
ಮೈಸೂರು, 27 ನವೆಂಬರ್ (ಹಿ.ಸ.):
ಸಂತಶ್ರೇಷ್ಠ ಕನಕದಾಸರು ತಮ್ಮ ಸಾಹಿತ್ಯ, ಕೀರ್ತನೆಗಳು ಹಾಗೂ ತತ್ವಪದಗಳ ಮೂಲಕ ಸಮಾಜದಲ್ಲಿನ ಅಸಮಾನತೆ, ಜಾತಿ ವ್ಯವಸ್ಥೆ ಮತ್ತು ಮೌಢ್ಯಗಳನ್ನು ಪ್ರಶ್ನಿಸಿ ಸಮಾನತೆ, ಮಾನವೀಯತೆ ಹಾಗೂ ಸಾಮಾಜಿಕ ನ್ಯಾಯದ ಆಶಯಗಳನ್ನು ಸಾರಿದ ಮಹಾನ್ ಸಮಾಜ ಸುಧಾರಕರು ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಮೈಸೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು ಮಹಾನಗರ ಪಾಲಿಕೆ ಹಾಗೂ ಸಂತ ಶ್ರೀ ಕನಕದಾಸರ ಜಯಂತೋತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಿದ್ದ ಸಂತಕವಿ ಶ್ರೀ ಕನಕದಾಸರ 539ನೇ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ, ಕನಕದಾಸರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಕನಕದಾಸರ ಸಾಹಿತ್ಯ ಕೇವಲ ಭಕ್ತಿಯ ಅಭಿವ್ಯಕ್ತಿಯಾಗಿರದೆ ಸಾಮಾಜಿಕ ಪರಿವರ್ತನೆಗೆ ದಾರಿದೀಪವಾಗಿದೆ. ಅವರು ಸಾರಿದ ಸಮಾನತೆ, ಸಹಬಾಳ್ವೆ, ಮಾನವೀಯತೆ ಮತ್ತು ಸಾಮಾಜಿಕ ನ್ಯಾಯದ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ. ಅವರ ಚಿಂತನೆಗಳು ಕೇವಲ ಜಯಂತಿ ಆಚರಣೆಗಳಿಗೆ ಸೀಮಿತವಾಗದೆ ಪ್ರತಿಯೊಬ್ಬರ ಬದುಕಿನ ಭಾಗವಾಗಬೇಕು. ಈ ನಿಟ್ಟಿನಲ್ಲಿ ಕನಕದಾಸರ ಕೀರ್ತನೆಗಳು ಮತ್ತು ವಿಚಾರಧಾರೆಗಳನ್ನು ಮನೆಮನೆಗೂ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು.
ತಮ್ಮ ತಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 2014ರಲ್ಲಿ ಕನಕದಾಸರ ಸಾಹಿತ್ಯ ಹಾಗೂ ಕೀರ್ತನೆಗಳನ್ನು ನಾಡಿನ ಜನರಿಗೆ ಮತ್ತಷ್ಟು ವ್ಯಾಪಕವಾಗಿ ಪರಿಚಯಿಸುವ ಉದ್ದೇಶದಿಂದ 1.80 ಕೋಟಿ ರೂಪಾಯಿ ಅನುದಾನ ಒದಗಿಸಿದ್ದರು. ಇಂತಹ ಪ್ರಯತ್ನಗಳು ನಾಡಿನ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಲು ಸಹಕಾರಿಯಾಗಲಿವೆ ಎಂದು ಸ್ಮರಿಸಿದರು.
ಕನಕದಾಸರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾನತೆ ಮತ್ತು ಸೌಹಾರ್ದತೆಯ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಕಾಗಿನೆಲೆ ಕನಕಗುರುಪೀಠದ ಪರಮಪೂಜ್ಯ ಶ್ರೀ ಶ್ರೀ ಡಾ. ಶಿವಾನಂದಪುರಿ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ಡಾ. ಡಿ. ತಿಮ್ಮಯ್ಯ, ಮಾಜಿ ಶಾಸಕ ಹಾಗೂ ಸಂತ ಶ್ರೀ ಕನಕದಾಸರ ಜಯಂತೋತ್ಸವ ಸಮಿತಿ ಅಧ್ಯಕ್ಷ ಎಂ.ಕೆ. ಸೋಮಶೇಖರ್, ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬೀರಿಹುಂಡಿ ಬಸವಣ್ಣ, ನಿವೃತ್ತ ಶಿಕ್ಷಣಾಧಿಕಾರಿ ಹಾಗೂ ಹರಿಕಥಾ ವಿದ್ವಾಂಸ ಎಂ.ಬಿ. ನಿಂಗಪ್ಪ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತ ಎನ್. ವಿಷ್ಣುವರ್ಧನ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಎಂ.ಡಿ. ಸುದರ್ಶನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.