾ. ಜೋಳದರಾಶಿ ದೊಡ್ಡನಗೌಡ ರಂಗಮAದಿರದ ಆವರಣದಲ್ಲಿ ಮುಕ್ತಾಯಗೊಂಡಿತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಗೋನಾಳು ನಾಗಭೂಷಣ, ಮಹಾನಗರ ಪಾಲಿಕೆ ಸದಸ್ಯೆ ಈರಮ್ಮ, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಸಮಾಜದ ಹಿರಿಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್