
ಬಾಗಲಕೋಟೆ , 27 ನವೆಂಬರ್ (ಹಿ.ಸ.)
ರಬಕವಿ–ಬನಹಟ್ಟಿ ತಾಲೂಕಿನ ಬನಹಟ್ಟಿ ನಗರದಲ್ಲಿರುವ ಇಂದಿರಾ ಕ್ಯಾಂಟೀನ್ಗೆ ಶಾಸಕ ಸಿದ್ದು ಸವದಿ ಅವರು ದಿಢೀರ್ ಭೇಟಿ ನೀಡಿ ಆಹಾರದ ಗುಣಮಟ್ಟ, ಸ್ವಚ್ಛತೆ ಹಾಗೂ ಕ್ಯಾಂಟೀನ್ನ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದರು.
ಇಂದಿರಾ ಕ್ಯಾಂಟೀನ್ನಲ್ಲಿ ಸಾರ್ವಜನಿಕರಿಗೆ ವಿತರಿಸಲಾಗುತ್ತಿರುವ ಆಹಾರದ ಗುಣಮಟ್ಟವನ್ನು ಪರಿಶೀಲಿಸಿದ ಶಾಸಕರು, ಆಹಾರ ತಯಾರಿಕೆ ಮತ್ತು ವಿತರಣೆಯಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸರ್ಕಾರದ ಉದ್ದೇಶದಂತೆ ಬಡವರು, ಕಾರ್ಮಿಕರು ಹಾಗೂ ಸಾಮಾನ್ಯ ಜನರಿಗೆ ಉತ್ತಮ ಗುಣಮಟ್ಟದ ಆಹಾರ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಆಹಾರ ವಿತರಣೆಯಲ್ಲಿ ನಿಗದಿತ ಪ್ರಮಾಣದಂತೆ ಗ್ರಾಂ ಲೆಕ್ಕದಲ್ಲಿ ಆಹಾರ ನೀಡಲಾಗುತ್ತಿಲ್ಲ ಎಂಬ ವಿಚಾರದ ಕುರಿತು ಅಧಿಕಾರಿಗಳಿಂದ ಮಾಹಿತಿ ಕೇಳಿದರು. ಆಹಾರ ವಿತರಣೆಯ ಪ್ರಮಾಣ, ಗುಣಮಟ್ಟ ಹಾಗೂ ಸರ್ಕಾರದ ನಿಯಮಾವಳಿಗಳ ಪಾಲನೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಇಂದಿರಾ ಕ್ಯಾಂಟೀನ್ಗಳು ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಆಹಾರ ಒದಗಿಸುವ ಮಹತ್ವದ ಯೋಜನೆಯಾಗಿದ್ದು, ಇದರ ನಿರ್ವಹಣೆಯಲ್ಲಿ ಯಾವುದೇ ಲೋಪದೋಷಗಳು ಕಂಡುಬರಬಾರದು. ಜನರಿಗೆ ಸಮರ್ಪಕ ಪ್ರಮಾಣದಲ್ಲಿ ಗುಣಮಟ್ಟದ ಆಹಾರ ದೊರೆಯುವಂತೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕರು ಸೂಚಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande