
ಬೆಂಗಳೂರು, 27 ನವೆಂಬರ್ (ಹಿ.ಸ.):
ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆನೀರನ್ನು ಸಂರಕ್ಷಿಸುವುದು, ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದು ಹಾಗೂ ಲಭ್ಯವಿರುವ ಜಲಸಂಪನ್ಮೂಲವನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಉದ್ದೇಶದಿಂದ ಶಿರಪುರ ಮಾದರಿಯಲ್ಲಿ ₹200 ಕೋಟಿ ವೆಚ್ಚದ ಜಲ ಸಂರಕ್ಷಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಧರ್ಮಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಡಿ ಈ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸರಣಿ ತಡೆಗೋಡೆಗಳ ನಿರ್ಮಾಣ, ಹಳ್ಳ ಮತ್ತು ನಾಲೆಗಳ ಆಳ ಹಾಗೂ ಅಗಲ ಹೆಚ್ಚಿಸುವುದು, ಅಂತರ್ಜಲ ಮರುಪೂರಣ ಘಟಕಗಳ ನಿರ್ಮಾಣ ಮತ್ತು ಕೆರೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಮಳೆನೀರು ವ್ಯರ್ಥವಾಗಿ ಹರಿದುಹೋಗುವುದನ್ನು ತಡೆದು ಸ್ಥಳೀಯವಾಗಿಯೇ ಸಂಗ್ರಹಿಸಿ ಭೂಮಿಯಲ್ಲಿ ಇಂಗುವಂತೆ ಮಾಡುವುದು ಶಿರಪುರ ಮಾದರಿಯ ಪ್ರಮುಖ ಉದ್ದೇಶವಾಗಿದೆ. ಇದರಿಂದ ಅಂತರ್ಜಲ ಮಟ್ಟ ಹೆಚ್ಚುವುದರ ಜತೆಗೆ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಕೊಳವೆಬಾವಿಗಳ ಮೇಲಿನ ಅವಲಂಬನೆ ಕಡಿಮೆ ಮಾಡಲು ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಈ ಕಾಮಗಾರಿಗಳು ನೆರವಾಗಲಿವೆ ಎಂದು ಸಚಿವರು ತಿಳಿಸಿದ್ದಾರೆ.
ಜಿಲ್ಲಾವಾರು ಅನುದಾನ ಹಂಚಿಕೆ
ಒಟ್ಟು ₹200 ಕೋಟಿ ಅನುದಾನದಲ್ಲಿ ಕಲಬುರಗಿ ಜಿಲ್ಲೆಗೆ ₹49.20 ಕೋಟಿ, ರಾಯಚೂರು ಜಿಲ್ಲೆಗೆ ₹38.80 ಕೋಟಿ ಹಾಗೂ ಬಳ್ಳಾರಿ ಜಿಲ್ಲೆಗೆ ₹35 ಕೋಟಿ ಮೀಸಲಿಡಲಾಗಿದೆ.
ಯಾದಗಿರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳಿಗೆ ತಲಾ ₹21 ಕೋಟಿ ಹಾಗೂ ಬೀದರ್ ಜಿಲ್ಲೆಗೆ ₹14 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ.
ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ತಲಾ ₹100 ಕೋಟಿ ಅನುದಾನ ನೀಡಿವೆ. ಒಟ್ಟು ₹200 ಕೋಟಿ ವೆಚ್ಚದ ಕಾಮಗಾರಿಗಳನ್ನು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ.
ಶಿರಪುರ ಮಾದರಿಯಲ್ಲಿ ಹಳ್ಳ ಮತ್ತು ನಾಲೆಗಳಿಗೆ ಅಡ್ಡಲಾಗಿ ಸರಣಿ ತಡೆಗೋಡೆಗಳನ್ನು ನಿರ್ಮಿಸುವುದರಿಂದ ಮಳೆನೀರು ವ್ಯರ್ಥವಾಗಿ ಹರಿದುಹೋಗುವುದನ್ನು ತಡೆಯಬಹುದು. ಇದರಿಂದ ಅಂತರ್ಜಲ ಮರುಪೂರಣಕ್ಕೆ ಹೆಚ್ಚಿನ ಅವಕಾಶ ದೊರೆಯಲಿದೆ ಎಂದು ಇಲಾಖೆಯ ಕಾರ್ಯದರ್ಶಿ ರಾಜೇಶ್ ಅಮ್ಮಿನಭಾವಿ ತಿಳಿಸಿದ್ದಾರೆ.
ಆಯಾ ಪ್ರದೇಶದ ಭೌಗೋಳಿಕ ಪರಿಸ್ಥಿತಿ, ಮಳೆಯ ಪ್ರಮಾಣ ಹಾಗೂ ನೀರಿನ ಲಭ್ಯತೆಯನ್ನು ಪರಿಗಣಿಸಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವ ಮೂಲಕ ಜಲಸಂರಕ್ಷಣೆಯಲ್ಲಿ ಸುಸ್ಥಿರ ಫಲಿತಾಂಶ ಸಾಧಿಸುವುದು ಇಲಾಖೆಯ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಜಲಸಂರಕ್ಷಣಾ ಮೂಲಸೌಕರ್ಯವನ್ನು ಬಲಪಡಿಸುವ ಮೂಲಕ ಕೃಷಿ ಅಭಿವೃದ್ಧಿ, ಅಂತರ್ಜಲ ವೃದ್ಧಿ ಹಾಗೂ ಗ್ರಾಮೀಣ ಪ್ರದೇಶಗಳ ದೀರ್ಘಕಾಲೀನ ಜಲ ಭದ್ರತೆಗೆ ವಿಶೇಷ ಆದ್ಯತೆ ನೀಡಲಾಗಿದೆ.
ಪ್ರತಿಯೊಂದು ಹನಿ ಮಳೆಯೂ ಸದ್ಬಳಕೆಯಾಗಲಿ
ಕಲ್ಯಾಣ ಕರ್ನಾಟಕದಲ್ಲಿ ಬೀಳುವ ಮಳೆಯ ಪ್ರತಿಯೊಂದು ಹನಿಯನ್ನೂ ಸಮರ್ಥವಾಗಿ ಬಳಸಿಕೊಳ್ಳಬೇಕು. ಕೇವಲ ನೀರನ್ನು ಸಂಗ್ರಹಿಸುವುದಷ್ಟೇ ನಮ್ಮ ಗುರಿಯಲ್ಲ. ಅಂತರ್ಜಲವನ್ನು ಪುನಶ್ಚೇತನಗೊಳಿಸಿ ರೈತರಿಗೆ ದೀರ್ಘಕಾಲೀನ ಜಲ ಭದ್ರತೆ ಒದಗಿಸುವುದು ನಮ್ಮ ಉದ್ದೇಶವಾಗಿದೆ ಎಂದು ಸಚಿವ ಡಾ. ಅಜಯ್ ಧರ್ಮಸಿಂಗ್ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.